Sunday, November 3, 2024

ಪ್ರತಿಷ್ಠೆ ಪಕ್ಕಕ್ಕಿಟ್ಟು ಖಾಸಗಿ ಸಾರಿಗೆ ಒಕ್ಕೂಟದ ಬೇಡಿಕೆ ಪರಿಶೀಲಿಸಿ: ಕುಮಾರಸ್ವಾಮಿ

ಬೆಂಗಳೂರು : ಖಾಸಗಿ ಸಾರಿಗೆ ಒಕ್ಕೂಟದವರ ಬೇಡಿಕೆಗಳನ್ನು ಪ್ರತಿಷ್ಠೆ ಪಕ್ಕಕ್ಕಿಟ್ಟು ಮಾನವೀಯತೆಯಿಂದ ಪರಿಶೀಲಿಸಬೇಕು ಎಂದು ಬೆಂಗಳೂರು ಬಂದ್​ ಬಗ್ಗೆ ಮಾಜಿ ಮುಖ್ಯಮಂತ್ರಿ ಹೆಚ್​.ಡಿ ಕುಮಾರಸ್ವಾಮಿ ಯವರು ಸರಣಿ ಟ್ವೀಟ್​ ಮಾಡುವ ಮೂಲಕ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಈ ಕುರಿತು ತಮ್ಮ ಎಕ್ಸ್​ ಖಾತೆಯಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಸಾಲಸೋಲ ಮಾಡಿ ಕ್ಯಾಬ್, ಆಟೋ ಓಡಿಸಿಕೊಂಡು ಬದುಕುತ್ತಿದ್ದವರು ಬೀದಿ ಪಾಲಾಗಿದ್ದಾರೆ. ನಿತ್ಯದ ಬದುಕು ಸಾಗಿಸುವುದೇ ದುಸ್ತರ ಎನ್ನುವ ಸ್ಥಿತಿಯಲ್ಲಿ ಅವರಿದ್ದಾರೆ. ಇನ್ನು, ಸರಕಾರಿ ಸಾರಿಗೆಯಷ್ಟೇ ಉತ್ತಮವಾಗಿ ಸೇವೆ ಒದಗಿಸುತ್ತಿರುವ ಖಾಸಗಿ ಬಸ್ ಜಾಲವನ್ನು ಸರಕಾರ ಹಾಳು ಮಾಡಿದೆ. ಅನೇಕರ ಬದುಕಿಗೆ ಗ್ಯಾರಂಟಿ ಇಲ್ಲದಂತೆ ಮಾಡಿದೆ.

ಈ ಬಂದ್ ನಿಂದ ಸರಕಾರಿ ಸಾರಿಗೆಗೆ ಪರ್ಯಾಯವಾಗಿದ್ದ ಖಾಸಗಿ ಸಾರಿಗೆ ಜಾಲ ಸಂಪೂರ್ಣ ಸ್ಥಗಿತವಾಗಿದೆ. ಶಾಲಾ ಮಕ್ಕಳು, ಸಾರ್ವಜನಿಕರು, ವಿಮಾನ ನಿಲ್ದಾಣಕ್ಕೆ ತೆರಳುವವರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹಣ್ಣು, ತರಕಾರಿ ಸೇರಿ ಅಗತ್ಯ ವಸ್ತುಗಳ ಸಾಗಣೆಯಲ್ಲಿ ವ್ಯತ್ಯಯ ಆಗಿದೆ.

ಸರಕಾರವು ಖಾಸಗಿ ಸಾರಿಗೆ ಒಕ್ಕೂಟದವರ ಬೇಡಿಕೆಗಳನ್ನು ಪ್ರತಿಷ್ಠೆ ಪಕ್ಕಕ್ಕಿಟ್ಟು ಮಾನವೀಯತೆಯಿಂದ ಪರಿಶೀಲಿಸಬೇಕು. ಅವರ ಬೇಡಿಕೆಗಳು ಈಡೇರಿಸಲಾಗದ ಅಸಾಧ್ಯ ಡಿಮ್ಯಾಂಡ್ ಗಳಲ್ಲ. ಅವರಿಗೂ ಕುಟುಂಬಗಳಿವೆ, ತಂದೆತಾಯಿ, ಮಕ್ಕಳು ಇರುತ್ತಾರೆ ಎನ್ನುವುದನ್ನು ಸರಕಾರ ಮರೆಯಬಾರದು.

ಕಾಟಾಚಾರಕ್ಕೆ ಕರೆದು ಮಾತನಾಡುವುದಲ್ಲ. ವಾಸ್ತವತೆಗೆ ತಕ್ಕಂತೆ ಕಷ್ಟದಲ್ಲಿರುವ ಅವರಿಗೆ ನೆರವಾಗಬೇಕು. ನುಡಿದಂತೆಯೇ ನಡೆದು, ‘ಗ್ಯಾರಂಟಿ ಬಾಧಿತರ’ ಬದುಕಿಗೆ ಪರಿಹಾರ ಒದಗಿಸಬೇಕು ಎನ್ನುವುದು ನನ್ನ ಆಗ್ರಹ.ತಕ್ಷಣವೇ ಬಂದ್ ನಿರತರನ್ನು ಮುಖ್ಯಮಂತ್ರಿಗಳದ ಸಿದ್ದರಾಮಯ್ಯ, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಯವರು ಕರೆದು ಮಾತನಾಡಬೇಕು ಎಂದು ಪ್ರತಿಕ್ರಿಯಿಸಿದ್ದಾರೆ.

RELATED ARTICLES

Related Articles

TRENDING ARTICLES