ಬೆಂಗಳೂರು : ರಾಜ್ಯದಲ್ಲಿ ಬರದಿಂದ ಅಂದಾಜು 40 ಲಕ್ಷ ಹೆಕ್ಟೇರ್ ಕೃಷಿ ಬೆಳೆ ಮತ್ತು ಎರಡು ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ತೋಟಗಾರಿಕೆ ಬೆಳೆ ಹಾನಿಗೊಳಗಾಗಿದ್ದು, 195 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಮಂಗಳವಾರ ಹೇಳಿದ್ದಾರೆ.
ಪರಿಹಾರ ಕೋರಿ ಕೇಂದ್ರ ಸರ್ಕಾರಕ್ಕೆ ಒಂದು ವಾರದೊಳಗೆ ಮನವಿ ಪತ್ರ ಸಲ್ಲಿಸಲಾಗುವುದು ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ನಿಯಮಗಳ ಪ್ರಕಾರ ಒಟ್ಟು 5000 ರಿಂದ 6000 ಕೋಟಿ ರೂಪಾಯಿ ಪರಿಹಾರ ಪಡೆಯಲು ಅವಕಾಶವಿದೆ ಎಂದು ಸಚಿವರು ತಿಳಿಸಿದ್ದಾರೆ.
ಇದನ್ನೂ ಓದಿ: ತಮಿಳುನಾಡಿಗೆ ನೀರು ಬಿಟ್ಟು ಕೋರ್ಟ್ ನಲ್ಲಿ ವಾದ ಮಾಡಲು ಏನಿದೆ? : ಬೊಮ್ಮಾಯಿ
ರಾಜ್ಯಾದ್ಯಂತ ಈ ವರ್ಷ ತೀವ್ರ ಮಳೆಯ ಕೊರತೆ ಉಂಟಾಗಿದ್ದು, ಈಗಾಗಲೇ 195 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ. ಅಂದಾಜು 40 ಲಕ್ಷ ಹೆಕ್ಟೇರ್ ಕೃಷಿ ಬೆಳೆ ಹಾನಿಯಾಗಿದ್ದು, 2 ಲಕ್ಷ ಹೆಕ್ಟೇರ್ ತೋಟಗಾರಿಕೆ ಬೆಳೆ ಹಾನಿಯಾಗಿದೆ ಎಂದು ಕೃಷ್ಣ ಬೈರೇಗೌಡ ಅವರು ವಿವರಿಸಿದ್ದಾರೆ.
ಬರಪೀಡಿತ ತಾಲೂಕುಗಳಿಗೆ ಸಂಬಂಧಿಸಿದಂತೆ ಕೇಂದ್ರಕ್ಕೆ ಸಲ್ಲಿಸಬೇಕಾದ ಮನವಿ ಪತ್ರವನ್ನು ತ್ವರಿತವಾಗಿ ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಸಚಿವರು ಸುದ್ದಿಗಾರರಿಗೆ ತಿಳಿಸಿದ್ದಾರೆ.