ಬೆಂಗಳೂರು : 2024ರ ಲೋಕಸಭಾ ಚುನಾವಣೆಗಾಗಿ ಕರ್ನಾಟಕದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಮೈತ್ರಿಗೆ ಭರ್ಜರಿ ಸಿದ್ದತೆ ನಡೆಸುತ್ತಿದ್ದು, ಬಿಜೆಪಿ ನಾಯಕರ ಜೊತೆ ಮೈತ್ರಿ ಕುರಿತು ಅಂತಿಮ ಹಂತದ ಚರ್ಚೆ ಮಾಡಲು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ದಿಲ್ಲಿಗೆ ತೆರಳಿದ್ದಾರೆ.
ನಾಳೆ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಅಂತಿಮಗೊಳ್ಳುವ ಸಾಧ್ಯತೆ ಇದೆ. ಸೀಟು ಹಂಚಿಕೆಯ ಬಗ್ಗೆಯೂ ಅಂತಿಮ ನಿರ್ಧಾರ ಹೊರಬೀಳುವ ನಿರೀಕ್ಷೆ ಇದೆ. ಈ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ.
ಈಗಾಗಲೇ ಹಲವು ದಿನಗಳ ಹಿಂದೆಯೇ ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ ವೇಳೆ ಉಭಯ ಪಕ್ಷಗಳ ನಡುವೆ ಮೈತ್ರಿ ಕುರಿತಂತೆ ಮಾತುಕತೆ ನಡೆದಿದೆ. ಅಲ್ಲದೇ ಕ್ಷೇತ್ರ ಹಂಚಿಕೆ ಕುರಿತು ಚರ್ಚೆಯಾಗಿದೆ. ಇದೀಗ ಮುಂದಿನ ಹಂತದ ಮಾತುಕತೆಗಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರು ಅಮಿತ್ ಶಾ ಜೊತೆಗೆ ಚರ್ಚಿಸಿ ಅಂತಿಮಗೊಳಿಸಲಿದ್ದಾರೆ ಎನ್ನಲಾಗಿದೆ.
ಇನ್ನೂ ಹೆಚ್.ಡಿ. ದೇವೇಗೌಡ ಅವರು ನಾಳೆ ಬೆಳಗ್ಗೆ 9.30ಕ್ಕೆ ಸುದ್ದಿಗೋಷ್ಠಿ ನಡೆಸಲಿದ್ದು, ದೋಸ್ತಿ ಬಗ್ಗೆ ಮಾಹಿತಿ ನೀಡಲಿದ್ದಾರೆ.