ಬೆಂಗಳೂರು : ಕಾವೇರಿ ವಿಷಯ ಕೋರ್ಟಿನಲ್ಲಿ ಬಗೆಹರಿಯುವುದಿಲ್ಲ ಅಂತ ನಾನು ಹೇಳಿದ್ದೆ. ಈಗ ತಮಿಳುನಾಡಿಗೆ ಅನುಕೂಲವಾಗಿದೆ, ನಮಗೆ ಅನ್ಯಾಯವಾಗಿದೆ. ಈ ತಿಕ್ಕಾಟ ಸಾಗುತ್ತಿರುವ ದಿಕ್ಕು ನೋಡಿದರೆ ಒಕ್ಕೂಟ ವ್ಯವಸ್ಥೆಗೆ ಗೌರವ ಸಿಗುವಂತಿಲ್ಲ. ಬಹಳ ನೋವಿನಿಂದ ಈ ಮಾತು ಹೇಳುತ್ತಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ.
ಈ ಕುರಿತು Xನಲ್ಲಿ ಪೋಸ್ಟ್ ಮಾಡಿರುವ ಹೆಚ್ಡಿಕೆ, ರಾಜ್ಯಸಭೆಯಲ್ಲಿ ಹೆಚ್.ಡಿ ದೇವೇಗೌಡ ಅವರು ತಮ್ಮ ಇಳಿ ವಯಸ್ಸಿನಲ್ಲಿಯೂ ಕಾವೇರಿ ಬಗ್ಗೆ ದನಿ ಎತ್ತಿದರು. ಆದರೆ, ಮಲ್ಲಿಕಾರ್ಜುನ ಖರ್ಗೆ ಅವರು ಮೌನವಾಗಿದ್ದರು. ಈ ಮೌನ ನನಗೆ ಅಚ್ಚರಿ ಉಂಟು ಮಾಡಿದೆ. ಅವರು ಕಾಂಗ್ರೆಸ್ ಅಧ್ಯಕ್ಷರು ಹೌದು. ಆದರೆ, ಕರ್ನಾಟಕದ ಹಿತದ ಬಗ್ಗೆ ಅವರ ನಿಲುವೇನು? ಎಂದು ಪ್ರಶ್ನಿಸಿದ್ದಾರೆ.
ನೀರಾವರಿ ಬಗ್ಗೆ ಕನಿಷ್ಠ ಜ್ಞಾನ, ತಿಳಿವಳಿಕೆ ಇಲ್ಲದವರು ಅಧಿಕಾರದಲ್ಲಿದ್ದರೆ ಏನಾಗುತ್ತದೆ ಎನ್ನುವುದಕ್ಕೆ ಕಾವೇರಿ ಬಿಕ್ಕಟ್ಟು ಸ್ಪಷ್ಟ ಉದಾಹರಣೆ. ಸುಪ್ರೀಂಕೋರ್ಟ್ ಆದೇಶ ನಿಜಕ್ಕೂ ದುರದೃಷ್ಟಕರ. ಆದರೆ, ಇಲ್ಲಿ ನ್ಯಾಯಾಲಯವನ್ನು ದೂರುವಂತಿಲ್ಲ. ಹೆಜ್ಜೆ ಹೆಜ್ಜೆಗೂ ತಪ್ಪು ಮಾಡಿದ್ದು ಕಾಂಗ್ರೆಸ್ ಸರ್ಕಾರ. ಈ ಮಾತನ್ನು ನಾನು ಸರ್ವಪಕ್ಷ ಸಭೆಯಲ್ಲೇ ಒತ್ತಿ ಹೇಳಿದ್ದೆ. ಹೇಳಿದ ಮಾತನ್ನು ಕೇಳಿಸಿಕೊಳ್ಳುವ ಸೌಜನ್ಯ, ಜನಪರ ಕಾಳಜಿ ಸರ್ಕಾರಕ್ಕೆ ಇರಲೇ ಇಲ್ಲ ಎಂದು ಕುಟುಕಿದ್ದಾರೆ.
ಬೆಂಗಳೂರಿಗೆ ಎಲ್ಲಿಂದ ಬರುತ್ತೆ ನೀರು?
ಕೆಆರ್ಎಸ್ನಲ್ಲಿ ಈಗ ಇರುವುದೇ 20 ಟಿಎಂಸಿಗೂ ಕಡಿಮೆ ನೀರು. 3 ದಿನಕ್ಕೆ ಒಂದು ಟಿಎಂಸಿ ಹರಿದು ಹೋಗುತ್ತದೆ. ದಿನಕ್ಕೆ 5,000 ಕ್ಯೂಸೆಕ್ ಹರಿದರೆ 15 ದಿನಕ್ಕೆ 7 ಟಿಎಂಸಿ ಖಾಲಿ. ಆಗ ಉಳಿಯುವುದು 13 ಟಿಎಂಸಿ. ಇದರಲ್ಲಿ ಡೆಡ್ ಸ್ಟೋರೇಜ್ 7 ಟಿಎಂಸಿ ಇರಬೇಕು. ಇನ್ನು ಉಳಿಯೋದು ಎಷ್ಟು? ಬೆಂಗಳೂರಿಗೆ ಇನ್ನೂ 9 ತಿಂಗಳಿಗೆ ಕುಡಿಯಲಿಕ್ಕೆ ಕನಿಷ್ಠ 13 ಟಿಎಂಸಿ ಬೇಕು. ಎಲ್ಲಿಂದ ಬರುತ್ತೆ ಆ ನೀರು? ಎಂದು ಕಿಡಿಕಾರಿದ್ದಾರೆ.
ಜನಹಿತಕ್ಕಿಂತ ರಾಜಕೀಯ ಹಿತವೇ ಮುಖ್ಯ
ಆದೇಶ ಪಾಲಿಸಲು ಕರ್ನಾಟಕ, ಅನುಭವಿಸಲು ತಮಿಳುನಾಡು ಎನ್ನುವ ಮಾತು ಮತ್ತೊಮ್ಮೆ ಸಾಬೀತಾಗಿದೆ. ಇದಕ್ಕೆಲ್ಲ ಕಾಂಗ್ರೆಸ್ ಸರ್ಕಾರವೇ ನೇರ ಕಾರಣ. ರಾಜ್ಯ ಸರ್ಕಾರಕ್ಕೆ ಜನಹಿತಕ್ಕಿಂತ ರಾಜಕೀಯ ಹಿತವೇ ಮುಖ್ಯವಾಗಿದೆ. ತಮಿಳುನಾಡಿನ ಜತೆ ಆ ಪಕ್ಷದ ರಾಜಕೀಯ ಹಿತಾಸಕ್ತಿ ತಳುಕು ಹಾಕಿಕೊಂಡ ಕಾರಣಕ್ಕೆ ಕಾವೇರಿ ಹಿತವನ್ನು ವ್ಯವಸ್ಥಿತವಾಗಿ ಬಲಿ ಕೊಡಲಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.