Wednesday, January 22, 2025

ಭಾಷಾತೀತವಾಗಿ, ಜಾತ್ಯಾತೀತವಾಗಿ ಎಲ್ಲರೂ ಬಂದ್‌ಗೆ ಬೆಂಬಲ ನೀಡಿ: ಮು.ಚಂದ್ರು ಮನವಿ

ಬೆಂಗಳೂರು : ಕಾವೇರಿ ನೀರಿಗಾಗಿ ಸೆಪ್ಟೆಂಬರ್ 26ರಂದು ಬೆಂಗಳೂರು ಬಂದ್‌ಗೆ ಕರೆ ನೀಡಲಾಗಿದ್ದು, ಭಾಷಾತೀತವಾಗಿ, ಜಾತ್ಯಾತೀತವಾಗಿ ಎಲ್ಲರೂ ಬಂದ್‌ಗೆ ಬೆಂಬಲ ನೀಡಬೇಕು. ಎಲ್ಲರಿಗೂ ನೀರು ಅನಿವಾರ್ಯವಾಗಿದ್ದು, ಎಲ್ಲರೂ ಬೀದಿಗಿಳಿಯಬೇಕು ಎಂದು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಡಾ. ಮುಖ್ಯಮಂತ್ರಿ ಚಂದ್ರು ಮನವಿ ಮಾಡಿದರು.

ಆಮ್‌ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಡಾ. ಮುಖ್ಯಮಂತ್ರಿ ಚಂದ್ರು ಹಾಗೂ ಕುರುಬೂರು ಶಾಂತಕುಮಾರ್ ಅವರ ನೇತೃತ್ವದ ಕರ್ನಾಟಕ ಜಲ ಸಂರಕ್ಷಣಾ ಸಮಿತಿ, ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ಕರೆ ನೀಡಿರುವ ಬೆಂಗಳೂರು ಬಂದ್‌ಗೆ 150ಕ್ಕೂ ಹೆಚ್ಚು ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ.

ಪಕ್ಷಾತೀತವಾಗಿ ಎಲ್ಲರೂ ಬಂದ್‌ಗೆ ಬೆಂಬಲ ನೀಡಿದ್ದಾರೆ. ನೀರು ಖಾಲಿಯಾದ ಮೇಲೆ ಹೋರಾಟ ಮಾಡಿ ಪ್ರಯೋಜನ ಇಲ್ಲ. ತಕ್ಷಣವೇ ತಮಿಳುನಾಡಿಗೆ ಹರಿಸುತ್ತಿರುವ ನೀರನ್ನು ನಿಲ್ಲಿಸಬೇಕು, ಅಧಿವೇಶನ ಕರೆದು ಚರ್ಚೆ ನಡೆಸಿ ಸಂಕಷ್ಟ ಸೂತ್ರ ಜಾರಿ ಮಾಡುವವರೆಗೆ ನೀರು ಬಿಡುವುದಿಲ್ಲ ಎಂದು ನಿರ್ಣಯ ತೆಗೆದುಕೊಳ್ಳಬೇಕು.

ಕಾವೇರಿ ನೀರು ನಿರ್ವಹಣಾ ಮಂಡಳಿ ಮತ್ತು ಕಾವೇರಿ ಪ್ರಾಧಿಕಾರದ ಅಧಿಕಾರಿಗಳು ರಾಜಕೀಯ ಒತ್ತಡಕ್ಕೆ ಮಣಿದು ವಾಸ್ತವ ಅರಿಯದೇ ಆದೇಶ ಮಾಡುತ್ತಿದ್ದು, ಇವುಗಳನ್ನು ರದ್ದು ಮಾಡಿ, ಸ್ವತಂತ್ರವಾಗಿ ಕಾರ್ಯ ನಿರ್ವಹಿಸುವ ಮಂಡಳಿ ರಚಿಸಲು ಒತ್ತಾಯಿಸಿ ಬಂದ್‌ಗೆ ಕರೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಚಂದ್ರು ಮಾಹಿತಿ ನೀಡಿದರು.

150ಕ್ಕೂ ಹೆಚ್ಚು ಸಂಘಟನೆಗಳ ಬೆಂಬಲ : 

ಎಪಿಎಂಸಿ ಕಾರ್ಯಕರ್ತರ ಸಂಘ, ಸಮತಾ ಸೈನಿಕ ದಳ, ಉದ್ಯಮಿಗಳ ಸಂಸ್ಥೆ, ಕರ್ನಾಟಕ ಸಾಂಸ್ಕೃತಿಕ ವೇದಿಕೆ, ವಿವಿಧ ನೌಕರರ ಸಂಘ, ಬಿಎಂಟಿಸಿ ಚಾಲಕರ ಸಂಘ, ರೈತಪರ ಸಂಘಟನೆಗಳು, ಕನ್ನಡ ಪರ ಹೋರಾಟಗಾರರ ಸಂಘಟನೆಗಳು, ಆಟೋ ಚಾಲಕರ ಸಂಘಟನೆಗಳು, ಟ್ಯಾಕ್ಸಿ ಕ್ಯಾಬ್ ಚಾಲಕರ ಸಂಘಟನೆಗಳು, ಸಾರಿಗೆ ಸಂಘಟನೆಗಳು, ಐಟಿಬಿಟಿ ಸಂಘಟನೆಗಳು, ಕಾರ್ಮಿಕ ಸಂಘಟನೆಗಳು, ವಿದ್ಯಾರ್ಥಿ ಸಂಘಗಳು, ಕಲಾವಿದರ ಸಂಘಗಳು, ಹೋಟೆಲ್ ಮಾಲಿಕರ ಸಂಘಟನೆಗಳು, ರಾಜಕೀಯ ಪಕ್ಷಗಳು, ಬೆಂಗಳೂರು ರಸ್ತೆ ಬದಿ ವ್ಯಾಪಾರಿಗಳ ಸಂಘ, ಬಿಬಿಎಂಪಿ ನೌಕರರ ಸಂಘ ಸೇರಿದಂತೆ 150ಕ್ಕೂ ಹೆಚ್ಚು ಸಂಘಟನೆಗಳು ಬೆಂಬಲ ನೀಡಿದ್ದಾರೆ ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಹೇಳಿದರು.

ಸೆಪ್ಟೆಂಬರ್ 26ರಂದು ಬೆಳಗ್ಗೆ 11 ಗಂಟೆಗೆ ಟೌನ್‌ಹಾಲ್ ಬಳಿ ಸೇರಲಾಗುವುದು. ಅಲ್ಲಿಂದ ಮೆರವಣಿಗೆ ಮೂಲಕ ಫ್ರೀಡಂ ಪಾರ್ಕ್‌ಗೆ ಬಂದು ಸೇರಲಾಗುವುದು. ಅಲ್ಲಿ ಪ್ರತಿಭಟನೆ ನಡೆಸಲಾಗುವುದು. ಸಿಎಂ ಸಿದ್ದರಾಮಯ್ಯ ಅವರಿಗೆ ಒತ್ತಾಯ ಪತ್ರ ನೀಡಲಾಗುವುದು. ಅವರು ಸರಿಯಾಗಿ ಸ್ಪಂದಿಸದಿದ್ದರೆ, ಹೋರಾಟ ತೀವ್ರಗೊಳಿಸಲಾಗುವುದು. ರಾಮನಗರ, ಮಂಡ್ಯ, ಮಳವಳ್ಳಿ, ಟಿ ನರಸೀಪುರ ಸೇರಿದಂತೆ ಹಲವು ಕಡೆಗಳಲ್ಲಿ ಬಂದ್ ಮಾಡುವ ಮೂಲಕ ಬೆಂಬಲ ವ್ಯಕ್ತಪಡಿಸಲಿದ್ದಾರೆ ಎಂದರು.

RELATED ARTICLES

Related Articles

TRENDING ARTICLES