ಬೆಂಗಳೂರು : ತಮಿಳುನಾಡಿಗೆ ಕಾವೇರಿ ನೀರು ಹರಿಸುವುತ್ತಿರುವುದನ್ನು ವಿರೋಧಿಸಿ ಬೆಂಗಳೂರು ಬಂದ್ಗೆ ಕರೆ ಕೊಟ್ಟಿದ್ದು, ಇಂದಿನ ಬಂದ್ಗೆ ಬಿಎಂಆರ್ಸಿಎಲ್ ನೈತಿಕ ಬೆಂಬಲ ಸೂಚಿಸಿದೆ.
ಬಂದ್ ನಡುವೆಯೂ ನಮ್ಮ ಮೇಟ್ರೋ ಎಂದಿನಂತೆ ಇರಲಿದೆ. ಬೆಳಗ್ಗೆಯಿಂದಲೇ ನಮ್ಮ ಮೇಟ್ರೋ ಓಡಾಟ ಆರಂಭವಾಗಿದೆ. ಇನ್ನೂ ಕೆ.ಆರ್. ಮಾರ್ಕೆಟ್ ವ್ಯಾಪಾರಿಗಳು ಇಂದಿನ ಬಂದ್ಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.
ಬಂದ್ ಹಿನ್ನೆಲೆಯಲ್ಲಿ ಸಾರಿಗೆ ವ್ಯವಸ್ಥೆಯಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ. ಹೀಗಾಗಿ, ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಶಿಕ್ಷಕರು, ಉಪನ್ಯಾಸಕರಿಗೂ ರಜೆ ಘೋಷಿಸಿ ಜಿಲ್ಲಾಧಿಕಾರಿ ದಯಾನಂದ್ ಆದೇಶ ಹೊರಡಿಸಿದ್ದಾರೆ.
ಫ್ರೀಡಂಪಾರ್ಕ್ನಲ್ಲಿ ಮಾತ್ರ ಪ್ರತಿಭಟನೆ
ಬಂದ್ಗೆ ಕರೆ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಫ್ರೀಡಂ ಪಾರ್ಕ್ನಲ್ಲಿ ಮಾತ್ರ ಪ್ರತಿಭಟನೆ ನಡೆಸಲು ಅವಕಾಶ ನೀಡಲಾಗಿದೆ. ಫ್ರೀಡಂ ಪಾರ್ಕ್ ಹೊರತುಪಡಿಸಿ ಬೇರೆ ಕಡೆ ಧರಣಿಗೆ ಅವಕಾಶವಿಲ್ಲ. ನಗರದ ವಿವಿಧೆಡೆ ಪ್ರತಿಭಟನೆ ನಡೆಸಲು ಮುಂದಾದರೆ ವಶಪಡಿಸಿಕೊಳ್ಳಲು ಪೊಲೀಸರು ನಿರ್ಧರಿಸಿದ್ದಾರೆ.
ಇಂದು ಕರ್ನಾಟಕ ಜಲ ಸಂರಕ್ಷಣಾ ಸಮಿತಿ ಕರೆ ಕೊಟ್ಟಿರೋ ಬೆಂಗಳೂರು ಬಂದ್ ಗೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದ್ ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಆದ್ರೆ ವಿಮಾನ ನಿಲ್ದಾಣದ ಪ್ರಯಾಣಿಕರು ಮಾತ್ರ ಆತಂಕಕ್ಕೆ ಒಳಪಟ್ಟು ಸಮಯಕ್ಕೂ ಮುಂಚಿತವಾಗಿ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ.