Wednesday, January 22, 2025

ಹಳೇ ಬಾಕಿ ಸರಿದೂಗಿಸಲು 3,000 ಕ್ಯೂಸೆಕ್ ನೀರು ಬಿಡಬೇಕಂತೆ : ಸಿದ್ದರಾಮಯ್ಯ

ಬೆಂಗಳೂರು : ಹಳೇ ಬಾಕಿ ಸರಿದೂಗಿಸಬೇಕು ಎಂದು 3,000 ಕ್ಯೂಸೆಕ್ ನೀರು ಬಿಡಲು ಆದೇಶಿಸಿದ್ದಾರೆ. ನಿರ್ವಹಣಾ ಮಂಡಳಿ ಹಾಗೂ ಸುಪ್ರೀಂಕೋರ್ಟ್ ಮುಂದೆ ಮರುಪರಿಶೀಲನಾ ಅರ್ಜಿ ಹಾಕುವಂತೆಯೂ ಸೂಚಿಸಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮಿಳುನಾಡಿಗೆ 3,000 ಕ್ಯೂಸೆಕ್ ನೀರು ಬಿಡುವ ಬಗ್ಗೆ ಎರಡೂ ಸಮಿತಿಗಳ ಮುಂದೆ ನಮ್ಮಲ್ಲಿ ನೀರು ಇಲ್ಲ ಹಾಗಾಗಿ ನೀರು ಬಿಡಲು ಸಾಧ್ಯವಿಲ್ಲ ಅಂತ ವಾದ ಮಂಡಿಸಲಾಗಿದೆ ಎಂದರು.

ಮೇಕೆದಾಟು ಯೋಜನೆಯ ಬಗ್ಗೆ ಸುಪ್ರೀಂಕೋರ್ಟ್ ನಲ್ಲಿ ಪ್ರಸ್ತಾಪ ಮಾಡಬೇಕು. ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ತೊಂದರೆ ಇಲ್ಲ. ಹಾಗಾಗಿ, ತೀವ್ರವಾಗಿ ಇದನ್ನು ಮಂಡಿಸಬೇಕು ಅಂತ ಸಲಹೆ ನೀಡಿದ್ದಾರೆ. ಮೇಕೆದಾಟು ಬ್ಯಾಲೆನ್ಸಿಂಗ್ ಜಲಾಶಯವಾಗಿ 67 ಟಿಎಂಸಿ ನೀರು ಸಂಗ್ರಹ ಮಾಡುವ ಸಾಮರ್ಥ್ಯ ಹೊಂದಲಿದೆ. ವಿದ್ಯುತ್ ಹಾಗೂ ಕುಡಿಯುವ ನೀರಿಗೆ ಅದನ್ನು ಬಳಸಲಾಗುವುದು. ಸಂಕಷ್ಟ ಬಂದಾಗ ತಮಿಳುನಾಡಿಗೆ ನೀರು ಬಿಡಬಹುದು ಅಂತ ಸಲಹೆ ನೀಡಿದ್ದಾರೆ ಎಂದು ತಿಳಿಸಿದರು.

ನಾಳೆಯೇ ಮರುಪರಿಶೀಲನಾ ಅರ್ಜಿ

ಕಾವೇರಿ ನೀರು ನಿರ್ವಹಣಾ ಮಂಡಳಿ ಹಾಗೂ ಸುಪ್ರೀಂಕೋರ್ಟ್ ಮುಂದೆ ನಾಳೆಯೇ ನಮ್ಮ ಬಳಿ ನೀರು ಇಲ್ಲ, ನೀರು ಬಿಡಲು ಸಾಧ್ಯವಿಲ್ಲ ಅಂತ ಮರುಪರಿಶೀಲನಾ ಅರ್ಜಿ ಹಾಕಲಾಗುವುದು. ಸರ್ವೋಚ್ಛ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರು, ಮಾಜಿ ಅಡ್ವೊಕೇಟ್ ಜನರಲ್‌ಗಳು ಸಭೆಯಲ್ಲಿ ಭಾಗವಹಿಸಿದ್ದರು. ಅವರ ಅನುಭವದ ಆಧಾರದ ಮೇಲೆ ಕೆಲವು ಅಭಿಪ್ರಾಯ, ಸಲಹೆಗಳನ್ನು ನೀಡಿದ್ದಾರೆ. ಅವರ ಸಲಹೆಗಳನ್ನು ಪರಿಗಣಿಸಿ ಮುಂದಿನ ತೀರ್ಮಾನಗಳನ್ನು ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು.

ಜಲವಿವಾದಗಳ ಬಗ್ಗೆ ಸಲಹೆ, ಸೂಚನೆ

ಮುಖ್ಯವಾಗಿ ರಾಜ್ಯದ ನೀರಾವರಿಗೆ ಸಂಬಂಧಿಸಿದಂತೆ ಸರ್ಕಾರಕ್ಕೆ ಪರಿಣಿತರ ಸಲಹಾ ಸಮಿತಿಯನ್ನು ರಚಿಸಿ, ಡಾಟಾ ಸಂಗ್ರಹ, ಸಲಹೆ ನೀಡುವ ಕಾರ್ಯವನ್ನು ಮಾಡಬೇಕು. ಅಂತರರಾಜ್ಯ ಜಲವಿವಾದಗಳ ಬಗ್ಗೆ ಸರ್ಕಾರಕ್ಕೆ ಸಲಹೆ ಸೂಚನೆ, ಕಾನೂನು ತಂಡಕ್ಕೆ ಮಾಹಿತಿ ನೀಡಲು ಕೂಡ ಸಮಿತಿ ಅಗತ್ಯ ಎನ್ನುವ ಸಲಹೆ ಬಂದಿದೆ. ಇದರಂತೆ ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.

RELATED ARTICLES

Related Articles

TRENDING ARTICLES