Sunday, December 22, 2024

ಸಿಎಂ ನಾಲಿಗೆಗೆ ಮೂಳೆ ಇಲ್ಲ, ಸಿದ್ದು ಸುಳ್ಳುಗಳಿಗೂ ಕೊರತೆ ಇಲ್ಲ : ಹೆಚ್​ಡಿ ಕುಮಾರಸ್ವಾಮಿ!

ಬೆಂಗಳೂರು : ಜಾತ್ಯಾತೀತ ಎಂದು ಹೇಳಿಕೊಳ್ಳುವ ಜೆಡಿಎಸ್​ ಕೋಮುವಾದಿ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡಿದ್ದು ಇದೀಗ ಜಾತ್ಯಾತೀತತೇ ಉಳಿದಿದೆಯೇ ಎಂದು ಸಿಎಂ ಸಿದ್ದರಾಮಯ್ಯ ಮಾಡಿರುವ ಟ್ವೀಟ್​ಗೆ ಮಾಜಿ ಸಿಎಂ ಹೆಚ್​. ಡಿ ಕುಮಾರಸ್ವಾಮಿ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ.

ತಮ್ಮ ಎಕ್ಸ್​ ಸಾಮಾಜಿಕ ಜಾಲತಾಣದಲ್ಲಿ ಸರಣಿ ಟ್ವೀಟ್​ ಮಾಡುವ ಮೂಲಕ ರಾಜ್ಯ ಸರ್ಕಾರದ ವಿರುದ್ದ ತಮ್ಮ ಆಕ್ರೋಶವನ್ನು ಹೊರಹಾಕಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಾಲು ಸಾಲು ಪ್ರಶ್ನೆಗಳನ್ನು ಹಾಕಿದ್ದಾರೆ.

ಅವರ ಬೆನ್ನು ಅವರಿಗೆ ಕಾಣುವುದಿಲ್ಲ. ನಾಲಿಗೆಗೂ ಮೂಳೆ ಇರುವುದಿಲ್ಲ. ಸಿಎಂ ಸೀಟಿನಲ್ಲಿ ಕೂತರೂ ‘ಸಿದ್ದಸುಳ್ಳು’ಗಳಿಗೆ ಕೊರತೆಯೇನೂ ಇಲ್ಲ.

‘ಜಾತ್ಯತೀತ ‘ ಎನ್ನುವ ಟ್ಯಾಗ್ ಲೈನ್ ಇಟ್ಟುಕೊಂಡು ಜಾತಿ ಸಭೆಗಳನ್ನು ಮಾಡಿ ಕುಕ್ಕರ್, ಇಸ್ತ್ರೀ ಪೆಟ್ಟಿಗೆ ಹಂಚುವುದು ಜಾತ್ಯತೀತವೇ? ಅಹಿಂದ ಎಂದು ಹೇಳಿಕೊಂಡು ಧರ್ಮಕ್ಕೊಂದು ಸಮಾವೇಶ, ಜಾತಿಗೊಂದು ಸಭೆ ನಡೆಸುವುದು ಜಾತ್ಯತೀತವೇ? ಸ್ವಲ್ಪ ಹೇಳುವಿರಾ @siddaramaiah ನವರೇ?

ಇದನ್ನೂ ಓದಿ: ಸಾಹಿತಿಗಳಿಗೆ ಬೆದರಿಕೆ ಹಾಕಿದ್ದ ಆರೋಪಿ ಅರೆಸ್ಟ್!

ಕೋಮುವಾದಿ ಎಂದು ಬಿಜೆಪಿಯನ್ನು ಹೀಗಳೆಯುತ್ತಾ ಆ ಪದದಿಂದಲೇ ರಾಜಕೀಯ ಲಾಭ ಗಿಟ್ಟಿಸಿಕೊಳ್ಳುವ ಡೋಂಗಿ ಸಮಾಜವಾದಿ ನೀವು. ನಿಮ್ಮ ಅಡ್ಜಸ್ಟ್’ಮೆಂಟ್ ರಾಜಕಾರಣ ಜಗತ್ಪ್ರಸಿದ್ಧಿ. I.N.D.I.A ಎಂಬ ಮೈತ್ರಿಕೂಟದಲ್ಲಿ ಅದೇ ಬಿಜೆಪಿಯ ಬಿ ಟೀಂಗಳನ್ನು ಇಟ್ಟುಕೊಂಡು, ಅವುಗಳ ಬಾಲಂಗೋಚಿ ಆಗಿರುವ @INCIndia ಪಕ್ಷ ಜಾತ್ಯತೀತವೇ? ಉತ್ತರಿಸಿ ಮುಖ್ಯಮಂತ್ರಿಗಳೇ?

ಸ್ಟಾಲಿನ್, ಮಮತಾ ಬ್ಯಾನರ್ಜಿ, ಫಾರೂಕ್ ಅಬ್ದುಲ್ಲಾ, ನಿತೀಶ್ ಕುಮಾರ್, ಹೇಮಂತ್ ಸೊರೇನ್, ವೈಕೋ, ಮೆಹಬೂಬಾ ಮುಫ್ತಿ, ಅಖೈರಿಗೆ ಶಿವಸೇನೆಯ ಉದ್ಧವ್ ಠಾಕ್ರೆ.. ಇವರೆಲ್ಲರೂ ಬಿಜೆಪಿ ಪಡಸಾಲೆಯಲ್ಲಿ ಪೊಗದಸ್ತಾಗಿ ಅಧಿಕಾರದ ಭೋಜನ ಉಂಡವರಲ್ಲವೇ? ಅವರ ಪಕ್ಕ ಕುರ್ಚಿ ಹಾಕಿಕೊಂಡು ಕೂರಲು ನಿಮಗೆ ನಾಚಿಕೆ ಆಗುವುದಿಲ್ಲವೇ?

2006ರಲ್ಲಿ @BJP4Karnataka ಜತೆ ಸರಕಾರ ರಚಿಸಿದ ಏಕೈಕ ಕಾರಣಕ್ಕೆ ಬಿಜೆಪಿ ಬಿ ಟೀಂ ಎಂದು @JanataDal_S ಗೆ ಮುದ್ರೆ ಹಾಕಿದಿರಿ. 2018ರಲ್ಲಿ ಅದೇ ಬಿ ಟೀಂ ಜತೆ ಸರಕಾರ ರಚಿಸಲು ಮಾನ್ಯ ದೇವೇಗೌಡರ ಮನೆಗೆ ಬಂದು ಸಾಲಾಗಿ ಕೈಕಟ್ಟಿ ನಿಂತುಕೊಂಡಿರಿ!! ಮರೆತಿರಾ ಛದ್ಮವೇಷಧಾರಿ??

ಪಾಪ.. ನಿಮಗೆ ಕೋಮುವಾದ, ಜಾತ್ಯತೀತ ಸಿದ್ಧಾಂತದ ಕನಸು ಈಗ ಬಿದ್ದಿದೆ. ನಿಮ್ಮ ರಾಜಕೀಯ ಬದುಕಿಗಾಗಿ ಜಾತಿಜಾತಿಗಳನ್ನು ಒಡೆದು ಬೆಂಕಿ ಇಟ್ಟು ಆ ಕೆನ್ನಾಲಗೆಯಲ್ಲೇ ಚಳಿ ಕಾಯಿಸಿಕೊಳ್ಳುವುದಷ್ಟೇ ನಿಮಗೆ ಗೊತ್ತು.

ಜಾತ್ಯತೀತ ಎನ್ನುವುದು ನಾಲಿಗೆ ಮೇಲಿನ ಮಾತಲ್ಲ, ಹೃದಯದ ಆಳದಲ್ಲಿರುವ ನಿಷ್ಠೆ. ಸ್ವಾರ್ಥ ರಾಜಕಾರಣವನ್ನೇ ಹಾಸಿಹೊದ್ದು, ಅಧಿಕಾರ ದಾಹವೇ ಹಾಸುಹೊಕ್ಕಾಗಿರುವ ನಿಮಗೆ ಜಾತ್ಯತೀತತೆ ಕೇವಲ ಭಾಷಣದ ಸರಕಷ್ಟೇ. ಜಾತ್ಯತೀತತೆ ಕುರಿತು ನಮ್ಮ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ H_D_Devegowda ಅವರು ಹಾಗೂ ನಾನು ಈಗಾಗಲೇ ಸ್ಪಷ್ಟವಾಗಿ ಹೇಳಿದ್ದೇವೆ, ಅದೂ ಜನರಿಗೆ? ನಮ್ಮ ಬದ್ಧತೆ, ಅಚಲತೆ, ಜಾತ್ಯತೀತತೆಯನ್ನು ಪ್ರಶ್ನಿಸುವ ಯೋಗ್ಯತೆ ನಿಮಗೆ ಖಂಡಿತಾ ಇಲ್ಲ. ಈ ಗುಣಗಳು ನಿಮಗೆ ಅನ್ವಯ ಆಗುವುದೂ ಇಲ್ಲ. ಏನಂತೀರಿ?

ಎನ್ನುವ ಪ್ರಶ್ನೆಗಳ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ದ ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ.

RELATED ARTICLES

Related Articles

TRENDING ARTICLES