ಶಿವಮೊಗ್ಗ : ಈದ್ ಮಿಲಾದ್ ಮೆರವಣಿಗೆ ವೇಳೆ ಶಿವಮೊಗ್ಗದಲ್ಲಿ ಕಲ್ಲು ತೂರಾಟ ನಡೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಈವರೆಗೆ 24 FIR ದಾಖಲಿಸಿದ್ದಾರೆ ಎಂದು ಶಿಕ್ಷಣ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ತಿಳಿಸಿದರು.
ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗಲಾಟೆ ಸಂದರ್ಭದಲ್ಲಿ ಗಂಭೀರ ಆಗಿಲ್ಲ, ಸಣ್ಣಪುಟ್ಟ ಗಾಯಗಳಾಗಿವೆ. ಈ ಘಟನೆಯಲ್ಲಿ ಯಾರೇ ಭಾಗಿಯಾಗಿದ್ದರೂ ಬಿಡುವ ಪ್ರಶ್ನೆಯೇ ಇಲ್ಲ. ಪ್ರಕರಣ ಸಂಬಂಧ ಸಂಪೂರ್ಣ ಮಾಹಿತಿ ಕಲೆ ಹಾಕುತ್ತೇವೆ. ಗಲಾಟೆಯಲ್ಲಿ ಭಾಗಿಯಾದ ಯಾರನ್ನೂ ಬಿಡಲ್ಲ. ಕಾನೂನು ಎಲ್ಲರಿಗೂ ಒಂದೇ, ಎಲ್ಲರಿಗೂ ಒಂದೇ ರೀತಿ ಶಿಕ್ಷೆ ಆಗುತ್ತದೆ ಎಂದು ಹೇಳಿದರು.
ಶಿವಮೊಗ್ಗ ಜಿಲ್ಲೆ ಸಾಮರಸ್ಯಕ್ಕೆ ಹೆಸರು
ಶಿವಮೊಗ್ಗ ಜಿಲ್ಲೆ ಸಾಮರಸ್ಯಕ್ಕೆ ಹೆಸರಾಗಿದೆ. ಎಲ್ಲಾ ವರ್ಗದವರೂ ಶಾಂತಿ, ಸಹಬಾಳ್ವೆಯಿಂದ ಜೀವನ ನಡೆಸುತ್ತಿದ್ದಾರೆ. ಯಾವುದೇ ವಿಚಾರದಲ್ಲಿ ಸಾರ್ವಜನಿಕ ಆಸ್ತಿಪಾಸ್ತಿಗೆ ನಷ್ಟ ಉಂಟುಮಾಡುವುದಾಗಲಿ, ಕಾನೂನು ಕೈಗೆತ್ತಿಕೊಂಡು ಶಾಂತಿ ಭಂಗ ಮಾಡುವುದು ಖಂಡನೀಯ ಎಂದು ಮಧು ಬಂಗಾರಪ್ಪ ಬೇಸರ ವ್ಯಕ್ತಪಡಿಸಿದರು.
ಮುಲಾಜಿಲ್ಲದೇ ಕಠಿಣ ಕ್ರಮ
ಕಿಡಿಗೇಡಿಗಳ ಕೃತ್ಯಕ್ಕೆ ಸಾರ್ವಜನಿಕರು ಶಾಂತಿಯಿಂದಲೇ ಉತ್ತರಿಸಬೇಕು. ಶಾಂತಿಭಂಗ ಮತ್ತು ಸಾರ್ವಜನಿಕ ಆಸ್ತಿಪಾಸ್ತಿಗೆ ನಷ್ಟ ಉಂಟುಮಾಡುವವರು ಯಾರೇ ಆಗಿದ್ದರೂ ಅವರ ವಿರುದ್ಧ ಮುಲಾಜಿಲ್ಲದೇ ಕಠಿಣ ಕ್ರಮ ಕೈಗೊಳ್ಳಲಾಗುವುದು. ಈ ಬಗ್ಗೆ ಜಿಲ್ಲಾಡಳಿತಕ್ಕೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ಹೇಳಿದರು.