ಬೆಂಗಳೂರು: ಸರ್ಕಾರ ಅತ್ತಿಬೆಲೆ ಪಟಾಕಿ ದುರಂತ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಅಧಿಕಾರಿಗಳೂ ಎಲ್ಲ ಮುನ್ನೆಚ್ಚರಿಕೆಯ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ.
ಅತ್ತಿಬೆಲೆ ಪಟಾಕಿ ದುರಂತವಾದ ಮಳಿಗೆಗೆ ಸಂಬಂಧಿಸಿದಂತೆ ಸರ್ಕಲ್ ಇನ್ಸ್‌ಪೆಕ್ಟರ್ ವರದಿ, ಛಾಯಾಚಿತ್ರಗಳೊಂದಿಗೆ ಚಕ್ಕುಬಂದಿ ನಿಗದಿ ಮಾಡಿ ವರದಿ ಸಲ್ಲಿಸಿದ್ದಾರೆ. ಪೊಲೀಸ್ ಅಧೀಕ್ಷಕರು ಜಿಲ್ಲಾಧಿಕಾರಿಗಳಿಗೆ ವರದಿ ಸಲ್ಲಿಸಿದ್ದಾರೆ. ಅದರ ಆಧಾರದಲ್ಲಿ ಜಿಲ್ಲಾಧಿಕಾರಿಗಳು ಪರವಾನಗಿ ನೀಡಿದ್ದಾರೆ. ಜಿಲ್ಲಾಧಿಕಾರಿಗಳು ತಹಸೀಲ್ದಾರರಿಂದಲೂ ವರದಿ ಪಡೆದಿದ್ದಾರೆ ಎಂದು ಅಧಿಕಾರಿಗಳು ವಿವರಿಸಿದರು.
ನಿಗದಿ ಮಾನದಂಡ ಪೂರೈಸದಿದ್ದರೂ, ತಪಾಸಣಾ ವರದಿ ನೀಡಿ ಶಿಫಾರಸು ಮಾಡಿದ ಸರ್ಕಲ್ ಇನ್ಸ್‌ಪೆಕ್ಟರ್, ತಹಸೀಲ್ದಾರ್, ಪ್ರಾದೇಶಿಕ ಅಗ್ನಿಶಾಮಕ ಅಧಿಕಾರಿಗಳನ್ನು ಅಮಾನತು ಮಾಡಲು ಸಿಎಂ ಸೂಚಿಸಿದರು.
ಎಕ್ಸ್‌ಪ್ಲೋಸಿವ್ ಆಕ್ಟ್ ನಲ್ಲಿ ಲೈಸೆನ್ಸ್ ಕೊಡುವಾಗ ನೀವು ಎಚ್ಚರಿಕೆ ವಹಿಸಬೇಕು. ಹದಿನಾಲ್ಕು ಜನರ ಜೀವಕ್ಕೆ ಯಾರು ಹೊಣೆಗಾರರು. ಕಾಯ್ದೆ ಓದಿದ್ದೀರಾ? ಅವರು ಅದರಲ್ಲಿರುವ ಎಲ್ಲ ಮಾನದಂಡಗಳನ್ನು ಪೂರೈಸಿದ್ದಾರೆಯೇ ಎಂದು ನೋಡಬೇಕು. ತಳಹಂತದ ಅಧಿಕಾರಿಗಳು ಸಲ್ಲಿಸಿದ ವರದಿ ಸರಿಯಿದೆಯೇ ಎಂದು ಜಿಲ್ಲಾಧಿಕಾರಿಗಳು ಪರಿಶೀಲಿಸಬೇಕು ಎಂದು ತಾಕೀತು ಮಾಡಿದರು.
ಅಲ್ಲಿರುವ ಎಲ್ಲ ಮಳಿಗೆಗಳ ಸುರಕ್ಷತೆಯನ್ನೂ ತಪಾಸಣೆ ಮಾಡಲು ಸೂಚಿಸಿದರು. ಇನ್ನು ಮುಂದೆ ಲೈಸನ್ಸ್ ನೀಡುವಾಗ ಜಿಲ್ಲಾಧಿಕಾರಿಗಳು, ಪೊಲೀಸ್ ಅಧೀಕ್ಷಕರು ಹಾಗೂ ಅಗ್ನಿಶಾಮಕ ದಳದ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಬೇಕು ಎಂದ ಸೂಚನೆ ನೀಡಿದರು.
ಸಭೆಯಲ್ಲಿ ಭಾಗವಹಿಸಿದ್ದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮಾತನಾಡಿ, ರಾಜಕೀಯ ಸಮಾವೇಶಗಳಲ್ಲಿ ಹಾಗೂ ವಿವಾಹ ಸಮಾರಂಭಗಳಲ್ಲಿ ಸುರಕ್ಷತೆಯ ದೃಷ್ಟಿಯಿಂದ ಪಟಾಕಿ ಬಳಕೆಯನ್ನು ನಿಷೇಧಿಸುವಂತೆ ಸಲಹೆ ನೀಡಿದರು.
ಈ ವೇಳೆ ಸಭೆಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್ ಗೋಯಲ್, ನಗರಾಭಿವೃದ್ಧಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಜಿಪಿ ಅಲೋಕ್ ಮೋಹನ್, ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್, ಬೆಂಗಳೂರು ನಗರ ಜಿಲ್ಲಾಧೀಕಾರಿ ಕೆ.ಎ. ದಯಾನಂದ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಶಿವಶಂಕರ್ ಮತ್ತು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜು, ನಸೀರ್ ಅಹಮದ್ ಮತ್ತು ಸರ್ಕಾರದ ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.


