ಶಿವಮೊಗ್ಗ : ರಾಜ್ಯ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಭಾಗ್ಯ ನೀಡುವ ಮೂಲಕ ಬಡವರ ಜೇಬಿಗೆ ಕತ್ತರಿ ಹಾಕಿದೆ. ಗ್ಯಾರಂಟಿಗಳಲ್ಲೇ ಮುಳುಗಿರುವ ಸರ್ಕಾರ ಅಭಿವೃದ್ಧಿಯನ್ನು ಮರೆತಂತಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಕುಟುಕಿದರು.
ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ರಾಜ್ಯ ವಿದ್ಯುತ್ ಅಭಾವ ಎದುರಿಸುತ್ತಿದ್ದರೂ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಹೇಳಿದರು.
ಈಗಾಗಲೇ ಜಿಲ್ಲೆಯೂ ಸೇರಿದಂತೆ ರಾಜ್ಯದಲ್ಲಿ ಅಘೋಷಿತ ಲೋಡ್ ಶೆಡ್ಡಿಂಗ್ ಆರಂಭವಾಗಿದೆ. ರೈತರು ತಮ್ಮ ಬೆಳೆಗಳನ್ನು ಉಳಿಸಿಕೊಳ್ಳಲು ಹೆಣಗಾಡುತ್ತಿದ್ದಾರೆ. ರೈತರ ಪಂಪ್‍ಸೆಟ್‍ಗಳಿಗೆ ವಿದ್ಯುತ್ ಇಲ್ಲವಾಗಿದೆ. ಇಂತಹ ಕಠಿಣ ಸಂದರ್ಭಗಳಲ್ಲಿ ರಾಜ್ಯ ಸರ್ಕಾರ ಅಕ್ಕಪಕ್ಕದ ರಾಜ್ಯಗಳಿಂದ ವಿದ್ಯುತ್ ಖರೀದಿಸಿ ಸಮಸ್ಯೆ ಬಗೆಹರಿಸಬೇಕು ಎಂದು ಒತ್ತಾಯಿಸಿದರು.
ಕೇಂದ್ರ 300 ಕೋಟಿ ರೂ. ನೀಡಿದೆ
ಮಲೆನಾಡು ಭಾಗದಲ್ಲಿ ನೆಟ್‍ವರ್ಕ್ ಸಮಸ್ಯೆ ನಿವಾರಣೆಗಾಗಿ ಡಿಸೆಂಬರ್ ಒಳಗಾಗಿ 100 ಟವರ್ ನಿರ್ಮಿಸಲಾಗುವುದು. ಈಗಾಗಲೇ ಕೇಂದ್ರ ಸರ್ಕಾರ ಇದಕ್ಕಾಗಿ 300 ಕೋಟಿ ರೂ. ನೀಡಿದೆ. ಶಿವಮೊಗ್ಗ ಕ್ಷೇತ್ರದ ಟವರ್‍ಗಳಿಗೆ 100 ಬ್ಯಾಟರಿ ಮಂಜೂರಾಗಿದೆ. ಮುಂದಿನ ದಿನಗಳಲ್ಲಿ ಎಲ್ಲಾ ಕಡೆ ಟವರ್ ನಿರ್ಮಿಸಲಾಗುವುದು. ಮುಖ್ಯಮಂತ್ರಿಯಾಗಿದ್ದ ಯಡಿಯೂರಪ್ಪನವರು ಕ್ಷೇತ್ರಕ್ಕಾಗಿ ಏತನೀರಾವರಿ ಯೋಜನೆಯನ್ನು ತಂದಿದ್ದರು. ಶಿಕಾರಿಪುರ ತಾಲೂಕಿನಲ್ಲಿ ಈ ಯೋಜನೆ ಪೂರ್ಣಗೊಂಡಿದೆ. ನಿರಂತರ ವಿದ್ಯುತ್ ಪೂರೈಸಿದರೆ ಹಲವು ಕೆರೆಗಳಿಗೆ ನೀರು ತುಂಬಿಸಬಹುದು ಎಂದು ತಿಳಿಸಿದರು.
ಗ್ರಾಮೀಣ ಭಾಗದ ಮಕ್ಕಳಿಗೆ ಪ್ರಾಬ್ಲಂ
ಕೇಂದ್ರ ಸರ್ಕಾರ ಹೊಸ ಶಿಕ್ಷಣ ನೀತಿ ಆರಂಭಿಸಿತ್ತು. ಆದರೆ, ರಾಜ್ಯ ಸರ್ಕಾರ ಅದನ್ನು ಕೈಬಿಟ್ಟು ಪ್ರತ್ಯೇಕ ಶಿಕ್ಷಣ ನೀತಿ ಅಳವಡಿಸುತ್ತಿದೆ. ಇದರಿಂದ ಸರ್ಕಾರಿ ಶಾಲೆಯಲ್ಲಿ ಓದುತ್ತಿರುವ ಗ್ರಾಮೀಣ ಭಾಗದ ಮಕ್ಕಳು ತೊಂದರೆಗೊಳಗಾಗುತ್ತಾರೆ ಎಂದು ಬಿ.ವೈ. ರಾಘವೇಂದ್ರ ಬೇಸರ ವ್ಯಕ್ತಪಡಿಸಿದರು.