ಬೆಂಗಳೂರು : ರಾಜ್ಯದ ದಕ್ಷಿಣ ಒಳನಾಡಿನ ಬಹುತೇಕ ಪ್ರದೇಶಗಳ್ಲಲಿ ಮುಂದಿನ 5 ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಕೊಡಗು ಹಾಗೂ ತುಮಕೂರಿನಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಉತ್ತರ ಒಳನಾಡು ಹಾಗೂ ಕರಾವಳಿಯಲ್ಲಿ ಒಣಹವೆ ಇರಲಿದ್ದು, ದಕ್ಷಿಣ ಒಳನಾಡಿನ ಬಹುತೇಕ ಕಡೆ ಮಳೆಯಾಗುವ ಸಾಧ್ಯತೆ ಇದೆ. ವಿಜಯಪುರದಲ್ಲಿ 15.6 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ.
ನೆಮ್ಮದಿ ತಂದ ಹಿಂಗಾರು ಮಳೆ
ರಾಜ್ಯಾದ್ಯಂತ ಮುಂಗಾರು ಮಳೆ ಕೊರತೆಯಿಂದ ಹಲವು ಜಿಲ್ಲೆಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದೆ. ಅಕ್ಟೋಬರ್ನಲ್ಲಿ ಹಿಂಗಾರು ಮಳೆ ಕೂಡ ಕಡಿಮೆಯಾಗಿದ್ದರಿಂದ ಶೇ.65ರಷ್ಟು ಮಳೆ ಕೊರತೆ ಎದುರಾಗಿ, ಪರಿಸ್ಥಿತಿ ವಿಕೋಪಕ್ಕೆ ತಿರುಗುವ ಮುನ್ಸೂಚನೆ ಸಿಕ್ಕಿತ್ತು.
ಆದರೆ, ನವೆಂಬರ್ ತಿಂಗಳ ಆರಂಭದಿಂದ ರಾಜ್ಯದ ಹಲವೆಡೆ ಸುರಿಯುತ್ತಿರುವ ಮಳೆಯ ಪರಿಣಾಮದಿಂದ ಮಳೆ ಕೊರತೆ ಶೇ.35ಕ್ಕೆ ಇಳಿಕೆಯಾಗಿದೆ. ಕಳೆದ ಎರಡು ವಾರಗಳಲ್ಲಿ ಶೇ.108ರಷ್ಟು ಮಳೆಯಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.