ಮೈಸೂರು : ರಾಮ ಮಂದಿರ ಹೊಸ ವಿಚಾರ ಅಲ್ಲ. ರಾಮ ಮಂದಿರಕ್ಕೆ ನಮ್ಮ ವಿರೋಧ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಪ್ರೀಂಕೋರ್ಟ್‌ನಲ್ಲಿ ತೀರ್ಮಾನ ಆಗಿದೆ. ಅದರಂತೆ ದೇವಾಲಯ ನಿರ್ಮಾಣ ಆಗುತ್ತಿದೆ ಎಂದು ತಿಳಿಸಿದರು.
ರಾಮ ಮಂದಿರದಿಂದ ಮತದಾರರು ಬದಲಾವಣೆ ಆಗುತ್ತಾರೆ ಅನ್ನೋದು ತಪ್ಪು. ದೇಶದ ಜನ ವಿವಿಧತೆಯಲ್ಲಿ ಏಕತೆ ಬಯಸುತ್ತಾರೆ. ಬ್ರಿಟೀಷರು, ಮೊಘಲರ ದಾಳಿಯ ನಂತರವೂ ದೇಶ ಒಂದಾಗಿದೆ. ಬೇರೆ ಬೇರೆ ದೇಶ, ಭಾಷೆ ಇದ್ದರೂ ಒಗ್ಗಟ್ಟು ಇದೆ. ನಾವು ಒಳಗೊಳ್ಳುವಿಕೆಯಲ್ಲಿ ನಂಬಿಕೆ ಇಟ್ಟುಕೊಂಡವರು ಎಂದು ಬಿಜೆಪಿಗರಿಗೆ ಪರೋಕ್ಷವಾಗಿ ಟಾಂಗ್ ನೀಡಿದರು.
ಎಲ್ಲ ಕಡೆ ಕಾಂಗ್ರೆಸ್ ಗೆಲ್ಲುತ್ತದೆ
ಪಂಚರಾಜ್ಯ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸುತ್ತದೆ ಎಂದು ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು. ಇಂದು ಮತದಾನ ನಡೆಯುತ್ತಿದೆ. ತೆಲಂಗಾಣ, ಮಧ್ಯಪ್ರದೇಶ, ಛತ್ತೀಸ್‌ಗಡ, ರಾಜ್ಯಸ್ಥಾನ ಎಲ್ಲ ಕಡೆ ಕಾಂಗ್ರೆಸ್ ಗೆಲ್ಲುತ್ತದೆ. ಈ ಚುನಾವಣೆಯ ಫಲಿತಾಂಶ ಲೋಕಸಭೆ ಚುನಾವಣೆ ಮೇಲೆ ಪರಿಣಾಮ ಬೀರಲ್ಲ. ಈಗ ನವೆಂಬರ್‌ನಲ್ಲಿ ಇದ್ದೇವೆ, ಲೋಕಸಭೆ ಚುನಾವಣೆಗೆ ಮಾರ್ಚ್ ಕೊನೆಯಲ್ಲಿ ನೋಟಿಫಿಕೇಷನ್ ಆಗಲಿದೆ ಎಂದು ಹೇಳಿದರು.