Monday, December 23, 2024

‘ಕೈ’ ಸರ್ಕಾರದ ವಿರುದ್ಧ ಸಿಡಿದೆದ್ದ ಅಂಗನವಾಡಿ ಕಾರ್ಯಕರ್ತೆಯರು : ಅನಿರ್ದಿಷ್ಟಾವಧಿ ಪ್ರತಿಭಟನೆಗೆ ನಿರ್ಧಾರ

ಬೆಂಗಳೂರು : ರಾಜ್ಯ ಕಾಂಗ್ರೆಸ್​ ಸರ್ಕಾರದ ವಿರುದ್ಧ ಅಂಗನವಾಡಿ ಕಾರ್ಯಕರ್ತೆಯರು ಮತ್ತೆ ಸಿಡಿದೆದ್ದಿದ್ದಾರೆ. 1,000ಕ್ಕೂ ಹೆಚ್ಚು ಖಾಲಿ ಇರುವ ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಕೂಡಲೇ ಅರ್ಹರನ್ನು ನೇಮಕಾತಿ ಮಾಡುವಂತೆ ಅನಿರ್ಧಿಷ್ಟಾವಧಿ ಪ್ರತಿಭಟನೆಗೆ ಮುಂದಾಗಿದ್ದಾರೆ.

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಅಂಗನವಾಡಿ ಕಾರ್ಯಕರ್ತೆಯರು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸುತ್ತಾ ಬಂದಿದ್ದಾರೆ. ಪ್ರತಿಭಟನೆ ಸಂದರ್ಭದಲ್ಲಿ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸುವಂತೆ ಆಶ್ವಾಸನೆ ನೀಡಿ ಸುಮ್ಮನಾಗುವ ಸರ್ಕಾರಕ್ಕೆ ಮತ್ತೆ ಎಚ್ಚರಿಸಲು ಬೆಂಗಳೂರಿನ ಫ್ರೀಡಂಪಾರ್ಕ್‌ನಲ್ಲಿ ನೂರಕ್ಕೂ ಹೆಚ್ಚು ಅಂಗನವಾಡಿ ಕಾರ್ಯಕರ್ತೆಯರು ಪ್ರತಿಭಟನೆಗಿಳಿದಿದ್ದಾರೆ.

ಅಂಗನವಾಡಿ ಸಹಾಯಕಿಯರನ್ನು ಆಫ್‌ಲೈನ್ ಮುಖಾಂತರ ನೇಮಕಾತಿ ಮಾಡಿಕೊಳ್ಳಬೇಕು. ಈಗಾಗಲೇ ಹಲವು ಜನ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಹುದ್ದೆಗೆ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿ ಸಲ್ಲಿಸಿ ಎಂಟು ತಿಂಗಳು ಕಳೆದರೂ ಇನ್ನೂ ನೇಮಕಾತಿ ಪ್ರಕ್ರಿಯೆ ನಡೆಯುತ್ತಿಲ್ಲ. ಹೀಗಾಗಿ, ಕೂಡಲೇ ನೇಮಕಾತಿ ಪ್ರಕ್ರಿಯೆ ನಡೆಯಬೇಕು ಎಂದು ಅಂಗನವಾಡಿ ಕಾರ್ಯಕರ್ತೆಯರು ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

1,198 ಸಹಾಯಕಿಯರ ಹುದ್ದೆಗಳು ಖಾಲಿ

ಇನ್ನೂ, ಬೆಂಗಳೂರಿನಲ್ಲಿ ಒಟ್ಟು 2,877 ಅಂಗನವಾಡಿ ಕೇಂದ್ರಗಳಿದ್ದು, ಈ ಪೈಕಿ 430 ಅಂಗನವಾಡಿ ಕಾರ್ಯಕರ್ತೆಯರ ಹುದ್ದೆ ಮತ್ತು 1,198 ಸಹಾಯಕಿಯರ ಹುದ್ದೆಗಳು ಖಾಲಿ ಇವೆ. ಕಳೆದ ನಾಲ್ಕೈದು ವರ್ಷಗಳಿಂದ ಈ ಹುದ್ದೆಗಳ ನೇಮಕಾತಿ ನಡೆದಿಲ್ಲ. ಈಗ ನೇಮಕಾತಿಗೆ ಪ್ರಕಟಣೆ ಹೊರಡಿಸಿದರೂ, ನೇಮಕಾತಿ ಪ್ರಕ್ರಿಯೆ ವಿಳಂಬ ಮಾಡುತ್ತಿರುವುದು ಅಂಗನವಾಡಿ ಕಾರ್ಯಕರ್ತೆಯರ ಕೆಂಗಣ್ಣಿಗೆ ಗುರಿಯಾಗಿದೆ.

ಒಟ್ಟಾರೆ, ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರ ನೇಮಕ ವಿಳಂಬ ಖಂಡಿಸಿ ಅನಿರ್ಧಿಷ್ಟಾವಧಿ ಪ್ರತಿಭಟನೆ ಕೈಗೊಂಡಿರುವ, ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಯನ್ನು ಸರ್ಕಾರ ಯಾವಾಗ ಈಡೇರಿಸುತ್ತೆ ಎನ್ನುವುದನ್ನು ಕಾದು ನೋಡಬೇಕಿದೆ.

RELATED ARTICLES

Related Articles

TRENDING ARTICLES