ತೆಲಂಗಾಣ : ತೆಲಂಗಾಣದಲ್ಲಿ ಬಿಆರ್ಎಸ್ ಮತ್ತು ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸುವುದು ಕಾಂಗ್ರೆಸ್ ಪಕ್ಷದ ಗುರಿಯಾಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
ತೆಲಂಗಾಣದಲ್ಲಿ ಚುನಾವಣಾ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ಈ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮೊದಲ ಸಂಪುಟ ಸಭೆಯಲ್ಲಿಯೇ ಪಕ್ಷ ನೀಡಿರುವ ಆರು ಭರವಸೆಗಳನ್ನು ಅನುಷ್ಠಾನಗೊಳಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.
ತೆಲಂಗಾಣಕ್ಕಾಗಿ ಕಾಂಗ್ರೆಸ್ ಪಕ್ಷ ಏನು ಮಾಡಿದೆ ಎಂದು ಪ್ರಶ್ನಿಸುವ ಮೊದಲು ರಾಜ್ಯಕ್ಕಾಗಿ ಬಿಆರ್ಎಸ್ ನಾಯಕ, ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಏನು ಮಾಡಿದ್ದಾರೆ ಎಂಬುದನ್ನು ಜನರಿಗೆ ಹೇಳಲಿ. ಕೆಸಿಆರ್ ದೇಶದಲ್ಲಿಯೇ ಅತ್ಯಂತ ಭ್ರಷ್ಟ ಸರ್ಕಾರವನ್ನು ನಡೆಸುತ್ತಿದ್ದಾರೆ. ಹೆಚ್ಚು ಹಣ ಗಳಿಸುವಂತಹ ಖಾತೆಗಳು ತಮ್ಮ ಕುಟುಂಬಸ್ಥರ ಬಳಿಯೇ ಇಟ್ಟುಕೊಂಡಿದ್ದಾರೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ.
ಕಾಂಗ್ರೆಸ್ ಪ್ರಚಂಡ ಬಹುಮತದಿಂದ ಗೆಲ್ಲಲಿದೆ
ತೆಲಂಗಾಣ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಪ್ರಚಂಡ ಬಹುಮತದಿಂದ ಗೆಲ್ಲಲಿದೆ ಎಂಬುದು ಇಲ್ಲಿನ ಜನತೆಗೆ ಗೊತ್ತಿದೆ. ನೀವು ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಿ ಮತ್ತು ತೆಲಂಗಾಣವನ್ನು ಸರಿಯಾದ ಹಾದಿಯಲ್ಲಿ ಕೊಡೊಯ್ಯುತ್ತೀರಿ. ಅಮಿತ್ ಶಾ ಹೇಳಿದರು, ತೆಲಂಗಾಣದಲ್ಲಿ ನಾವು OBC ಮುಖ್ಯಮಂತ್ರಿ ಮಾಡುತ್ತೇವೆ ಅಂತ. ಮೊದಲು ನಿಮಗೆ ಶೇ.2ರಷ್ಟು ಮತಗಳು ಬರುತ್ತವೆ, ಆಮೇಲೆ ಮುಖ್ಯಮಂತ್ರಿ ಬಗ್ಗೆ ಮಾತನಾಡುತ್ತೀರಿ ಎಂದು ಕುಟುಕಿದ್ದಾರೆ.