Saturday, July 27, 2024

ಹಿರಿಯ ನಟಿ ಲೀಲಾವತಿ ಇನ್ನಿಲ್ಲ!

ಬೆಂಗಳೂರು: 85 ವರ್ಷದ ಹಿರಿಯ ನಟಿ ಲೀಲಾವತಿ ವಯೋ ಸಹಜ ಖಾಯಿಲೆಯಿಂದ ಇಂದು ಖಾಸಗಿ ಆಸ್ಪತ್ರೆ ಕರೆದೊಯ್ಯುವ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾರೆ.

ನೆಲಮಂಗಲದ ಖಾಸಗಿ ಆಸ್ಪತ್ರೆಯಲ್ಲಿ ನಟಿ ಲೀಲಾವತಿ ಚಿಕಿತ್ಸೆ ಪಡೆಯುತ್ತಿದ್ದರು, ಹಲವು ದಿನಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದ ಇವರನ್ನು ರಾಜ್ಯದ ಗಣ್ಯಾತಿ ಗಣ್ಯರು, ಚಿತ್ರರಂಗದ ನಟ ನಟಿಯರು ಸೇರಿದಂತೆ ಹಲವರು ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದರು.

ನಟಿ ಲೀಲಾವತಿ ಸಾವಿನಿಂದ ಚಿತ್ರರಂಗಕ್ಕೆ ತುಂಬಲಾರದ ನಷ್ಟ ಉಂಟಾಗಿದೆ. ಇವರ ಸಾವಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್​, ನಟ ಶಿವರಾಜ್​ ಕುಮಾರ್​ ಸೇರಿದಂತೆ ಗಣ್ಯರು ಕಂಬನಿ ಮಿಡಿದಿದ್ದು ಸಂತಾಪ ಸೂಚಿಸಿದ್ದಾರೆ.

ನಟಿ ಲೀಲಾವತಿ 1938 ರಲ್ಲಿ ಜನಿಸಿದ ಇವರು ದಕ್ಷಿಣ ಭಾರತದ ಪ್ರಸಿದ್ದ ನಟಿಯರಲ್ಲಿ ಒಬ್ಬರು. ಕನ್ನಡದಲ್ಲಿ ಪ್ರಧಾನವಾಗಿ ನಟಿಸುವುದರೊಂದಿಗೆ ತಮಿಳು, ತೆಲುಗು ಮತ್ತು ಮಲಯಾಳಂ ಭಾಷೆಗಳ ಸುಮಾರು 600 ಚಿತ್ರಗಳಲ್ಲಿ ನಟಿಸಿದ್ದಾರೆ. ಕರ್ನಾಟಕ ಸರ್ಕಾರ ಚಲನಚಿತ್ರರಂಗದ ಜೀವಮಾನ ಸಾಧನೆಗೆ ನೀಡುವ ಅತ್ತ್ಯುನ್ನತ ಪ್ರಶಸ್ತಿ ಡಾ. ರಾಜಕುಮಾರ್ ಪ್ರಶಸ್ತಿಯನ್ನು 1999-2000ನೇ ಸಾಲಿನಲ್ಲಿ ಪಡೆದ ಲೀಲಾವತಿ ಅವರು, ‘ತುಮಕೂರು ವಿಶ್ವವಿದ್ಯಾಲಯ’ದ ಗೌರವ ಡಾಕ್ಟರೇಟ್ ಪದವಿಯನ್ನು 2008ರಲ್ಲಿ ಪಡೆದರು.

ವೃತ್ತಿ ಬದುಕು:

ಲೀಲಾವತಿ ಅವರು ಶಂಕರ್ ಸಿಂಗ್ ಅವರ ನಾಗಕನ್ನಿಕ ಚಿತ್ರದಲ್ಲಿ ಸಖಿಯ ಪಾತ್ರದ ಮುಖಾಂತರ ಕನ್ನಡ ಚಿತ್ರರಂಗ ಪ್ರವೇಶಿಸಿದರು. ಸುಬ್ಬಯ್ಯ ನಾಯ್ಡು ಅವರ ಸಂಸ್ಥೆಯಲ್ಲಿ ರಂಗಭೂಮಿ ಕಲಾವಿದೆಯಾಗಿದ್ದ ಲೀಲಾವತಿ ಅವರು ಕಯಾದುವಿನ ಸಖಿಯಾಗಿ ಅಭಿನಯಿಸಿದ್ದರು. ಮಹಾಲಿಂಗ ಭಾಗವತರ ನಾಟಕ ಸಂಸ್ಥೆಯನ್ನು ಸೇರಿ ಹಲವಾರು ನಾಟಕಗಳಲ್ಲಿ ಅಭಿನಯಿಸಿದರು. ಸುಬ್ಬಯ್ಯ ನಾಯ್ಡು ಅವರ ‘ಭಕ್ತ ಪ್ರಹ್ಲಾದ’ದಲ್ಲಿ ಕೂಡಾ ಅಭಿನಯಿಸಿದರು. ಹಲವಾರು ಚಿತ್ರಗಳಲ್ಲಿ ಚಿಕ್ಕ ಪಾತ್ರಗಳಲ್ಲಿ ಅಭಿನಯಿಸಿದರು.

ನಾಯಕಿಯಾಗಿ ಅವರು ಅಭಿನಯಿಸಿದ ಮೊದಲ ಚಿತ್ರ ಮಾಂಗಲ್ಯ ಯೋಗ. ಡಾ. ರಾಜ್ ಕುಮಾರ್ ಅವರೊಂದಿಗೆ ನಟಿಸಿದ ಮೊದಲ ಚಿತ್ರ ರಣಧೀರ ಕಂಠೀರವ. ರಾಣಿ ಹೊನ್ನಮ್ಮ ಚಿತ್ರದ ಯಶಸ್ಸಿನ ನಂತರ ರಾಜ್ ಕುಮಾರ್ ಮತ್ತು ಲೀಲಾವತಿ ಅವರ ಜೋಡಿ ಜನಪ್ರಿಯವಾಯಿತು. ಸಂತ ತುಕಾರಾಂ, ಕಣ್ತೆರೆದು ನೋಡು, ಕೈವಾರ ಮಹಾತ್ಮೆ, ಗಾಳಿ ಗೋಪುರ, ಕನ್ಯಾರತ್ನ, ಕುಲವಧು, ವೀರ ಕೇಸರಿ, ಮನ ಮೆಚ್ಚಿದ ಮಡದಿ ಹೀಗೆ ಹಲವಾರು ಚಿತ್ರಗಳ ನಾಯಕಿಯಾದರು. ಕೆಲಚಿತ್ರಗಳಲ್ಲಿ ನಾಯಕನಟರಿಗಿಂತ ಹೆಚ್ಚಿನ ಸಂಭಾವನೆ ಪಡೆಯುವ ನಾಯಕಿಯಾಗಿ ಗುರುತಿಸಿಕೊಂಡಿದ್ದರು.

70ರ ದಶಕದ ಬಳಿಕ ಪೋಷಕ ಪಾತ್ರಗಳಲ್ಲಿ ಲೀಲಾವತಿಯವರು ತಮ್ಮನ್ನು ತೊಡಗಿಸಿಕೊಂಡರು. ನಾಯಕಿಯಾಗಿ, ಅಮ್ಮನಾಗಿ, ಅಜ್ಜಿಯಾಗಿ ನಾನಾ ಬಗೆಯ ಪೋಷಕ ಪಾತ್ರಗಳಲ್ಲಿ ನಟಿಸಿದರು. ಅವುಗಳಲ್ಲಿ ಗೆಜ್ಜೆ ಪೂಜೆ, ಸಿಪಾಯಿ ರಾಮು, ನಾಗರಹಾವು, ಭಕ್ತ ಕುಂಬಾರ ಮುಂತಾದ ಚಿತ್ರಗಳು ಪ್ರಮುಖವಾದವು.

RELATED ARTICLES

Related Articles

TRENDING ARTICLES