ನವದೆಹಲಿ : ಮುಂಬರುವ ಲೋಕಸಭಾ ಚುನಾವಣೆಗೆ ಪ್ರತಿಪಕ್ಷಗಳ ಇಂಡಿಯಾ ಒಕ್ಕೂಟಕ್ಕೆ ಎಐಸಿಸಿ ಅಧ್ಯಕ್ಷ ಕನ್ನಡಿಗ ಮಲ್ಲಿಕಾರ್ಜುನ ಖರ್ಗೆಯವರು ಪ್ರಧಾನಿ ಅಭ್ಯರ್ಥಿಯಾಗುವ ಸಾಧ್ಯತೆಗಳಿವೆ.
ದೆಹಲಿಯಲ್ಲಿ ನಡೆಯುತ್ತಿರುವ ಇಂಡಿಯಾ ಒಕ್ಕೂಟದ ಸದಸ್ಯರ ಸಭೆಯಲ್ಲಿ, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಪ್ರಧಾನಿ ಅಭ್ಯರ್ಥಿಯಾಗಿ ಮಲ್ಲಿಕಾರ್ಜುನ ಖರ್ಗೆಯವರನ್ನು ಪರಿಗಣಿಸುವಂತೆ ಪ್ರಸ್ತಾಪಿಸಿದರು. ಅದನ್ನು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅನುಮೋದಿಸಿದರು.
ಈ ಪ್ರಸ್ತಾವನೆಗೆ ಸ್ವತಃ ಮಲ್ಲಿಕಾರ್ಜುನ ಖರ್ಗೆ ಒಪ್ಪಿಗೆ ಸೂಚಿಸಿಲ್ಲ. ಚುನಾವಣೆ ಬಳಿಕ ಪ್ರಧಾನಿ ಯಾರಾಗಬೇಕು ಎಂಬುದನ್ನು ನಿರ್ಧರಿಸುವುದು ಸೂಕ್ತ. ಮೊದಲಿಗೆ ಎಲ್ಲ ಪ್ರತಿಪಕ್ಷಗಳು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿ ಗೆಲ್ಲುವುದು ಸೂಕ್ತ ಎಂದು ಅಭಿಪ್ರಾಯಪಟ್ಟರು ಎನ್ನಲಾಗಿದೆ.
ಡಿ.22ಕ್ಕೆ ಬೃಹತ್ ಪ್ರತಿಭಟನೆ
ಸಂಸದರ ಅಮಾನತನ್ನು ಖಂಡಿಸಿ ಇದೇ ಡಿಸೆಂಬರ್ 22ರಂದು ಬೃಹತ್ ಪ್ರತಿಭಟನೆ ನಡೆಸಲು ತೀರ್ಮಾನಿಸಿದ್ದೇವೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. I.N.D.I.A ಮೈತ್ರಿಕೂಟದ ಸಭೆ ಬಳಿಕ ಮಾತನಾಡಿದ ಅವರು, ಇದೇ ಮೊದಲ ಬಾರಿಗೆ 151 ಸಂಸದರನ್ನು ಅಮಾನತು ಮಾಡಲಾಗಿದೆ. ಇದು ಸ್ಪೀಕರ್ ಮತ್ತು ಸಭಾಪತಿಯವರ ತಪ್ಪು ನಿರ್ಧಾರವಾಗಿದ್ದು, ಇದರ ವಿರುದ್ಧ ಹೋರಾಡುತ್ತೇವೆ ಎಂದು ತಿಳಿಸಿದ್ದಾರೆ.