ಬೆಂಗಳೂರು : ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಗಳನ್ನು ಆಧುನಿಕ ಮೂಲಭೂತ ಸೌಕರ್ಯಗಳೊಂದಿಗೆ ಅಭಿವೃದ್ಧಿ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ ಅವರು ಹೇಳಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್, ದೇವನಹಳ್ಳಿ ತಾಲ್ಲೂಕು ಪಂಚಾಯಿತಿಯಡಿ ದೇವನಹಳ್ಳಿ ತಾಲ್ಲೂಕು ಅಣ್ಣೇಶ್ವರ ಗ್ರಾಮ ಪಂಚಾಯಿತಿ ಸಮಗ್ರ ಅಭಿವೃದ್ಧಿ ಯೋಜನೆಯಡಿ ವಿವಿಧ ಕಟ್ಟಡ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನಾ ಕಾರ್ಯಕ್ರಮವನ್ನು ನೆರವೇರಿಸಿ ಅವರು ಮಾತನಾಡಿದರು.
ಗ್ರಾಮಗಳಲ್ಲಿ ರಸ್ತೆ, ಚರಂಡಿ, ಕುಡಿಯುವ ನೀರು ಸೇರಿದಂತೆ ಮೂಲಭೂತ ಸೌಕರ್ಯಗಳು ಉತ್ತಮವಾಗಿದ್ದರೆ ಅಂತಹ ಗ್ರಾಮಗಳು ಅಭಿವೃದ್ಧಿಯಾಗುತ್ತವೆ. ಗ್ರಾಮ ಸಡಕ್ , ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಹಲವು ಅಭಿವೃದ್ಧಿ ಕಾರ್ಯಗಳು ಆಗುತ್ತಿವೆ.
ಇದನ್ನೂ ಓದಿ: ಕಲುಷಿತ ಕಾಂಗ್ರೆಸ್ ಎಂದು ಕಿಡಿಕಾರಿದ ಜೆಡಿಎಸ್!
ಕೆರೆ ಒತ್ತುವರಿ ತೆರವು, ಕೆರೆ ಹೂಳೆತ್ತುವ ಕಾರ್ಯಕ್ರಮ, ಪ್ರತಿಯೊಬ್ಬ ವಿದ್ಯಾರ್ಥಿಗೆ ಗುಣಮಟ್ಟದ ಶಿಕ್ಷಣ ನೀಡುವ ಹಿತದೃಷ್ಟಿಯಿಂದ ಸಿ.ಎಸ್. ಆರ್ ಅನುದಾನದಡಿ ಸರ್ಕಾರಿ ಶಾಲೆಗಳ ನವೀಕರಣ ಮಾಡುವ ಕಾರ್ಯಗಳು ಈಗಾಗಲೇ ಪ್ರಾರಂಭ ಮಾಡಲಾಗಿದೆ. ಅಣ್ಣೇಶ್ವರ ಗ್ರಾಮಪಂಚಾಯಿತಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹತ್ತಿರ ಇರುವುದರಿಂದ ಬಹಳಷ್ಟು ಅಭಿವೃದ್ಧಿ ಕಂಡಿದೆ.
ಇಂದು ಅಣ್ಣೇಶ್ವರ ಗ್ರಾಮ ಪಂಚಾಯಿತಿಯ ವ್ಯಾಪ್ತಿಯಲ್ಲಿ ಸುಮಾರು 11 ಕೋಟಿ ರೂಗಳ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿಸಲಾಗಿದೆ. ಗ್ರಾಮ ಪಂಚಾಯಿತಿಗಳಿಗೆ ಬರುವ ತೆರಿಗೆ ಹಣ ಸರಿಯಾದ ರೀತಿಯಲ್ಲಿ ಬಳಕೆ ಮಾಡಿಕೊಂಡರೆ ಅಭಿವೃದ್ಧಿ ಸಾಧ್ಯ. ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ ಅಲ್ಲಿನ ಸಮಸ್ಯೆಗಳು ಆಲಿಸಿ, ಸಮಸ್ಯೆಗಳಿಗೆ ಪರಿಹಾರ ನೀಡಲಾಗುವುದು, ಗ್ರಾಮ ಪಂಚಾಯಿತಿಗಳ ಅಭಿವೃದ್ಧಿಗೆ ಬದ್ಧರಾಗಿದ್ದೇವೆ ಎಂದು ಸಚಿವರು ಹೇಳಿದರು.
ಕಾರ್ಯಕ್ರಮದಲ್ಲಿ ಅಣ್ಣೇಶ್ವರ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಉಮಾ ಮುನಿರಾಜು, ಉಪಾಧ್ಯಕ್ಷ ಮುನಿರಾಜಪ್ಪ, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಟಿ. ಕೆ ರಮೇಶ್, ದೇವನಹಳ್ಳಿ ತಾಲೂಕು ಕಾರ್ಯನಿರ್ವಾಹಕ ಅಧಿಕಾರಿ ಶ್ರೀನಾಥ್ ಗೌಡ, ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಚೆನ್ನಳ್ಳಿ ರಾಜಣ್ಣ, ಮಾಜಿ ಸದಸ್ಯ ಕೆ.ಸಿ ಮಂಜುನಾಥ್, ಹಿಂದುಳಿದ ವರ್ಗಗಳ ಉಪಾಧ್ಯಕ್ಷ ಜಗನ್ನಾಥ, ದೇವನಹಳ್ಳಿ ಮಾಜಿ ಪುರಸಭೆ ಅಧ್ಯಕ್ಷ ಎಂ ನಾರಾಯಣ ಸ್ವಾಮಿ, ಅಣ್ಣೇಶ್ವರ ಗ್ರಾಮಪಂಚಾಯಿತಿ ಸದಸ್ಯರು, ಚುನಾಯಿತ ಜನಪ್ರತಿನಿಧಿಗಳು, ಮುಖಂಡರು, ತಾಲ್ಲೂಕು ಮಟ್ಟದ ಅಧಿಕಾರಿಗಳು, ಪಂಚಾಯಿತಿ ಅಧಿಕಾರಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.