Sunday, December 22, 2024

ರಾಜ್ಯದಲ್ಲಿ ‘ಸ್ಪೋರ್ಟ್ಸ್‌ ಸಿಟಿ’ ನಿರ್ಮಾಣಕ್ಕೆ ಒತ್ತು: ಗೃಹ ಸಚಿವ ಡಾ.‌ ಜಿ ಪರಮೇಶ್ವರ್

ಬೆಂಗಳೂರು: ನಮ್ಮ ರಾಜ್ಯದಲ್ಲಿ ಕ್ರೀಡೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಎಪ್ಪತ್ತು ಎಕರೆ ವ್ಯಾಪ್ತಿಯ ‘ಸ್ಪೋರ್ಟ್ಸ್ ಸಿಟಿ’ ನಿರ್ಮಿಸುವ ಪ್ರಸ್ತಾವನೆ ಸರ್ಕಾರದ ಮುಂದೆ ಇದ್ದು, ಮುಂಬರುವ ದಿನಗಳಲ್ಲಿ ಕಾರ್ಯಗತಗೊಳಿಸಲಾಗುವುದು ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಹೇಳಿದರು.

ರಾಜಭವನದ ಗಾಜಿನ ಮನೆಯಲ್ಲಿ ನಡೆದ ಕರ್ನಾಟಕ ಒಲಿಂಪಿಕ್ಸ್ ಸಂಸ್ಥೆಯ 2023ನೇ ಸಾಲಿನ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಅವರು, “ರಾಜ್ಯದ ಯುವಕರು ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಲ್ಲಿ ಸಾಧನೆ ಮಾಡಬೇಕು. ಈ ನಿಟ್ಟಿನಲ್ಲಿ ಯುವಕರಿಗೆ ಕ್ರೀಡೆಯನ್ನು ಉತ್ತೇಜಿಸುವ ಕೆಲಸವನ್ನು ಸರ್ಕಾರ ಮಾಡುತ್ತಿದೆ. ಸಂಕಲ್ಪ ತೊಟ್ಟು ಶ್ರಮದಿಂದ ಕ್ರೀಡಾ ಅಭ್ಯಾಸ ನಡೆಸಿ, ರಾಜ್ಯಕ್ಕೆ ಮತ್ತು ದೇಶಕ್ಕೆ ಕೀರ್ತಿ ತಂದು ಕೊಡಬೇಕು. ಸರ್ಕಾರ ಎಲ್ಲ ರೀತಿಯ ನೆರವು ನೀಡಲಿದೆ” ಎಂದು ತಿಳಿಸಿದರು.

ಇದನ್ನೂ ಓದಿ: ಭಜರಂಗ್ ಪುನಿಯಾ ಜೊತೆ ಕುಸ್ತಿ ಅಖಾಡಕ್ಕಿಳಿದ ರಾಹುಲ್ ಗಾಂಧಿ!

“ಆಸ್ಟ್ರೇಲಿಯಾ, ಅಮೆರಿಕ, ಚೀನಾ ದೇಶಗಳಲ್ಲಿ ಕ್ರೀಡಾ ವಿಶ್ವವಿದ್ಯಾಲಯಗಳನ್ನು ಸ್ಥಾಪಿಸಲಾಗಿದೆ. ಅದೇ ಮಾದರಿಯಲ್ಲಿ ರಾಜ್ಯದಲ್ಲಿ ಕ್ರೀಡಾ ವಿಶ್ವವಿದ್ಯಾಲಯವನ್ನು ಸ್ಥಾಪಿಸಿದರೆ, ಯುವಕರಿಗೆ ಅನುಕೂಲವಾಗಲಿದೆ. ಈ ಬಗ್ಗೆ ಮುಖ್ಯಮಂತ್ರಿಯವರ ಗಮನಕ್ಕೆ ತರಲಾಗುವುದು” ಎಂದರು.

ಬಾಸ್ಕೆಟ್ ಬಾಲ್ ಕ್ರೀಡಾಂಗಣ ನಿರ್ಮಾಣಕ್ಕೆ 15 ಎಕರೆ ಮೀಸಲು 

ಸುಸಜ್ಜಿತವಾದ ಬಾಸ್ಕೆಟ್ ಬಾಲ್ ಕ್ರೀಡಾಂಗಣ ನಿರ್ಮಾಣಕ್ಕೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ 5 ಎಕರೆ ಭೂಮಿಯನ್ನು ಮೀಸಲಿಡಲಾಗಿದೆ. ಅಲ್ಲದೇ, ರಾಜ್ಯದಲ್ಲಿ 15ಕ್ಕೂ ಹೆಚ್ಚು ಸಿಂಥೆಟಿಕ್ ಟ್ರ್ಯಾಕ್‌ಗಳನ್ನು ನಿರ್ಮಿಸಲಾಗಿದೆ. ತುಮಕೂರಿನಲ್ಲಿ 58 ಕೋಟಿ ರೂ. ಅನುದಾನದಲ್ಲಿ ಸುಸಜ್ಜಿತವಾದ ಕ್ರೀಡಾಂಗಣವನ್ನು ಸರ್ಕಾರ ನಿರ್ಮಿಸಿದೆ.

ಕಂಠೀರವ ಸ್ಟೇಡಿಯಂಗಿಂತ ಸುಸಜ್ಜಿತವಾಗಿದೆ. ಸುಮಾರು 800 ಅಥ್ಲೆಟ್‌ಗಳು ಭಾಗವಹಿಸಬಹುದು. ಇದೇ ಮಾದರಿಯ ಕ್ರೀಡಾಂಗಣಗಳನ್ನು ಬೇರೆ ಜಿಲ್ಲೆಗಳಲ್ಲಿಯೂ ನಿರ್ಮಿಸಲಾಗುವುದು” ಎಂದು ಹೇಳಿದರು.

 ಯುವಕರನ್ನು ಕ್ರೀಡಾ ಕ್ಷೇತ್ರಕ್ಕೆ ಸೆಳೆಯಲು ಶೇ 3ರಷ್ಟು ಮೀಸಲಾತಿ 

“ಯುವಕರನ್ನು ಕ್ರೀಡಾ ಕ್ಷೇತ್ರಕ್ಕೆ ಸೆಳೆಯಲು ಪೊಲೀಸ್ ಇಲಾಖೆಯ ನೇಮಕಾತಿಯಲ್ಲಿ ಕ್ರೀಡಾಪಟುಗಳಿಗೆ ಶೇ. 3ರಷ್ಟು ಮೀಸಲಾತಿ‌ ಕಲ್ಪಿಸಲಾಗಿದೆ. ಇದನ್ನು ರಾಜ್ಯದ ಎಲ್ಲ ಇಲಾಖೆಗಳ ನೇಮಕಾತಿಗೆ ಅನ್ವಯಿಸಲಾಗುವುದು” ಎಂದರು.

ರಾಜ್ಯಪಾಲರಾದ ಥಾವರ್‌ಚಂದ್ ಗೆಹ್ಲೋಟ್, ಕ್ರೀಡಾ ಮತ್ತು ಯುವಜನ ಸಬಲೀಕರಣ ಸಚಿವ ಬಿ.ನಾಗೇಂದ್ರ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಡಾ. ಗೋವಿಂದರಾಜು ಅವರು ಉಪಸ್ಥಿತರಿದ್ದರು.

 

 

 

  

RELATED ARTICLES

Related Articles

TRENDING ARTICLES