ಶಿವಮೊಗ್ಗ: ವಿದ್ಯಾರ್ಥಿಗಳು ಶೌಚಾಲಯ ಸ್ವಚ್ಛಗೊಳಿಸುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್ ಆದ ಹಿನ್ನೆಲೆಯಲ್ಲಿ ಜಿಲ್ಲೆಯ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕರೊಬ್ಬರನ್ನು ಇಂದು ಅಮಾನತುಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ವೈರಲ್ ವಿಡಿಯೋದಲ್ಲಿ ಶಾಲೆಯ ಕೆಲವು ವಿದ್ಯಾರ್ಥಿಗಳು ಶೌಚಾಲಯ ಸ್ವಚ್ಛಗೊಳಿಸುವುದು ಕಂಡುಬಂದಿದೆ. ಇದರಿಂದ ಪೋಷಕರು ಪ್ರತಿಭಟನೆ ನಡೆಸಿದರು. ಈ ತಿಂಗಳಲ್ಲಿ ರಾಜ್ಯದಲ್ಲಿ ನಡೆದ ಮೂರನೇ ಘಟನೆ ಇದಾಗಿದೆ.
ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಸರ್ಕಾರಿ ಶಾಲೆಯೊಂದರಲ್ಲಿ ಶನಿವಾರ ಆರನೇ ತರಗತಿಯ ವಿದ್ಯಾರ್ಥಿಗಳಿಗೆ ಶೌಚಾಲಯ ಸ್ವಚ್ಛಗೊಳಿಸುವಂತೆ ಹೇಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆದರೆ, ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳು ಮುಖ್ಯಶಿಕ್ಷಕರನ್ನು ವಿಚಾರಣೆಗೆ ಒಳಪಡಿಸಿದಾಗ, ವಿದ್ಯಾರ್ಥಿಗಳಿಗೆ ನೀರು ಹಾಕಲು ಮಾತ್ರ ಹೇಳಲಾಗಿತ್ತು, ಶೌಚಾಲಯ ಸ್ವಚ್ಛಗೊಳಿಸಲು ಹೇಳಿರಲಿಲ್ಲ ಎಂದಿದ್ದಾರೆ.
“ಬುಧವಾರ ವಾಟ್ಸಾಪ್‌ನಲ್ಲಿ 10 ಸೆಕೆಂಡ್‌ಗಳ ವೀಡಿಯೋವನ್ನು ಸ್ವೀಕರಿಸಿದ್ದೇನೆ, ಇದರಲ್ಲಿ ವಿದ್ಯಾರ್ಥಿಗಳು ಶೌಚಾಲಯಗಳನ್ನು ಸ್ವಚ್ಛಗೊಳಿಸುತ್ತಿರುವುದು ಕಂಡುಬಂದಿದೆ. ತಕ್ಷಣವೇ ಶಾಲೆಗೆ ಭೇಟಿ ನೀಡಿ ವಿವರವಾದ ವಿಚಾರಣೆ ನಡೆಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಇದನ್ನೂ ಓದಿ: Panambur Beach: ಪಣಂಬೂರು ಬೀಚ್‌ನಲ್ಲಿ ತೇಲುವ ಸೇತುವೆ : ಪ್ರವಾಸಿಗರು ಫುಲ್ ಖುಷ್
ಬಿಇಒ ಸಲ್ಲಿಸಿದ ವರದಿ ಆಧಾರದ ಮೇಲೆ ಶಾಲೆಯ ಮುಖ್ಯೋಪಾಧ್ಯಾಯರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗಿದೆ. ಕಳೆದ ವಾರ ಶಾಲೆಯಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ಮುಖ್ಯಶಿಕ್ಷಕ ಶಂಕರಪ್ಪ ಅವರನ್ನು ಅಮಾನತುಗೊಳಿಸಿದ್ದೇವೆ ಎಂದು ಅವರು ತಿಳಿಸಿದರು.
ಬೆಂಗಳೂರಿನಲ್ಲಿರುವ ರಾಜ್ಯ ಸರ್ಕಾರಿ ಶಾಲೆಯೊಂದರಲ್ಲಿ ವಿದ್ಯಾರ್ಥಿಗಳಿಗೆ ಶೌಚಾಲಯಗಳನ್ನು ಸ್ವಚ್ಛಗೊಳಿಸಲು ಹೇಳಲಾದ ಘಟನೆಯ ಬೆನ್ನಲ್ಲೇ ಶಿವಮೊಗ್ಗದಲ್ಲಿಯೂ ಇದೇ ರೀತಿಯ ಘಟನೆ ನಡೆದಿರುವುದನ್ನು ಕರ್ನಾಟಕ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಖಂಡಿಸಿದ್ದಾರೆ.
ಇಂತಹ ಘಟನೆಗಳು ಮರುಕಳಿಸದಂತೆ ನೋಡಿಕೊಳ್ಳಬೇಕು ಎಂದು ಶಿಕ್ಷಣ ಇಲಾಖೆಗೆ ಸೂಚನೆ ನೀಡಿದ್ದಾರೆ.