Friday, May 10, 2024

ಅಲ್ಪಸಂಖ್ಯಾತರ ಕಾಲೋನಿ ಅಭಿವೃದ್ಧಿಗೆ ಸಾವಿರ ಕೋಟಿ ಕ್ರಿಯಾ ಯೋಜನೆ ರೂಪಿಸಿ: ಸಿಎಂ ಸೂಚನೆ

ಬೆಂಗಳೂರು: ಅಲ್ಪಸಂಖ್ಯಾತರ ಕಾಲೋನಿ ಅಭಿವೃದ್ಧಿಗೆ ಸಾವಿರ ಕೋಟಿ ರೂ.ಗಳ ಕ್ರಿಯಾ ಯೋಜನೆ ರೂಪಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ವಸತಿ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿ ಇಂದು ಸಿಎಂ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜೊತೆಗೆ ಅಲ್ಪಸಂಖ್ಯಾತರು ಹೆಚ್ಚಾಗಿ ನೆಲೆಸಿರುವ ಪ್ರದೇಶಗಳನ್ನು ಗುರುತಿಸಿ, ಅನುದಾನ ಹಂಚಿಕೆ ಮಾಡುವಂತೆ ಹೇಳಿದ್ದಾರೆ.

ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರ ನೀಡುತ್ತಿದ್ದ ವಿದ್ಯಾರ್ಥಿ ವೇತನ ಸ್ಥಗಿತಗೊಂಡಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವೇ ಇದನ್ನು ಭರಿಸಲು ತೀರ್ಮಾನಿಸಿದ್ದು, 6.4 ಲಕ್ಷ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಬಿಡುಗಡೆಗೆ ಸಿದ್ಧವಾಗಿದೆ. ಆಯವ್ಯಯದಲ್ಲಿ 60 ಕೋಟಿ ರೂ. ನಿಗದಿಯಾಗಿದ್ದು, ಇಲಾಖೆಗೆ ಲಭ್ಯವಿರುವ ಅನುದಾನದಲ್ಲಿಯೇ ಮರುಹಂಚಿಕೆ ಮಾಡಿ ಹೆಚ್ಚುವರಿ 40 ಕೋಟಿ ಭರಿಸಲು ಸಿಎಂ ಸೂಚಿಸಿದರು.

ಇದನ್ನೂ ಓದಿ: ಅತಿಥಿ ಉಪನ್ಯಾಸಕರಿಗೆ ಗುಡ್ ನ್ಯೂಸ್: ಗೌರವಧನ ₹5 ಸಾವಿರ ಹೆಚ್ಚಳ  

ಅಲ್ಪಸಂಖ್ಯಾತರಿಗೆ ಸವಲತ್ತು ವಿತರಿಸುವ ವಿವಿಧ ಯೋಜನೆಗಳಿಗೆ ಆನ್‌ಲೈನ್‌ ಮೂಲಕ ಭಾರೀ ಪ್ರಮಾಣದಲ್ಲಿ ಅರ್ಜಿ ಸ್ವೀಕೃತವಾಗಿದ್ದು, ಮುಂದಿನ ವರ್ಷ ಇದಕ್ಕೆ ಹೆಚ್ಚಿನ ಅನುದಾನ ಒದಗಿಸಲು ತೀರ್ಮಾನಿಸಲಾಯಿತು. ವಸತಿ ಇಲಾಖೆ ವಿವಿಧ ವಸತಿ ಯೋಜನೆಗಳಡಿ ಪ್ರಸಕ್ತ ಸಾಲಿನಲ್ಲಿ 3 ಲಕ್ಷ ಮನೆಗಳ ನಿರ್ಮಾಣ ಗುರಿಯಿದ್ದು, ಈ ವರೆಗೆ 1.31 ಲಕ್ಷ ಮನೆಗಳ ನಿರ್ಮಾಣ ಪೂರ್ಣಗೊಂಡಿದೆ. ಮುಕ್ತಾಯದ ಹಂತದಲ್ಲಿರುವ 1.6 ಲಕ್ಷ ಮನೆಗಳನ್ನು ಮಾರ್ಚ್‌ ಒಳಗೆ ಪೂರ್ಣಗೊಳಿಸಬೇಕು. ಈ ಬಗ್ಗೆ ಜಿಲ್ಲಾ ಪಂಚಾಯಿತಿಗಳ ಸಿಇಒಗಳು ಮತ್ತು ಸಂಬಂಧಿಸಿದ ಎಂಜಿನಿಯರರ ಸಭೆ ನಡೆಸಿ, ಲಿಂಟೆಲ್‌ ಮತ್ತು ಛಾವಣಿ ಹಂತದಲ್ಲಿರುವ ಸುಮಾರು ಒಂದೂವರೆ ಲಕ್ಷಕ್ಕೂ ಹೆಚ್ಚು ಮನೆಗಳನ್ನು ಮಾರ್ಚ್‌ ಅಂತ್ಯದೊಳಗೆ ಪೂರ್ಣಗೊಳಿಸುವಂತೆ ತಿಳಿಸಲು ತಾಕೀತು ಮಾಡಿದರು.

ಕೊಳಗೇರಿ ಅಭಿವೃದ್ಧಿ ಮಂಡಳಿ

ಕೊಳೆಗೇರಿ ಅಭಿವೃದ್ಧಿ ಮಂಡಳಿಯ ವ್ಯಾಪ್ತಿಯಲ್ಲಿ ವಿವಿಧ ಯೋಜನೆಗಳಡಿ 1.8 ಲಕ್ಷ ಮನೆಗಳು ಪ್ರಗತಿಯಲ್ಲಿದೆ. ಫಲಾನುಭವಿಗಳ ವಂತಿಗೆ ಸೇರಿದಂತೆ 5 ಲಕ್ಷ ರೂ. ಗಳನ್ನು ಭರಿಸಲು ಹಾಗೂ ಇದಕ್ಕಾಗಿ ಮತ್ತು ಬಡಾವಣೆಗಳ ಮೂಲಸೌಕರ್ಯ ಅಭಿವೃದ್ಧಿಗಾಗಿ 500 ಕೋಟಿ ರೂ. ಬಿಡುಗಡೆ ಮಾಡಲು ಸಚಿವ ಸಂಪುಟ ತೀರ್ಮಾನಿಸಿದೆ. ಈ ಹಿನ್ನೆಲೆಯಲ್ಲಿ ಮುಕ್ತಾಯದ ಹಂತದಲ್ಲಿರುವ 25 ಸಾವಿರ ಮನೆಗಳನ್ನು ಫೆಬ್ರುವರಿ ಅಂತ್ಯದ ವೇಳೆ ಪೂರ್ಣಗೊಳಿಸುವಂತೆ ತಿಳಿಸಿದರು.

ಇನ್ನೂ ರಾಜೀವ್‌ ಗಾಂಧಿ ವಸತಿ ನಿಗಮದ ಮುಕ್ತಾಯದ ಹಂತದಲ್ಲಿರುವ ಮನೆಗಳನ್ನು ಪೂರ್ಣಗೊಳಿಸಲು ಅಗತ್ಯವಿರುವ ಅನುದಾನಕ್ಕೆ ಸಂಬಂಧಿಸಿದ ಪ್ರಸ್ತಾವನೆಯನ್ನು ಸಚಿವ ಸಂಪುಟದ ಮುಂದೆ ಮಂಡಿಸುವಂತೆ ಸೂಚಿಸಿದರು. ನಿಗಮದ ವ್ಯಾಪ್ತಿಯಲ್ಲಿ 2,133 ಕೋಟಿ ರೂ. ಲಭ್ಯವಿದ್ದು, ವಿವಿಧ ಹಂತಗಳಲ್ಲಿ ಪ್ರಗತಿಯಲ್ಲಿರುವ ಮನೆಗಳನ್ನು ಪೂರ್ಣಗೊಳಿಸಲು ಸೂಚಿಸಿದರು. ಸಭೆಯಲ್ಲಿ ವಸತಿ, ಅಲ್ಪಸಂಖ್ಯಾತರ ಕಲ್ಯಾಣ ಮತ್ತು ಹಜ್‌ ಸಚಿವ ಬಿ.ಝಡ್‌. ಜಮೀರ್‌ ಅಹ್ಮದ್‌ ಖಾನ್‌ ಸೇರಿ ಹಿರಿಯ ‌ಅಧಿಕಾರಿಗಳು ಭಾಗವಹಿಸಿದ್ದರು.

 

 

RELATED ARTICLES

Related Articles

TRENDING ARTICLES