ಸಿಂಧನೂರು: ನಾವು ಐದೂ ಗ್ಯಾರಂಟಿಗಳನ್ನು ಜಾರಿ ಮಾಡಿದ್ದು ಬಿಜೆಪಿಯವರಿಗೆ ನುಂಗಲಾರದ ತುತ್ತಾಗಿದೆ. ಮೋದಿ ಅವರು ರಾಜ್ಯ ಆರ್ಥಿಕವಾಗಿ ದಿವಾಳಿಯಾಗುತ್ತದೆ ಎಂದು ಭಾಷಣ ಮಾಡಿದ್ದರು. ಆದರೆ ಅವರ ಮಾತು ಮತ್ತೊಮ್ಮೆ ಸುಳ್ಳಾಗಿದೆ ಎಂದು ಟೀಕಿಸಿದ್ದಾರೆ.
ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆಯಲ್ಲಿ ಮಾತನಾಡಿದ ಅವರು,ನಮ್ಮ ಗ್ಯಾರಂಟಿ ಯೋಜನೆಗಳಿಂದಾಗಿ ಬರಗಾಲದಲ್ಲೂ ರಾಜ್ಯದ ಬಡವರು ಸಂಕಷ್ಟದಿಂದ ಪಾರಾಗಿದ್ದಾರೆ ಎಂದರು.
ಶಕ್ತಿ ಯೋಜನೆಯಡಿ 120 ಕೋಟಿ ಬಾರಿ ಮಹಿಳೆಯರು ಉಚಿತವಾಗಿ ಬಸ್ ನಲ್ಲಿ ಪ್ರಯಾಣ ಮಾಡಿದ್ದಾರೆ. 1.16 ಕೋಟಿ ಮಹಿಳೆಯರ ಖಾತೆಗೆ ತಿಂಗಳಿಗೆ 2 ಸಾವಿರ ಜಮೆ ಮಾಡಲಾಗುತ್ತಿದೆ. ಹೀಗೆ ಪ್ರತಿ ಕುಟುಂಬಕ್ಕೆ ತಿಂಗಳಿಗೆ 5-6 ಸಾವಿರ ರೂಪಾಯಿ ಉಳಿತಾಯ ಆಗುತ್ತಿದೆ. ನಾವು ಕನ್ನಡಿಗರು ಪ್ರತೀ ವರ್ಷ ಕೇಂದ್ರಕ್ಕೆ 4 ಲಕ್ಷ ಕೋಟಿ ತೆರಿಗೆ ರೂಪದಲ್ಲಿ ಹಣ ಕೊಡ್ತೀವಿ. ಆದರೆ ಕೇಂದ್ರ ನಮಗೆ ವಾಪಾಸ್ ಕೊಡುವುದು 52 ಸಾವಿರ ಕೋಟಿ ಮಾತ್ರ. ಬರಗಾಲ ಬಂದಿದ್ದರೂ ಕೇಂದ್ರದಿಂದ ನಯಾಪೈಸೆ ಬಂದಿಲ್ಲ. ಇದನ್ನು ರಾಜ್ಯದ ಜನತೆ ಬಿಜೆಪಿ ಸಂಸದರಿಗೆ ಪ್ರಶ್ನಿಸಬೇಕು ಎಂದು ಗುಡುಗಿದ್ದಾರೆ.
ಕೇಂದ್ರ ಸರ್ಕಾರವು ರಾಜ್ಯದ ಜನರ ನೆರವಿಗೆ ಬರದಿದ್ದರೂ ನಾವು ರಾಜ್ಯದ ಜನರ ಕೈ ಬಿಡುವುದಿಲ್ಲ. ಸಿಂಧನೂರಿಗೆ ಇದುವರೆಗೂ ಶೇ.80 ರಷ್ಟು ನೀರಾವರಿ ಸವಲತ್ತು ಸಿಕ್ಕಿದೆ. ಶಾಸಕರು ನೂರಕ್ಕೆ ನೂರರಷ್ಟು ನೀರಾವರಿ ಮಾಡಲು ಬದ್ಧರಾಗಿದ್ದಾರೆ.
ನಮ್ಮ ಸರ್ಕಾರ ಇದಕ್ಕೆ ಸಂಪೂರ್ಣ ಸಹಕಾರ ನೀಡಿ ರೈತರ ಬದುಕನ್ನು ಉನ್ನತೀಕರಿಸಲಿದೆ. ನವಿಲೆ ಬ್ಯಾಲೆನ್ಸಿಂಗ್ ಅಣೆಕಟ್ಟು ನಿರ್ಮಿಸಲು ನಮ್ಮ ಸರ್ಕಾರ ಸಿದ್ಧವಿದೆ. ಹಂಪನಗೌಡ ಬಾದರ್ಲಿ ಸಜ್ಜನ ಮತ್ತು ಅಭಿವೃದ್ಧಿ ಬಗ್ಗೆ ಹೆಚ್ಚು ಶ್ರಮಿಸುವ ಶಾಸಕರು. ಇವರಂತೆಯೇ ಎಲ್ಲಾ ಶಾಸಕರು ಶ್ರಮಿಸಿದರೆ ಇಡೀ ರಾಜ್ಯ ಮತ್ತು ಹೈದರಾಬಾದ್ ಕರ್ನಾಟಕ ಹೆಚ್ಚು ಅಭಿವೃದ್ಧಿಯಾಗುತ್ತದೆ.