ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ ಕೆ ಶಿವಕುಮಾರ್ ಅವರಿಗೆ ಬೆಂಗಳೂರು ಪ್ರೆಸ್ ಕ್ಲಬ್ ವಾರ್ಷಿಕ ಪ್ರಶಸ್ತಿಯನ್ನು ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಶಿವರಾಜ್ ಪಾಟೀಲ್ ಅವರು ಕಬ್ಬನ್ ಪಾರ್ಕ್ ಪ್ರೆಸ್ ಕ್ಲಬ್ ಆವರಣದಲ್ಲಿ ಇಂದು ಪ್ರದಾನ ಮಾಡಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರೆಸ್ ಕ್ಲಬ್ ಆಫ್ ಬೆಂಗಳೂರು ಕೊಡ ಮಾಡುವ “ವರ್ಷದ ವ್ಯಕ್ತಿ-ವಿಶೇಷ ವ್ಯಕ್ತಿ” ಹಾಗೂ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ, 2024ರ ಪ್ರೆಸ್ ಕ್ಲಬ್ ಡೈರಿಯನ್ನು ಬಿಡುಗಡೆಗೊಳಿಸಿದರು.
ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ, “ಸಂವಿಧಾನವೇ ನಮ್ಮ ಧರ್ಮ. ರಾಜಕೀಯ ಧರ್ಮ ಅನುಸರಿಸುವುದೇ ಸಂವಿಧಾನಕ್ಕೆ ಕೊಡುವ ಗೌರವ” ಎಂದು ಅಭಿಪ್ರಾಯ ಪಟ್ಟರು.
ಪ್ರೆಸ್ ಕ್ಲಬ್ ಆಫ್ ಬೆಂಗಳೂರು ವತಿಯಿಂದ ಇಂದು ಹಮ್ಮಿಕೊಂಡಿದ್ದ 2023ನೇ ಸಾಲಿನ ವರ್ಷದ ವ್ಯಕ್ತಿ, ವಿಶೇಷ ಪ್ರಶಸ್ತಿ ಹಾಗೂ ವಾರ್ಷಿಕ ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ಮುಖ್ಯಮಂತ್ರಿಗಳೊಂದಿಗೆ ಉದ್ಘಾಟಿಸಿ, ಮಾತನಾಡಿದೆ.
ಮಾಧ್ಯಮ ಕ್ಷೇತ್ರ ಸೇರಿದಂತೆ ವಿಶೇಷವಾಗಿ ಸಾಧನೆ ಮಾಡಿದವರನ್ನು ಗುರುತಿಸಿ ಪ್ರೆಸ್ ಕ್ಲಬ್ ಆಫ್ ಬೆಂಗಳೂರು ವತಿಯಿಂದ… pic.twitter.com/Rg2jwuTQJe
— DK Shivakumar (@DKShivakumar) December 31, 2023
“ಸುದೀರ್ಘ ಮತ್ತು ಅರ್ಥಪೂರ್ಣ ಚರ್ಚೆಯ ಬಳಿಕ ನಮ್ಮ ಈ ಸಂವಿಧಾನ ಜಾರಿಯಾಗಿದೆ. ಆದ್ದರಿಂದ ಈ ಸಂವಿಧಾನವನ್ನು ಗೌರವಿಸುವುದು, ಪಾಲಿಸುವುದು ಎಲ್ಲಾ ರಾಜಕೀಯ ಪಕ್ಷಗಳ, ವ್ಯಕ್ತಿಗಳ ಕರ್ತವ್ಯ. ಅವಕಾಶ ವಂಚಿತರ ಪರವಾಗಿ, ಧ್ವನಿ ಇಲ್ಲದವರ ಪರವಾಗಿ ಧ್ವನಿ ಎತ್ತಿ ಬೆಂಬಲಿಸುವುದು, ವಸ್ತುನಿಷ್ಠವಾಗಿ ಸುದ್ದಿಗಳನ್ನು ವರದಿ ಮಾಡುವುದು ಪತ್ರಿಕಾ ವೃತ್ತಿಯ ಮೂಲಭೂತ ಮೌಲ್ಯ. ಈ ಮೌಲ್ಯಗಳನ್ನು ಪಾಲಿಸುವುದೇ ಸಂವಿಧಾನಕ್ಕೆ ಕೊಡುವ ಗೌರವ. ಇದನ್ನು ಬಿಟ್ಟು ನನ್ನ ಕಾರಿನ ಮೇಲೆ ಕಾಗೆ ಕುಳಿತದ್ದನ್ನು ದೊಡ್ಡ ಚರ್ಚೆ ಮಾಡಿ ಮೌಡ್ಯ ಬೆಳೆಸಿದಂತಹ ರೀತಿಯಲ್ಲಿ ಕೆಲಸ ಮಾಡಬೇಡಿ” ಎಂದು ಕಿವಿಮಾತು ಹೇಳಿದರು.