ಬೆಂಗಳೂರು : ರಾಮಮಂದಿರ ಉದ್ಘಾಟನೆಗೆ ದಿನಗಣನೆ ಶುರುವಾಗಿದ್ದು, ರಾಮಲಲ್ಲಾನ ಪ್ರಾಣ ಪ್ರತಿಷ್ಠೆಗೆ ಸಕಲ ಸಿದ್ಧತೆಗಳು ನಡೆಯುತ್ತಿವೆ. ಈ ಬೆನ್ನಲ್ಲೇ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಜನವರಿ 22ರಂದು ರಾಜ್ಯದ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಿದ್ದಾರೆ.
ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸುವುದರ ಜೊತೆಗೆ, ಅಯೋಧ್ಯೆಯ ರಾಮಮಂದಿರ ಉದ್ಘಾಟನೆ ದಿನದಂದು ರಾಜ್ಯಾದ್ಯಂತ ಮದ್ಯ ಮಾರಾಟ ನಿಷೇಧ ಮಾಡಿ ಆದೇಶ ಹೊರಡಿಸಿದ್ದಾರೆ. ಅಲ್ಲದೇ ಜನವರಿ 22ರಂದು ಎಲ್ಲಾ ಸರ್ಕಾರಿ ಕಟ್ಟಡಗಳನ್ನು ಅಲಂಕರಿಸಲು ಮತ್ತು ಪಟಾಕಿಗಳ ವ್ಯವಸ್ಥೆಯನ್ನು ಮಾಡಲು ಕರೆ ಕೊಟ್ಟಿದ್ದಾರೆ.
ರಾಜ್ಯದಲ್ಲೂ ರಜೆ ಘೋಷಣೆಗೆ ಒತ್ತಾಯ
ರಾಮ ಮಂದಿರ ಪ್ರಾಣ ಪ್ರತಿಷ್ಠೆಗೆ ಸಾರ್ವತ್ರಿಕ ರಜೆ ಕೋರಿಕೆ ಬಗ್ಗೆ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಪ್ರತಿಕ್ರಿಯಿದ್ದಾರೆ. ಪ್ರಾಣ ಪ್ರತಿಷ್ಠೆ ಜಗತ್ತಿನ ಉತ್ಸವ. ದೇಶದಲ್ಲಿ ಹಿಂದೂಗಳು ಬಹುಸಂಖ್ಯಾತರು ಇದ್ದಾರೆ. ಎಲ್ಲರ ಭಾವನೆ ಮನ್ನಿಸಿ, ಗೌರವಿಸಿ ರಜೆ ಘೋಷಿಸಬೇಕು. ಉಡುಪಿ ಶಾಸಕರು ರಜೆ ಕೋರಿದ್ದಾರೆ, ನಾನು ರಜೆಯನ್ನು ಆಗ್ರಹಿಸುತ್ತೇನೆ ಎಂದು ಹೇಳಿದ್ದಾರೆ.