ಬೆಂಗಳೂರು : ಹನುಮನ ಎದೆಗಿಂತ ಮಿಗಿಲಾದ ಮಂದಿರ (ಗುಡಿ) ರಾಮನಿಗೆ ಬೇರಾವುದೂ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ನಾಯಕರಿಗೆ ಚಾಟಿ ಬೀಸಿದ್ದಾರೆ.
ರಾಮಮಂದಿರ ಉದ್ಘಾಟನೆ ಕುರಿತು ಪ್ರತಿಕ್ರಿಯಿಸಿರುವ ಅವರು, ರಾಮನಿಗೆ ಹನುಮನ ಎದೆಗಿಂತ ಬೇರಾವುದಾದರೂ ಶ್ರೇಷ್ಠ ಗುಡಿಯನ್ನು ಈ ಜಗತ್ತಿನಲ್ಲಿ ಯಾರಾದರೂ ಕಟ್ಟಲು ಸಾಧ್ಯವೇ? ನಿಜ ರಾಮಭಕ್ತರು ಉತ್ತರ ಹೇಳಬೇಕು ಎಂದು ಪ್ರಶ್ನಿಸಿದ್ದಾರೆ.
ರಾಮ ತನ್ನ ಭಕ್ತರಲ್ಲಿ ನೋಡುವುದು ಅವರ ಸತ್ಯಸಂಧತೆ, ವಚನ ಪರಿಪಾಲನೆಯನ್ನೇ ಹೊರತು ಢಾಂಭಿಕತೆಯನ್ನಲ್ಲ. ರಾಜಕಾರಣಿಗಳಿಂದ ರಾಮ ನಿರೀಕ್ಷಿಸುವುದು ಶಾಂತಿ, ನೆಮ್ಮದಿ, ಸಹಬಾಳ್ವೆಯಿಂದ ಕೂಡಿದ ರಾಮರಾಜ್ಯದ ನಿರ್ಮಾಣವನ್ನು ಮಾತ್ರ. ಇದನ್ನು ರಾಮಮಂದಿರದ ಬಗ್ಗೆ ಹೆಚ್ಚು ತಲೆಕೆಡಿಸಿಕೊಳ್ಳಲಿಲ್ಲ. ಬದಲಿಗೆ ಊರೂರಿನಲ್ಲಿಯೂ ಹನುಮನಿಗೆ ಗುಡಿ ಕಟ್ಟಿದೆವು ಎಂದು ಹೇಳಿದ್ದಾರೆ.
ಹನುಮ ರಾಮನಾಮಕ್ಕಿಂತ ಮಿಗಿಲಿಲ್ಲ
ನನಗೆ ತಿಳಿದಿರುವ ರಾಮ, ನಾನು ಪೂಜಿಸುವ ರಾಮ ವಚನ ಪರಿಪಾಲನೆಯನ್ನೇ ತನ್ನ ಉಸಿರಾಗಿಸಿಕೊಂಡವನು. ನನಗೆ ತಿಳಿದಿರುವ ಹನುಮ, ನಾನು ಪೂಜಿಸುವ ಹನುಮ ರಾಮನಾಮಕ್ಕಿಂತ ಮಿಗಿಲಿಲ್ಲ, ರಾಮನೇ ಜಗವೆಲ್ಲಾ ಎಂದು ತಿಳಿದು ರಾಮಭಕ್ತಿಯನ್ನೇ ಎದೆಯೊಳಗೆ ಇಳಿಸಿಕೊಂಡವನು. ಹನುಮನ ನಾಡಿನವರಾದ ನಮಗೆ ರಾಮನ ಬಗ್ಗೆ, ರಾಮಭಕ್ತಿಯ ಬಗ್ಗೆ ಹೇಳಿಕೊಡುವ ಅಗತ್ಯವಿಲ್ಲ. ಅದೊಂದು ತೋರ್ಪಡಿಕೆಯ ವಿದ್ಯಮಾನವೂ ಅಲ್ಲ ಎಂದು ಕುಟುಕಿದ್ದಾರೆ.