Sunday, December 22, 2024

ಬಿಜೆಪಿಗೆ ರಾಷ್ಟ್ರಧ್ವಜ ಇಷ್ಟವಿಲ್ಲದಿದ್ದರೆ ಪಾಕಿಸ್ತಾನಕ್ಕೆ ಹೋಗಲಿ : ಪ್ರಿಯಾಂಕ್ ಖರ್ಗೆ

ಬೆಂಗಳೂರು : ಬಿಜೆಪಿಗರಿಗೆ ರಾಷ್ಟ್ರಧ್ವಜ, ದೇಶದ ಸಂವಿಧಾನ, ದೇಶದ ಐಕ್ಯತೆ ಇಷ್ಟವಿಲ್ಲವೆಂದರೆ ಅವರ ಪ್ರೀತಿಪಾತ್ರವಾದ ಪಾಕಿಸ್ತಾನಕ್ಕೆ ಹೋಗಲಿ ಎಂದು ಎಂದು ಬಿಜೆಪಿಗರ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ಕಿಡಿಕಾರಿದ್ದಾರೆ.

ಮಂಡ್ಯದ ಕೆರಗೋಡಿನಲ್ಲಿ ಹನುಮಧ್ವಜ ವಿವಾದದ ಬಗ್ಗೆ ಟ್ವೀಟ್ ಮಾಡಿರುವ ಅವರು, ರಾಷ್ಟ್ರ ಧ್ವಜವನ್ನು ದ್ವೇಷಿಸುವ ಮೂಲಕ ಬಿಜೆಪಿಗರು ತಮಗೆ ತಾವೇ ದೇಶದ್ರೋಹಿಗಳು ಎಂದು ಸರ್ಟಿಫಿಕೇಟ್ ಕೊಟ್ಟುಕೊಂಡಿದ್ದಾರೆ ಎಂದು ಕುಟುಕಿದ್ದಾರೆ.

ಸಮಾಜ ಶಾಂತಿಯುತವಾಗಿದ್ದರೆ ಬಿಜೆಪಿಗೆ ತಿಂದ ಅನ್ನ ಜೀರ್ಣವಾಗುವುದಿಲ್ಲ ಎನಿಸುತ್ತದೆ. ಮಂಡ್ಯದಲ್ಲಿ ಬೆಂಕಿ ಹತ್ತಿಸಿ ಆ ಬೆಂಕಿಯಲ್ಲಿ ರಾಜಕೀಯದ ಚಳಿ ಕಾಯಿಸಿಕೊಳ್ಳುತ್ತಿರುವ ಬಿಜೆಪಿ ನಾಯಕರು ಅತ್ಯಂತ ಕೀಳು ಮಟ್ಟಕ್ಕೆ ಇಳಿದಿದ್ದಾರೆ. ಬಿಜೆಪಿಯ ಯಾವುದೇ ತಂತ್ರ, ಕುತಂತ್ರಗಳಿಗೆ ನಾವು ಬಗ್ಗುವುದಿಲ್ಲ, ಬಗ್ಗುಬಡಿಯುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

ಇಷ್ಟು ದಿನ ಕರಾವಳಿಯನ್ನು ಕೋಮು ರಾಜಕಾರಣದ ಪ್ರಯೋಗಶಾಲೆಯನ್ನಾಗಿ ಮಾಡಿಕೊಂಡಿದ್ದ ಬಿಜೆಪಿ ಹಾಗೂ ಸಂಘ ಪರಿವಾರ ಈಗ ಮಂಡ್ಯದಲ್ಲಿ ತಮ್ಮ ಪ್ರಯೋಗ ಆರಂಭಿಸಿದೆ. ತ್ರಿವರ್ಣ ಧ್ವಜವನ್ನು ವಿರೋಧಿಸಿದ್ದ ಆರ್​ಎಸ್​ಎಸ್​ ಹೇಳಿಕೊಟ್ಟ ಪಾಠದಂತೆ ಬಿಜೆಪಿಯೂ ತಿರಂಗಾ ಕಂಡರೆ ಉರಿದು ಬೀಳುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಬಿಜೆಪಿ ಕಾಲ ಕೆಳಗಿನ ಕಸದಂತೆ ನೋಡುವುದೇಕೆ?

ರಾಷ್ಟ್ರಧ್ವಜಕ್ಕೆ ಕೈ ಮುಗಿಯುವ ಬದಲು ಬಿಜೆಪಿ ಕೆಂಡ ಕಾರುತ್ತಿದೆ. ತಮಗೆ ತಾವೇ ದೇಶದ್ರೋಹಿಗಳೆಂದು ಸರ್ಟಿಫಿಕೇಟ್ ಕೊಟ್ಟುಕೊಂಡಿದ್ದಾರೆ. ರಾಷ್ಟ್ರ ಧ್ವಜದ ಬದಲು ಏಕಾಏಕಿ ಭಾಗವಾಧ್ವಜ ಹಾರಿಸುವ ಷಡ್ಯಂತ್ರ ರೂಪಿಸಿದ್ದು ಯಾರು? ಅನುಮತಿ ಪತ್ರದ ಷರತ್ತುಗಳನ್ನು ಉಲ್ಲಂಘಿಸಲು ಪ್ರೇರೇಪಿಸಿದ್ದು ಯಾರು? ಬಿಜೆಪಿ ಅದೆಷ್ಟು ದಿನಗಳಿಂದ ಶಾಂತಿ ಕೆಡಿಸುವ ಸಂಚು ರೂಪಿಸಿತ್ತು? ಕಾನೂನು, ನೀತಿ ನಿಯಮಗಳೇನು ಬಿಜೆಪಿ ಕಾಲ ಕೆಳಗಿನ ಕಸದಂತೆ ನೋಡುವುದೇಕೆ?ಎಂದು ಪ್ರಿಯಾಂಕ್​ ಖರ್ಗೆ ಹರಿಹಾಯ್ದಿದ್ದಾರೆ.

RELATED ARTICLES

Related Articles

TRENDING ARTICLES