Saturday, August 23, 2025
Google search engine
HomeUncategorizedರಾಜ್ಯದ ಅನ್ಯಾಯ ಸರಿಪಡಿಸುವ ಅಧಿಕಾರ ಕೇಂದ್ರಕ್ಕಿಲ್ಲವಾದರೆ ಆ ಸರ್ಕಾರ ಯಾಕಿರಬೇಕು!

ರಾಜ್ಯದ ಅನ್ಯಾಯ ಸರಿಪಡಿಸುವ ಅಧಿಕಾರ ಕೇಂದ್ರಕ್ಕಿಲ್ಲವಾದರೆ ಆ ಸರ್ಕಾರ ಯಾಕಿರಬೇಕು!

ದೆಹಲಿ: ಹಣಕಾಸು ಆಯೋಗ ಸ್ವಾಯತ್ತ ಸಂಸ್ಥೆಯಾಗಿದ್ದರೂ ಒಂದು ರಾಜ್ಯಕ್ಕೆ ಆಗಿರುವ ಅನ್ಯಾಯ, ತಾರತಮ್ಯವನ್ನು ಸರಿಪಡಿಸುವುದು ಕೇಂದ್ರ ಸರ್ಕಾರದ ಕರ್ತವ್ಯ. ಈ ಅಧಿಕಾರ ಕೇಂದ್ರ ಸರ್ಕಾರಕ್ಕೆ ಇಲ್ಲವಾದರೆ ಆ ಸರ್ಕಾರ ಯಾಕಿರಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಪ್ರಶ್ನಿಸಿದರು.

ಕೇಂದ್ರ ಸರ್ಕಾರದ ಅನುದಾನ ತಾರತಮ್ಯ ಖಂಡಿಸಿ ದೆಹಲಿಯ ಜಂತರ್ ಮಂತರ್ ಮೈದಾನದಲ್ಲಿ ಕರ್ನಾಟಕ ಸರ್ಕಾರ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದರು.

ರಾಜ್ಯಕ್ಕೆ ಅನುದಾನ ನೀಡುವ ಅಧಿಕಾರ ಹಣ ಕಾಸು ಆಯೋಗದ ಮುಂದೆ ಇದೆ. ಕೇಂದ್ರ ಸರ್ಕಾರದ ಕೈಯಲ್ಲಿಲ್ಲ ಎಂದು ಶ್ರೀಮತಿ ನಿರ್ಮಲಾ ಸೀತರಾಮನ್ ಅವರು ಹೇಳಿದ್ದಾರೆ. ನಿಮ್ಮ ಬಳಿ ಅಧಿಕಾರವೇ ಇಲ್ಲವಾದರೆ ಸರ್ಕಾರ ಯಾಕಿರಬೇಕು? ರಾಜ್ಯಕ್ಕೆ ಅನ್ಯಾಯವಾಗಿರುವುದನ್ನು ಸರಿಪಡಿಸುವುದು ಕೇಂದ್ರ ಸರ್ಕಾರದ ಕೆಲಸವಲ್ಲವೇ? ಎಂದರು.

ಇದನ್ನೂ ಓದಿ: ರಾಜ್ಯದ ಜನತೆಗೆ ಕೇಂದ್ರದಿಂದ ಅನ್ಯಾಯ: ಸಚಿವ ಕೆ.ಹೆಚ್​ ಮುನಿಯಪ್ಪ!

ಕರ್ನಾಟಕ ರಾಜ್ಯದ ಇತಿಹಾಸದಲ್ಲೇ ಇದೊಂದು ಐತಿಹಾಸಿಕ ದಿನ. ಮನುಷ್ಯ ಹುಟ್ಟಿದ ನಂತರ ಏನಾದರೂ ಸಾಕ್ಷಿಗುಡ್ಡೆ ಬಿಟ್ಟು ಹೋಗಬೇಕು. ಅದರಂತೆ ಈ ಹೋರಾಟ ಮುಂದಿನ ಪೀಳಿಗೆಗೆ ಒಂದು ಸಾಕ್ಷಿಗುಡ್ಡೆಯಾಗಲಿದೆ. ಇಲ್ಲಿ ನಾನು ಹಾಗೂ ಮುಖ್ಯಮಂತ್ರಿ ಮಾತ್ರ ಬಂದು ಕೂತಿಲ್ಲ. ನಮ್ಮ ರಾಜ್ಯದ ಜನತೆ ಆರಿಸಿರುವ 138 ಶಾಸಕರು, ಪರಿಷತ್ ಸದಸ್ಯರು ಇಲ್ಲಿಗೆ ಬಂದು ರಾಜ್ಯದ ಜನರ ಪರವಾಗಿ ಹೋರಾಟ ಮಾಡುತ್ತಿದ್ದೇವೆ. ನಮ್ಮ ಜನರ ಬೆವರು, ತೆರಿಗೆ, ನಮ್ಮ ಹಕ್ಕು. ಕರ್ನಾಟಕಕ್ಕೆ ನ್ಯಾಯ ಸಿಗಬೇಕು, ನಮ್ಮ ಪಾಲಿನ ಹಣ ನಮಗೆ ಸಿಗಬೇಕು ಎಂದು ಈ ಹೋರಾಟ ಮಾಡುತ್ತಿದ್ದೇವೆ. ಜನರ ಋಣ ತೀರಿಸಲು, ಬಡವರಿಗೆ ನ್ಯಾಯ ಒದಗಿಸಲು, ಬರದಲ್ಲಿ ತತ್ತರಿಸಿರುವ ಜನರ ಹಸಿವು ನೀಗಿಸಲು ನಾವಿಲ್ಲಿ ಸೇರಿದ್ದೇವೆ ಎಂದರು.

ನಮ್ಮ ಬಗ್ಗೆ ಟೀಕೆ ಮಾಡುವ ನೈತಿಕತೆ ಬಿಜೆಪಿ ಸ್ನೇಹಿತರಿಗಿಲ್ಲ:

ನಮ್ಮ ಹೋರಾಟದ ಬಗ್ಗೆ ಟೀಕೆ ಟಿಪ್ಪಣಿ ಮಾಡುತ್ತಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಇಂತಹ ಟೀಕೆ ಟಿಪ್ಪಣಿಯನ್ನು ನಾವು ಸ್ವಾಗತಿಸುತ್ತೇವೆ. ಟೀಕೆ ಮಾಡುತ್ತಿರುವ ನಮ್ಮ ಬಿಜೆಪಿ ಸ್ನೇಹಿತರಿಗೆ ನಾನು ಕೇಳುವುದಿಷ್ಟೇ. ಜನ ನಿಮ್ಮ 26 ಸಂಸದರನ್ನು ಆರಿಸಿದ್ದಾರೆ. ನೀವು ಒಂದು ದಿನ ರಾಜ್ಯದ ಪರವಾಗಿ ಹೋರಾಟ ಮಾಡಲಿಲ್ಲ. ರಾಜ್ಯದ ಹಿತದ ಬಗ್ಗೆ ಸರ್ಕಾರದ ಮೇಲೆ ಒತ್ತಡ ಹಾಕಲಿಲ್ಲ. ಡಬಲ್ ಇಂಜಿನ್ ಸರ್ಕಾರ ಇದ್ದರೂ ಇಂಜಿನ್ ಗಳು ಫೇಲ್ ಆದವು. ಮುಖ್ಯಮಂತ್ರಿಗಳು ನಿಮ್ಮನ್ನು ಕರೆದುಕೊಂಡು ಹೋದರೂ ನೀವು ಸರ್ಕಾರದ ಮುಂದೆ ತುಟಿ ಬಿಚ್ಚಲಿಲ್ಲ. ಹೀಗಾಗಿ ಗಾಂಧಿ ಪ್ರತಿಮೆ ಮುಂದೆ ನಿಂತು ನೀವು ಪ್ರತಿಭಟನೆ ಮಾಡುವ ನೈತಿಕತೆ ನಿಮಗಿಲ್ಲ. ನಾವು ನಮ್ಮ ಜನರ ಬೆವರನ ಹಣ ಕೊಡಿ ಎಂದು ಕೇಳುತ್ತಿದ್ದೇವೆ. ದೇಶದಲ್ಲಿ ಕೇಂದ್ರ ಸರ್ಕಾರಕ್ಕೆ ಅತಿ ಹೆಚ್ಚು ಆದಾಯ ಪಾವತಿ ಮಾಡುತ್ತಿರುವ ರಾಜ್ಯ ಕರ್ನಾಟಕ. ಹೀಗಾಗಿ ನಾವು ನಮ್ಮ ಪಾಲನ್ನು ಕೇಳುತ್ತಿದ್ದೇವೆ ಎಂದರು

ನಮ್ಮ ರಾಜ್ಯದಲ್ಲಿ ಬರ ಆವರಿಸಿದೆ. ನಮ್ಮ ಕೃಷಿ ಸಚಿವರು, ಕಂದಾಯ ಸಚಿವರು ಕೇಂದ್ರ ಸಚಿವರನ್ನು ಭೇಟಿ ಮಾಡಿ ಬರದ ವಿಚಾರವಾಗಿ ವರದಿ ನೀಡಿದ್ದಾರೆ. ನಮ್ಮ ಮುಖ್ಯಮಂತ್ರಿಗಳು, ಪ್ರಧಾನಮಂತ್ರಿ ಹಾಗೂ ಗೃಹಮಂತ್ರಿಯವರನ್ನು ಭೇಟಿ ಮಾಡಿ ಪರಿಹಾರ ಕೋರಿದ್ದಾರೆ. ಆದರೂ ಇದುವರೆಗೂ ನಯಾ ಪೈಸೆ ಪರಿಹಾರದ ಹಣ ಬಿಡುಗಡೆ ಮಾಡಿಲ್ಲ ಎಂದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments