ಹಾವೇರಿ : ರಾಜ್ಯ ಕಾಂಗ್ರೆಸ್ ಸರ್ಕಾರ ಈಗಲಾದರೂ ನಾಚಿಕೆ ಬಿಟ್ಟು ಎಚ್ಚೆತ್ತುಕೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕುಟುಕಿದರು.
ಹಾವೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಹಸಿ ಸುಳ್ಳನ್ನು ರಾಜ್ಯಪಾಲರ ಬಾಯಲ್ಲಿ ಹೇಳಿಸಿದ್ದಾರೆ. ಈ ಸರ್ಕಾರ ಯಾವುದೇ ಸಾಧನೆ ಮಾಡಿಲ್ಲ ಎನ್ನುವುದು ಸ್ಪಷ್ಟವಾಗುತ್ತಿದೆ ಎಂದು ಟೀಕಿಸಿದರು.
ಹಾನಗಲ್ ಗ್ಯಾಂಗ್ ರೇಪ್ ಪ್ರಕರಣ ಸೇರಿದಂತೆ ಕಾನೂನು ಸುವ್ಯವಸ್ಥೆ ಬಗ್ಗೆ ಸದನದಲ್ಲಿ ಚರ್ಚೆ ಮಾಡುತ್ತೇವೆ. ಕಾಂಗ್ರೆಸ್ ಸರ್ಕಾರದ ಮೇಲೆ 40% ಆರೋಪ ಬಂದಿದೆ. ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯ ಸಂಪೂರ್ಣವಾಗಿ ನಿಲ್ಲಿಸಿಬಿಟ್ಟಿದ್ದಾರೆ, ಅಭಿವೃದ್ಧಿ ಶೂನ್ಯವಾಗಿದೆ ಎಂದು ಚಾಟಿ ಬೀಸಿದರು.
ಸರ್ಕಾರದ ಬೊಕ್ಕಸ ಖಾಲಿಯಾಗಿದೆ
ಗುತ್ತಿಗೆದಾರರ ಸಂಘದ ಕೆಂಪಣ್ಣ ರಿವರ್ಸ್ ಹೊಡೆದಿರುವ ವಿಚಾರವಾಗಿ ಮಾತನಾಡಿ, ಸರ್ಕಾರ ಕೆಂಪಣ್ಣನ ಮೇಲೆ ಒತ್ತಡ ಹಾಕಿದೆ, ಕೆಂಪಣ್ಣ ಒತ್ತಡದಲ್ಲಿದ್ದಾರೆ. ಸರ್ಕಾರದ ಬೊಕ್ಕಸ ಖಾಲಿಯಾಗಿದೆ ಎನ್ನುವುದು ಸ್ಪಷ್ಟವಾಗಿದೆ. ನ್ಯಾಯಾಲಯವು ಸಹ ಇದನ್ನ ಹೇಳಲು ಶುರು ಮಾಡಿದೆ. ಸರ್ಕಾರ ಈಗಲಾದರೂ ನಾಚಿಕೆ ಬಿಟ್ಟು ಎಚ್ಚೆತ್ತುಕೊಳ್ಳಬೇಕು ಎಂದು ವಾಗ್ದಾಳಿ ನಡೆಸಿದರು.
17, 18 ರಂದು ರಾಷ್ಟ್ರೀಯ ಕೌನ್ಸಿಲ್ ಸಭೆ
17, 18 ರಂದು ರಾಷ್ಟ್ರೀಯ ಕೌನ್ಸಿಲ್ ಸಭೆ ನಡೆಯಲಿದೆ. ಸಭೆಯ ಬಳಿಕ ಟಿಕೆಟ್ ಹಂಚಿಕೆ ಪ್ರಕ್ರಿಯೆ ಪ್ರಾರಂಭವಾಗುತ್ತದೆ. ಜೆಡಿಎಸ್ ಜೊತೆಗೆ ಟಿಕೆಟ್ ಹಂಚಿಕೆ ವಿಚಾರವೂ ಅಂದು ಚರ್ಚೆಯಾಗಲಿದೆ ಎಂದು ಬಸವರಾಜ ಬೊಮ್ಮಾಯಿ ಮಾಹಿತಿ ನೀಡಿದರು.