ದಾವಣಗೆರೆ : ಶಿವಮೊಗ್ಗದಲ್ಲಿ ನೂರಕ್ಕೆ ನೂರು ಕಾಂಗ್ರೆಸ್ ಅಭ್ಯರ್ಥಿ ಗೆಲ್ಲುತ್ತಾರೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.
ದಾವಣಗೆರೆ ಜಿಲ್ಲೆ ನ್ಯಾಮತಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಮೊಗ್ಗ ಅಭ್ಯರ್ಥಿ ಯಾರು ಎಂಬ ಬಗ್ಗೆ ಪಕ್ಷ ತೀರ್ಮಾನ ತೆಗೆದುಕೊಳ್ಳುತ್ತದೆ ಎಂದು ತಿಳಿಸಿದರು.
ಸ್ಕ್ರೀನಿಂಗ್ ಕಮಿಟಿ ಸಭೆ ನಡೆಯುತ್ತಿದ್ದು, ಅಭ್ಯರ್ಥಿ ಬಗ್ಗೆ ತೀರ್ಮಾನ ತೆಗೆದುಕೊಳ್ಳುತ್ತಾರೆ. ಎಲ್ಲಾ ಮುಖಂಡರನ್ನು ವಿಶ್ವಾಸ ತೆಗೆದುಕೊಂಡು ಪಕ್ಷ ಗೆಲ್ಲಿಸುವ ಪ್ರಯತ್ನ ಮಾಡುತ್ತೇವೆ. ಪಕ್ಷ ಘೋಷಿಸಿದ ಅಭ್ಯರ್ಥಿಯನ್ನು ನೂರಕ್ಕೆ ನೂರು ಗೆಲ್ಲಿಸುತ್ತೇವೆ. ಈ ಬಾರಿ ಗೆದ್ದು ಬರ್ತಿವಿ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ವಿಪಕ್ಷಗಳ ಟೀಕೆಗಳಿಗೆ ಉತ್ತರ ಕೊಡಲ್ಲ
ಗ್ಯಾರಂಟಿ ಯೋಜನೆಗಳ ಅನುಷ್ಠಾನ ಆಗಿದೆ. ಅದಕ್ಕೆ ಬಜೆಟ್ನಲ್ಲಿ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ. ಜನರು ನಮ್ಮ ಮೇಲೆ ವಿಶ್ವಾಸ ಇಟ್ಟು ಅಧಿಕಾರ ಕೊಟ್ಟಿದ್ದಾರೆ. ಅದಕ್ಕೆ ಕೃತಜ್ಞತೆ ಸಲ್ಲಿಸಬೇಕಾಗಿದೆ. ವಿರೋಧ ಪಕ್ಷದ ಟೀಕೆಗಳಿಗೆ ಉತ್ತರ ಕೊಡುವುದಿಲ್ಲ ಎಂದು ಹೇಳಿದರು.
ಮತ್ತೆ 10 ಸಾವಿರ ಶಿಕ್ಷಕರ ಹುದ್ದೆ ಭರ್ತಿ
3 ಸಾವಿರ ಕೆಪಿಎಸ್ ಶಾಲೆಗಳನ್ನು ರಾಜ್ಯದಲ್ಲಿ ತೆರೆಯಲು ಯೋಜಿಸಲಾಗಿದೆ. ಈಗಾಗಲೇ 12 ಸಾವಿರ ಶಿಕ್ಷಕರನ್ನು ಭರ್ತಿ ಮಾಡಿದ್ದು, ಮತ್ತೆ 10 ಸಾವಿರ ಶಿಕ್ಷಕರ ಹುದ್ದೆ ತುಂಬಲು ಅನುದಾನ ಕೇಳಿದ್ದೇವೆ. 2015ರ ನಂತರ ಅನುದಾನಿತ ಶಾಲೆಗಳ ಹುದ್ದೆ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿಲ್ಲ. ನಂತರ ವರ್ಷಗಳ ಹುದ್ದೆ ಭರ್ತಿಗೆ ಅನುಮತಿ ಕೇಳಿದ್ದೇನೆ ಎಂದು ಮಧು ಬಂಗಾರಪ್ಪ ತಿಳಿಸಿದರು.