Saturday, May 18, 2024

ಬಿಜೆಪಿ 400ಕ್ಕೂ ಅಧಿಕ ಸ್ಥಾನ ಪಡೆಯಲಿದೆ : ಬಿ.ವೈ. ರಾಘವೇಂದ್ರ

ಶಿವಮೊಗ್ಗ : ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 400ಕ್ಕೂ ಅಧಿಕ ಸ್ಥಾನ ಪಡೆಯಲಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ವಿಶ್ವಾಸ ವ್ಯಕ್ತಪಡಿಸಿದರು.

ಬಿಜೆಪಿ ಶಿವಮೊಗ್ಗ ಜಿಲ್ಲಾ ಯುವ ಮೋರ್ಚಾದ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಹಾಗೂ ಯುವ ಮೋರ್ಚಾ ಜಿಲ್ಲಾ ಕಾರ್ಯಕಾರಿಣಿ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಯುವ ಶಕ್ತಿಯೇ ದೇಶದ ಶಕ್ತಿ. ವಿಶ್ವದಲ್ಲೇ ಅತಿ ಹೆಚ್ಚು ಯುವ ಸಮೂಹವನ್ನು ಹೊಂದಿರುವ ಹೆಗ್ಗಳಿಕೆ ನಮ್ಮದು. ಪ್ರತಿಯೊಂದು ಕ್ಷೇತ್ರದಲ್ಲಿ ಯುವ ಸಮೂಹ ತನ್ನ ಛಾಪನ್ನು ಮೂಡಿಸಿ ಪ್ರಪಂಚವೇ ದೇಶದತ್ತ ತಿರುಗಿ ನೋಡುವಂತೆ ಸಾಧನೆಯ ಹೆಜ್ಜೆ ಇಡುತ್ತಿರುವುದು ನಮಗೆಲ್ಲ ಹೆಮ್ಮೆಯ ಸಂಗತಿ ಎಂದು ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಕೂಡ ಯುವಕರಿಗೆ ಮತ್ತಷ್ಟು ಉತ್ತೇಜಿಸುವ ನಿಟ್ಟಿನಲ್ಲಿ ಹಲವಾರು ಯೋಜನೆಗಳನ್ನು ರೂಪಿಸಿ ಜಾರಿಗೆ ತಂದು ಸಮಾಜದ ಮುಖ್ಯವಾಹಿನಿಗೆ ತಂದು ನಿಲ್ಲಿಸುತ್ತಿದೆ. ಈ ಎಲ್ಲ ಅಶೋತ್ತರಗಳನ್ನು ಪೂರೈಸಲು ಶ್ರಮವಹಿಸಿರುವ ಮೋದಿ ಸರ್ಕಾರವನ್ನು ಸಂಪೂರ್ಣ ಬೆಂಬಲಿಸುವಂತೆ ಯುವಕರನ್ನು ಮನವೊಲಿಸಬೇಕು. ಪಕ್ಷದತ್ತ ಹೆಚ್ಚಿನ ಮಟ್ಟದಲ್ಲಿ ಸೆಳೆದು ಮುಂಬರುವ ಚುನಾವಣೆಯಲ್ಲಿ 400ಕ್ಕೂ ಹೆಚ್ಚು ಸ್ಥಾನ ಪಡೆಯುವಂತೆ ಮಾಡಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಅಧ್ಯಕ್ಷ ಮೇಘರಾಜ್, ಜಿಲ್ಲಾ ಯುವಮೋರ್ಚಾ ಅಧ್ಯಕ್ಷ ಪ್ರಶಾಂತ್ ಕುಕ್ಕೆ, ಪ್ರಧಾನ ಕಾರ್ಯದರ್ಶಿಗಳಾದ ದರ್ಶನ್ ಹಾಗೂ ಅರುಣ್ ಸೇರಿದಂತೆ ಪಕ್ಷದ ಮುಖಂಡರು ಉಪಸ್ಥಿತರಿದ್ದರು.

RELATED ARTICLES

Related Articles

TRENDING ARTICLES