Monday, May 20, 2024

ನಿಖಿಲ್ ಸುತ್ತ ಶಕುನಿವ್ಯೂಹ ವನ್ನೇ ರಚಿಸಿದ ಕಲಿಯುಗ ಶಕುನಿ ನೀವಲ್ಲವೆ? ಎಂದು ಸಿದ್ದರಾಮಯ್ಯ ವಿರುದ್ದ HDK ಕಿಡಿ 

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಭಾನುವಾರ ಮತ್ತೊಮ್ಮೆ ಹರಿಹಾಯ್ದಿದ್ದಾರೆ.

ಮಂಡ್ಯ ಗ್ಯಾರಂಟಿ ಸಮಾವೇಶದಲ್ಲಿ 2019ರ ಲೋಕಸಭೆ ಚುನಾವಣೆಯಲ್ಲಿ ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿ ಗೆಲುವಿಗೆ ಕಾಂಗ್ರೆಸ್‌ ಪಕ್ಷವೇ ಕಾರಣ ಎಂದು ಸತ್ಯ ಒಪ್ಪಿಕೊಂಡ ಸಿದ್ದರಾಮಯ್ಯ ಅವರ ಸತ್ಯಸಂಧತೆಗೆ ಮಾಜಿ ಮುಖ್ಯಮಂತ್ರಿಗಳು ಅಭಿನಂದನೆ ಸಲ್ಲಿಸಿದ್ದಾರೆ.

ಮಂಡ್ಯ ಜಿಲ್ಲೆಯ ಗ್ಯಾರಂಟಿಗಳ 2ನೇ ಸಮಾವೇಶದಲ್ಲಿ ಅಲವತ್ತುಕೊಂಡ ಸಿಎಂ ಸಿದ್ನದರಾಮಯ್ಯನವರೇ.. ಕೊನೆಗೂ ಸತ್ಯ ನುಡಿದಿದ್ದೀರಿ! ಸುಳ್ಳುರಾಮಯ್ಯ ಬಿರುದಾಂಕಿತರಾದ ನೀವು, ಕೊನೆಗೂ ಸತ್ಯ ಕಕ್ಕಿದ್ದೀರಿ! ಸುಳ್ಳುರಾಮಯ್ಯ ನೆಂಬ ಕುಖ್ಯಾತಿಯಿಂದ ಹೊರಬರಲು ಪ್ರಾಮಾಣಿಕ ಪ್ರಯತ್ನ ನಡೆಸಿದ್ದೀರಿ. ಅಭಿನಂದನೆಗಳು ಎಂದು ವ್ಯಂಗ್ಯವಾಡಿದ್ದಾರೆ.

ಸತ್ಯ ಗಂಟಲಲ್ಲಿ ಸಿಕ್ಕಿಕೊಂಡ ಬಿಸಿತುಪ್ಪದಂತೆ. ಕಕ್ಕಲೇಬೇಕು. 2019ರ ಲೋಕಸಭೆ ಚುನಾವಣೆಯಲ್ಲಿ ಮಂಡ್ಯದಿಂದ ಆಯ್ಕೆಯಾದ ಪಕ್ಷೇತರ ಅಭ್ಯರ್ಥಿ ಗೆಲುವಿಗೆ ಕಾಂಗ್ರೆಸ್ಸೇ ಕಾರಣ ಎಂದು ಸ್ವತಃ ನೀವೇ ಒಪ್ಪಿಕೊಂಡಿದ್ದೀರಿ. ನಿಮ್ಮದೇ ಮಾತುಗಳಲ್ಲಿ ಹೇಳುವುದಾದರೆ. ಸುಮಲತಾ ಬಿಜೆಪಿಯಿಂದ ಗೆದ್ದಿದ್ದಲ್ಲ. ಕಾಂಗ್ರೆಸ್‌ ವೋಟುಗಳಿಂದಲೇ ಗೆದ್ದಿದ್ದು ಆಯಮ್ಮ..! ಇದಲ್ಲವೇ ನಂಬಿಕೆದ್ರೋಹ..? ಎಂದು ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಕೊಟ್ಟ ಮಾತಿನಂತೆ ನಡೆದುಕೊಳ್ಳುವವರನ್ನು ಬೆಂಬಲಿಸಿದರೆ ರಾಜ್ಯದ ಅಭಿವೃದ್ಧಿ: ಸಿಎಂ ಸಿದ್ದರಾಮಯ್ಯ

ನಿಮ್ಮ ಗೋಮುಖವ್ಯಾಘ್ರತನ ಅರಿಯಲು ಇಷ್ಟು ಸಾಕು. ಅಂದು ಕಾಂಗ್ರೆಸ್ ಮೈತ್ರಿ ಪಕ್ಷ, ನಿಖಿಲ್‌ ಕುಮಾರಸ್ವಾಮಿ ಮೈತ್ರಿ ಅಭ್ಯರ್ಥಿ. ಅವರ ಜತೆಯಲ್ಲೇ ಪ್ರಚಾರದ ಸೋಗಿನಾಟವಾಡಿ, ಮಾಧ್ಯಮಗಳ ಮುಂದೆ ಗೆಲ್ಲಿಸುತ್ತೇವೆಂದು ಪೋಸು ಕೊಡುತ್ತಲೇ ನಿಖಿಲ್ ಸುತ್ತ ಶಕುನಿವ್ಯೂಹ ವನ್ನೇ ರಚಿಸಿದ ಕಲಿಯುಗ ಶಕುನಿ ನೀವಲ್ಲದೆ ಮತ್ತ್ಯಾರು ಸಿದ್ದರಾಮಯ್ಯನವರೇ? ಎಂದು ಮಾಜಿ ಮುಖ್ಯಮಂತ್ರಿಗಳು ಪ್ರಶ್ನೆ ಮಾಡಿದ್ದಾರೆ.

ಕಳ್ಳಬೆಕ್ಕು ಕದ್ದು ಹಾಲು ಕುಡಿದರೆ ಗೊತ್ತಾಗದೇ? ಬೂದಿ ಮುಚ್ಚಿದ ಕೆಂಡ ತಣ್ಣಗಿರಲು ಸಾಧ್ಯವೇ? ಕುದಿಯುವ ಕುಲುಮೆಯಂತಿರುವ ನಿಮ್ಮ ಉದರಹುರಿ ಗೆ ತಂಪೆನ್ನುವುದುಂಟೆ? 5 ವರ್ಷಗಳ ನಂತರವಾದರೂ ಸತ್ಯ ಕಕ್ಕಿದ್ದೀರಿ ಹಾಗೂ ನಂಬಿದವನ ಮನೆ ನಾಶವಾಗಲಿ ಎನ್ನುವ ನಿಮ್ಮಹೇಯತನ ಬಯಲಾಗಿದೆ. ಸತ್ಯಮೇಯ ಜಯತೆ. ಇದಿಷ್ಟೇ ನನ್ನ ಕಳಕಳಿ ಮತ್ತು ನಂಬಿಕೆ ಎಂದು ಸಿದ್ದರಾಮಯ್ಯ ಅವರಿಗೆ ಕುಮಾರಸ್ವಾಮಿ ಅವರು ಟಾಂಗ್‌ ನೀಡಿದ್ದಾರೆ.

RELATED ARTICLES

Related Articles

TRENDING ARTICLES