Friday, May 10, 2024

7ನೇ ವೇತನ ಆಯೋಗ ವರದಿ ಸಲ್ಲಿಕೆ: ವರದಿಯ ಶಿಫಾರಸು ಪರಿಶೀಲಿಸಿ, ಸೂಕ್ತ ತೀರ್ಮಾನ- ಸಿಎಂ ಸಿದ್ದರಾಮಯ್ಯ

ಬೆಂಗಳೂರು : ರಾಜ್ಯದ 7ನೇ ವೇತನ ಆಯೋಗವು ಇಂದು ವರದಿಯನ್ನು ಸಲ್ಲಿಸಿದ್ದು ಮೂಲವೇತನದ ಶೇಕಡ 27.5 ರಷ್ಟು ಹೆಚ್ಚಳ ಮಾಡಲು ಶಿಫಾರಸು ಮಾಡಿದೆ. ವರದಿಯನ್ನು ಪರಿಶೀಲಿಸಿ ಸರ್ಕಾರ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

ಅವರು ಇಂದು ಕೆ ಸುಧಾಕರ ರಾವ್ ಅಧ್ಯಕ್ಷತೆಯ ಏಳನೇ ವೇತನ ಆಯೋಗದ ವರದಿ ಸ್ವೀಕರಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು. ವೇತನ ಆಯೋಗದ ಅವಧಿಯನ್ನು ಮೂರು ತಿಂಗಳು ವಿಸ್ತರಿಸಲಾಗಿತ್ತು. ಈ ಅವಧಿಯು ಮಾರ್ಚ್ 15ರಂದು ಮುಕ್ತಾಯಗೊಂಡಿದೆ. ನಿನ್ನೆ ನಾನು ಮೈಸೂರಿನಲ್ಲಿದ್ದ ಕಾರಣ ವರದಿ ಸ್ವೀಕರಿಸಲು ಸಾಧ್ಯವಾಗಿರಲಿಲ್ಲ. ಅದಕ್ಕಾಗಿ ಇಂದು ವರದಿಯನ್ನು ಸ್ವೀಕರಿಸಲಾಗಿದೆ.

ಇದನ್ನೂ ಓದಿ: 247 ಪಿಡಿಒ ಹುದ್ದೆಗಳ ಭರ್ತಿಗೆ ಕೆಪಿಎಸ್​ಸಿ ಅಧಿಸೂಚನೆ!

ವರದಿಯಲ್ಲಿ ಕನಿಷ್ಠ ಮೂಲವೇತನವನ್ನು 17000 ರೂ ಗಳಿಂದ 27 ಸಾವಿರ ರೂಗಳಿಗೆ ಹೆಚ್ಚಿಸುವಂತೆ ಶಿಫಾರಸು ಮಾಡಲಾಗಿದೆ. ಇದರೊಂದಿಗೆ ಇನ್ನೂ ಅನೇಕ ಶಿಫಾರಸುಗಳಿದ್ದು ವರದಿಯನ್ನು ಆರ್ಥಿಕ ಇಲಾಖೆಗೆ ನೀಡಲಾಗಿದೆ. ಆರ್ಥಿಕ ಇಲಾಖೆಯು ವರದಿಯನ್ನು ಕೂಲಂಕಷವಾಗಿ ಅಧ್ಯಯನ ಮಾಡಿದ ನಂತರ ನೀಡುವ ಸಲಹೆಗಳ ಆಧಾರದಲ್ಲಿ ಸರ್ಕಾರ ತೀರ್ಮಾನ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಆಯೋಗದ ಸದಸ್ಯರಾದ ಪಿ.ಬಿ. ರಾಮಮೂರ್ತಿ, ಶ್ರೀಕಾಂತ್ ವನಹಳ್ಳಿ , ಮುಖ್ಯಮಂತ್ರಿಯವರ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್, ಕಾ ಡಾ.ಕೆ.ವಿ. ತ್ರಿಲೋಕಚಂದ್ರ, ಹಣಕಾಸು ಇಲಾಖೆ ಕಾರ್ಯದರ್ಶಿ ಡಾ. ಪಿ.ಸಿ. ಜಾಫರ್, ವೇತನ ಆಯೋಗದ ಸದಸ್ಯ ಕಾರ್ಯದರ್ಶಿ ಹೆಫ್ಸಿಬಾರಾಣಿ ಕೊರ್ಲಪಾಟಿ ಉಪಸ್ಥಿತರಿದ್ದರು.

RELATED ARTICLES

Related Articles

TRENDING ARTICLES