Sunday, May 19, 2024

ದೇವರಾಜೇಗೌಡರ ಆರೋಪ ಸತ್ಯಕ್ಕೆ ದೂರವಾಗಿದೆ : ಸಿದ್ದರಾಮಯ್ಯ ತಿರುಗೇಟು

ಬೆಂಗಳೂರು : ಬಿಜೆಪಿ ನಾಯಕ ದೇವರಾಜೇಗೌಡರ ಆರೋಪ ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ಎಸ್​ಐಟಿ ಎನ್ನುವುದು ರಿಮೋಟ್ ಕಂಟ್ರೋಲ್ ಮೇಲೆ ಕೆಲಸ ಮಾಡುತ್ತಿದೆ. ಅದು ಸರ್ಕಾರದ ರಬ್ಬರ್ ಸ್ಟಾಂಪ್ ಅಂತ ದೇವರಾಜೇಗೌಡರ ಆರೋಪಿಸಿದ್ದಾರೆ. ಇದು ಅಪರಾಧಿಗಳನ್ನು ರಕ್ಷಿಸುವ ದುರುದ್ದೇಶದಿಂದ ತನಿಖೆಯ ಹಾದಿ ತಪ್ಪಿಸಲು ಮಾಡಿರುವ ಕುತಂತ್ರವಾಗಿದೆ ಎಂದು ದೂರಿದ್ದಾರೆ.

ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯದ ಆರೋಪಗಳ ಬಗ್ಗೆ ತನಿಖೆ ನಡೆಸಲು ರಚಿಸಲಾದ ವಿಶೇಷ ತನಿಖಾ ತಂಡ ಸ್ವತಂತ್ರವಾಗಿ ಮತ್ತು ನಿಷ್ಪಕ್ಷಪಾತತನದಿಂದ ತನಿಖೆ ನಡೆಸಲಿದೆ. ಇದರಲ್ಲಿ ರಾಜ್ಯ ಸರ್ಕಾರ ಒಂದು ಸೂಜಿಯ ಮೊನೆಯಷ್ಟೂ ಮಧ್ಯಪ್ರವೇಶ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಕಾನೂನು ಕ್ರಮ ಕೈಗೊಳ್ಳಲು ಸರ್ಕಾರ ಬದ್ಧ

ಎಸ್​ಐಟಿ ಸಂಪೂರ್ಣವಾಗಿ ಪಾರದರ್ಶಕವಾಗಿ ಕೆಲಸ ಮಾಡುತ್ತಿದೆ. ತಪ್ಪಿತಸ್ಥರು ಎಷ್ಟೇ ಪ್ರಭಾವಶಾಲಿಯಾಗಿದ್ದರೂ ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳಲು ಸರ್ಕಾರ ಬದ್ಧವಾಗಿದೆ. ಈ ಉದ್ದೇಶದಿಂದಲೇ ದಕ್ಷ ಅಧಿಕಾರಿಗಳನ್ನು ಸೇರಿಸಿಕೊಂಡು ಎಸ್​ಐಟಿ ರಚಿಸಲಾಗಿದೆ ಎಂದು ಹೇಳಿದ್ದಾರೆ.

ಪ್ರಧಾನಿ ಮೋದಿ ಹೆಸರು ಹಾಳಾಗುತ್ತಿದೆ

ಈ ಪ್ರಕರಣದಿಂದಾಗಿ ಪ್ರಧಾನಿ ಮೋದಿಯವರ ಹೆಸರು ಹಾಳಾಗುತ್ತಿದೆ ಎಂದು ಬಿಜೆಪಿ ನಾಯಕರು ಈಗ ಗೋಳಾಡುವುದರಿಂದ ಏನೂ ಪ್ರಯೋಜನವಾಗದು. ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಡುವಾಗಲೇ ಇದನ್ನು ಯೋಚನೆ ಮಾಡಬೇಕಾಗಿತ್ತು. ಆರೋಪಿ ಪ್ರಜ್ವಲ್ ರೇವಣ್ಣರನ್ನು ಭಾರತಕ್ಕೆ ಕರೆತರಲು ಸಹಕಾರ ನೀಡಬೇಕಾಗಿರುವುದು ಕೇಂದ್ರ ಸರ್ಕಾರ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

RELATED ARTICLES

Related Articles

TRENDING ARTICLES