Sunday, May 19, 2024

ನನಗೂ ಪೆನ್​ಡ್ರೈವ್​ ಪ್ರಕರಣಕ್ಕೂ ಯಾವುದೇ ಸಂಬಂಧವಿಲ್ಲ : ದೇವರಾಜೇಗೌಡ ಆರೋಪಕ್ಕೆ ಡಿಕೆಶಿ ತಿರುಗೇಟು

ಬೆಂಗಳೂರು : ನನಗೂ ಪೆನ್ ಡ್ರೈವ್ ಬಿಡುಗಡೆ ಪ್ರಕರಣಕ್ಕೂ ಯಾವುದೇ ಸಂಬಂಧ ಇಲ್ಲ. ಬಿಜೆಪಿ ಕಾರ್ಯಕರ್ತ ದೇವರಾಜೇಗೌಡ ನನ್ನ ವಿರುದ್ಧ ಮಾಡಿರುವ ಆಪಾದನೆಗಳು ಸುಳ್ಳು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ದೇವರಾಜೇಗೌಡ ಹಿಂದೆ ಬಿಜೆಪಿಯಿಂದ ಚುನಾವಣೆಗೆ ನಿಂತಿದ್ದವರು. ಆ ಪಕ್ಷದ ಸಕ್ರಿಯ ಕಾರ್ಯಕರ್ತ. ನಾನೀಗ ಬೆಂಗಳೂರಿಂದ ಹೊರಗಡೆ ಇದ್ದು, ಬಂದ ನಂತರ ಈ ಬಗ್ಗೆ ಮಾತಾಡುತ್ತೇನೆ ಎಂದು ಹೇಳಿದ್ದಾರೆ.

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಜೆಡಿಎಸ್ ಜತೆಗೆ ಮೈತ್ರಿ ಪಕ್ಷ ಬಿಜೆಪಿಗೂ ಮುಜುಗರ ಮತ್ತು ಮುಖಭಂಗ ಆಗಿದೆ. ಈಗ ಆಗಿರುವ ಡ್ಯಾಮೇಜ್ ನಿವಾರಿಸಿಕೊಳ್ಳಲು ಬಿಜೆಪಿ ಹಾಗೂ ಜೆಡಿಎಸ್ ನಾಯಕರು ದೇವರಾಜೇಗೌಡನ ಮೂಲಕ ನನ್ನ ವಿರುದ್ಧ ಇಲ್ಲ ಸಲ್ಲದ ಆರೋಪ ಮಾಡಿಸಿದ್ದಾರೆ ಎಂದು ದೂರಿದ್ದಾರೆ.

ಈ ಹಿಂದೆಯೇ ದೇವರಾಜೇಗೌಡ ನನ್ನ ಬಳಿ ಪೆನ್​ಡ್ರೈವ್ ಇದೆ ಎಂದು ಹೇಳಿದ್ದರು. ಬಿಜೆಪಿ ನಾಯಕರ ಅನುಮತಿ ಪಡೆದು ಅದನ್ನು ಬಿಡುಗಡೆ ಮಾಡುವುದಾಗಿಯೂ ಹೇಳಿದ್ದರು. ಹೀಗಿರುವಾಗ ನನಗೂ ಪೆನ್ ಡ್ರೈವ್ ಬಿಡುಗಡೆಗೂ ಏನು ಸಂಬಂಧ? ಎಂದು ಪ್ರಶ್ನೆ ಮಾಡಿದ್ದಾರೆ.

ಬಿಜೆಪಿ, ಜೆಡಿಎಸ್ ನಾಯಕರ ಷಡ್ಯಂತ್ರ ಇದೆ

ಕೋತಿ ತಾನು ತಿಂದು ಮೇಕೆ ಬಾಯಿಗೆ ಒರೆಸಿತು ಎಂಬಂತೆ ದೇವರಾಜೇಗೌಡ ಮಾಡೋದೆಲ್ಲ ಮಾಡಿ ಈಗ ನನ್ನ ವಿರುದ್ಧ ಆರೋಪ ಮಾಡುತ್ತಿದ್ದಾರೆ. ಇದರ ಹಿಂದೆ ಬಿಜೆಪಿ ಹಾಗೂ ಜೆಡಿಎಸ್ ನಾಯಕರ ಷಡ್ಯಂತ್ರ ಇದೆ ಎಂದು ಡಿ.ಕೆ. ಶಿವಕುಮಾರ್ ಆರೋಪಿಸಿದ್ದಾರೆ.

RELATED ARTICLES

Related Articles

TRENDING ARTICLES