Sunday, May 19, 2024

ರಾಜ್ಯದಲ್ಲಿ ನಾಳೆ ಎರಡನೇ ಹಂತದ ಲೋಕಸಭಾ ಚುನಾವಣೆ: ಮತದಾನಕ್ಕೆ ಸಕಲ ಸಿದ್ದತೆ

ಲೋಕಸಭೆ ಚುನಾವಣೆಯ ರಾಜ್ಯದ ಎರಡನೇ ಹಂತದ ಮತದಾನ ಮೇ 7 ರಂದು (ನಾಳೆ) ನಡೆಯಲಿದೆ. ಉತ್ತರ ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಈ ಹಿನ್ನೆಲೆ ಎಲ್ಲಾ ಕ್ಷೇತ್ರಗಳಲ್ಲೂ ಮತದಾನಕ್ಕೆ ಚುನಾವಣಾ ಆಯೋಗ ಸಕಲ ಸಿದ್ಧತೆ ಮಾಡಿಕೊಂಡಿದೆ.

ಉತ್ತರ ಕರ್ನಾಟಕ ಭಾಗದ ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರಗಿ, ರಾಯಚೂರು, ಬೀದರ್​, ಕೊಪ್ಪಳ, ಬಳ್ಳಾರಿ, ಹಾವೇರಿ, ಧಾರವಾಡ, ಉತ್ತರ ಕನ್ನಡ, ದಾವಣಗೆರೆ ಮತ್ತು ಶಿವಮೊಗ್ಗ ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ.

ಉತ್ತರ ಕರ್ನಾಟಕದ ಮಾಜಿ ಸಿಎಂಗಳಾದ ಬಸವರಾಜ ಬೊಮ್ಮಾಯಿ, ಜಗದೀಶ್ ಶೆಟ್ಟರ್, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸೇರಿ 227 ಅಭ್ಯರ್ಥಿಗಳ ರಾಜಕೀಯ ಭವಿಷ್ಯ ನಿರ್ಧರಿಸುವ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ತೆರೆ ಬಿದ್ದಿದೆ.

ಇದನ್ನೂ ಓದಿ:  14 ಲೋಕಸಭಾ ಕ್ಷೇತ್ರಗಳಲ್ಲೂ ಚುನಾವಣಾ ಆಯೋಗ ಸಕಲ ಸಿದ್ಧತೆ ಮಾಡಿಕೊಂಡಿದೆ.

ಈಗಾಗಲೇ ಬಹಿರಂಗ ಪ್ರಚಾರಕ್ಕೆ ತರೆಬಿದ್ದಿದ್ದು ಇನ್ನೇನಿದ್ದರೂ ಅಭ್ಯರ್ಥಿಗಳು ಮನೆ ಮನೆಗೆ ತೆರಳಿ ಪ್ರಚಾರ ಮಾಡಬೇಕಿದೆ. ಸೋಮವಾರ ಬೆಳಗ್ಗೆ ಮಸ್ಟರಿಂಗ್ ಪ್ರಕ್ರಿಯೆ ನಡೆಯಲಿದೆ. ಚುನಾವಣಾ ಸಿಬ್ಬಂದಿ ಗುರುತಿಸಲ್ಪಟ್ಟ ಸ್ಥಳಗಳಿಂದ ಮತದಾನಕ್ಕೆ ಪೂರಕ ಸಾಮಗ್ರಿಗಳನ್ನು ನಿರ್ದಿಷ್ಟಪಡಿಸಿದ ಮತಗಟ್ಟೆಗಳಿಗೆ ಕೊಂಡೊಯ್ಯಲಿದ್ದಾರೆ.
ಮತಗಟ್ಟೆಗಳಲ್ಲಿ ಮತದಾರರಿಗೆ ಚುನಾವಣಾ ಆಯೋಗ ಮೂಲಸೌಕರ್ಯ ಕಲ್ಪಿಸಿದೆ. ಬಿಸಿಲಿನ ಬೇಗೆಯಿಂದ ಮತದಾನ ಕಡಿಮೆಯಾಗದಂತೆ ಎಲ್ಲ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ. ಮತಗಟ್ಟೆಗಳಲ್ಲಿ ಜ್ಯೂಸ್, ಕುಡಿಯಲು ನೀರು, ಕುಳಿತುಕೊಳ್ಳಲು ಕುರ್ಚಿ, ನೆರಳಿಗೆ ಶಾಮಿಯಾನ ಮತ್ತಿತರ ಸವಲತ್ತುಗಳನ್ನು ಕಲ್ಪಿಸಿದೆ.

ಮದ್ಯ ಮಾರಾಟಕ್ಕೆ ನಿಷೇಧ:

ಮತದಾನದ ಅವಧಿ ಮುಗಿಯುವವರೆಗೆ ಮದ್ಯ ಮಾರಾಟಕ್ಕೆ ಅನುಮತಿ ಇಲ್ಲ. ಬೇರೆ ರಾಜ್ಯಗಳಿಂದಲೂ ಮದ್ಯ ತರುವಂತಿಲ್ಲ. ಕರ್ನಾಟಕ ಗಡಿಯಿಂದ 5 ಕಿ.ಮೀ ವ್ಯಾಪ್ತಿಯಲ್ಲಿರುವ ಇತರ ರಾಜ್ಯಗಳ ಮದ್ಯದಂಗಡಿಗಳನ್ನು ಮುಚ್ಚಲು ಸೂಚಿಸಲಾಗಿದೆ.

ಸಾರ್ವತ್ರಿಕ ರಜೆ:

ನೆರೆಯ ರಾಜ್ಯಗಳ ರಾಜ್ಯ ಸರ್ಕಾರಗಳಿಗೆ ಮತದಾನ ಮಾಡಲು ಅವಕಾಶ ನೀಡಲು ಎಲ್ಲ ಉದ್ಯೋಗಿಗಳು ಮತ್ತು ಕಾರ್ಮಿಕರಿಗೆ ಮೇ 7ರಂದು ವೇತನ ಸಹಿತ ರಜೆ ನೀಡುವಂತೆ ಕೋರಲಾಗಿದೆ. ಈ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಬರುವ ಎಲ್ಲ ಸರ್ಕಾರಿ ಕಚೇರಿಗಳು, ಶಿಕ್ಷಣ ಸಂಸ್ಥೆಗಳು ಮತ್ತು ಸಾರ್ವಜನಿಕ ವಲಯದ ಸಂಸ್ಥೆಗಳಿಗೆ ಮತದಾನದ ದಿನ ರಾಜ್ಯ ಸರ್ಕಾರ ಸಾರ್ವತ್ರಿಕ ರಜೆ ಘೋಷಿಸಿದೆ.

2.59 ಕೋಟಿ ಮತದಾರರಿಗೆ ಹಕ್ಕು
ಒಟ್ಟು 2,59,52,958 ಮತದಾರರು ಮತದಾನ ಮಾಡುವ ಹಕ್ಕು ಪಡೆದಿದ್ದಾರೆ. ಒಟ್ಟು 28,269 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್, ಬಿಜೆಪಿ ಎಲ್ಲ 14 ಕ್ಷೇತ್ರಗಳಲ್ಲೂ ಸ್ಪರ್ಧಿಸಿವೆ. ಬಿಎಸ್‌ಪಿ 9, ನೋಂದಾಯಿತ ಮಾನ್ಯತೆ ಪಡೆದ ರಾಜಕೀಯ ಪಕ್ಷಗಳಿಂದ 73 ಹಾಗೂ 117 ಸ್ವತಂತ್ರ ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದಾರೆ. ಈ ಪೈಕಿ 206 ಪುರುಷರು, 21 ಮಹಿಳಾ ಅಭ್ಯರ್ಥಿಗಳಿದ್ದಾರೆ.

RELATED ARTICLES

Related Articles

TRENDING ARTICLES