Monday, May 20, 2024

ಪ್ರಜ್ವಲ್ ಪ್ರಕರಣವನ್ನು ಸಿಬಿಐ ತನಿಖೆಗೆ ಕೊಡುವ ಅಗತ್ಯವಿಲ್ಲ : ಸಚಿವ ಪರಮೇಶ್ವರ್

ಬೆಂಗಳೂರು : ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣವನ್ನು ಸಿಬಿಐ ತನಿಖೆಗೆ ಕೊಡುವ ಅಗತ್ಯವಿಲ್ಲ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಾಸನದ ಸಂಸದ ಪ್ರಜ್ವಲ್ ರೇವಣ್ಣರ ಅಶ್ಲೀಲ ವಿಡಿಯೋ ಪ್ರಕರಣವನ್ನು ಎಸ್‌ಐಟಿ ಅಧಿಕಾರಿಗಳು ತನಿಖೆ ಮಾಡಲು ಅರ್ಹರಾಗಿದ್ದಾರೆ. ಹೀಗಾಗಿ, ಈ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡುವ ಪ್ರಮೇಯವೇ ಇಲ್ಲ ಎಂದು ತಿಳಿಸಿದ್ದಾರೆ.

ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರು ಪ್ರಜ್ವಲ್ ರೇವಣ್ಣ ಪ್ರಕರಣದ ತನಿಖೆ ಎಸ್‌ಐಟಿಯಿಂದ ಸೂಕ್ತವಾಗಿ ನಡೆಯುತ್ತಿಲ್ಲ. ರಾಜ್ಯ ಸರ್ಕಾರ ಹಸ್ತಕ್ಷೇಪ ಮಾಡುತ್ತಿದೆ ಎಂದು ಆರೋಪ ಮಾಡುತ್ತಿದ್ದಾರೆ. ಆದರೆ, ನಮ್ಮ ಪೊಲೀಸರು ಸಮರ್ಥರಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ.

ಸರ್ಕಾರ ಮಧ್ಯಪ್ರವೇಶ ಮಾಡುವುದಿಲ್ಲ

ರಾಜಕೀಯ ಹೇಳಿಕೆ ಹೊರತುಪಡಿಸಿದರೆ ತನಿಖೆ ಸರಿಯಾದ ದಾರಿಯಲ್ಲಿ ನಡೆಯುತ್ತಿದೆ. ಹೀಗಾಗಿ, ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವ ಅಗತ್ಯವಿಲ್ಲ. ಈ ಹಿಂದಿನ ಬಿಜೆಪಿ ಸರ್ಕಾರ ಒಂದೇ ಒಂದು ಪ್ರಕರಣವನ್ನೂ ಸಿಬಿಐ ತನಿಖೆಗೆ ವಹಿಸಿಲ್ಲ. ನಾವು ಪ್ರಜ್ವಲ್ ರೇವಣ್ಣರ ಅಶ್ಲೀಲ ವಿಡಿಯೋ ಪ್ರಕರಣದ ತನಿಖೆಯಲ್ಲಿ ಎಸ್‌ಐಟಿ ತಂಡಕ್ಕೆ ಸಂಪೂರ್ಣ ಸ್ವಾತಂತ್ರ್ಯ ನೀಡಿದ್ದೇವೆ. ರಾಜ್ಯ ಸರ್ಕಾರ ಮಧ್ಯಪ್ರವೇಶ ಮಾಡುವುದಿಲ್ಲ ಎಂದು ಹೇಳಿದ್ದಾರೆ.

SIT ತನಿಖೆ ಮೇಲೆ ವಿಶ್ವಾಸ ಇಡೋಣ

ಎಸ್‌ಐಟಿ ತನಿಖೆ ಸರಿಯಾಗಿ ನಡೆಯುತ್ತಿದೆ. ಪಾರದರ್ಶಕವಾಗಿ ತನಿಖೆ ನಡೆಯುತ್ತಿದೆ. ಪ್ರಜ್ವಲ್‌ ರೇವಣ್ಣರಿಗಾಗಿ ನಾವು (ಎಸ್​ಐಟಿ) ಹುಡುಕುತ್ತಿದ್ದೇವೆ. ಪ್ರಜ್ವಲ್‌ ಬರೋವರೆಗೂ ವಿಚಾರಣೆ ತೀವ್ರವಾಗಿ ನಡೆಸುವುದು ಕಷ್ಟ. ಆದರೆ, ಎಸ್​ಐಟಿ ತನಿಖೆ ಮೇಲೆ ವಿಶ್ವಾಸ ಇಡೋಣ. ತನಿಖೆ ನಡೆಯುವಾಗ ಹೆಚ್ಚಿನ ಮಾಹಿತಿ ಹೇಳೋಕಾಗಲ್ಲ. ಬಂಧಿತರಿಂದ, ಸಂತ್ರಸ್ತೆಯರಿಂದ ಮಾಹಿತಿ ಪಡೆದಿದ್ದೇವೆ ಎಂದು ಸಚಿವ ಡಾ.ಜಿ. ಪರಮೇಶ್ವರ್ ಮಾಹಿತಿ ನೀಡಿದ್ದಾರೆ.

RELATED ARTICLES

Related Articles

TRENDING ARTICLES