Saturday, July 6, 2024

ಬೆಂಗಳೂರಿನ ಕೋರ್ಟ್‍ನಲ್ಲಿಂದು ರಾಹುಲ್​ ಗಾಂಧಿ ವಿಚಾರಣೆ

ಬೆಂಗಳೂರು: ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಯವರು ಮಾನನಷ್ಟ ಜಾಹೀರಾತು ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ಎದುರಿಸಲು ಇಂದು ಬೆಂಗಳೂರಿನ ಸಿವಿಲ್ ಕೋರ್ಟ್‍ಗೆ ಆಗಮಿಸಲಿದ್ದಾರೆ.

ಬೆಳಗ್ಗೆ 10:30ಕ್ಕೆ ಅವರು ಬೆಂಗಳೂರಿಗೆ ಆಗಮಿಸಲಿದ್ದು, ಬಳಿಕ ನ್ಯಾಯಾಲಯಕ್ಕೆ ಹಾಜರಾಗಲಿದ್ದಾರೆ. ಬಿಜೆಪಿ ಸಲ್ಲಿಸಿದ್ದ ಮಾನನಷ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಜೂ.1ರಂದು ವಿಚಾರಣೆ ನಡೆಸಿದ್ದ 42ನೇ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಜಾಮೀನು ಮಂಜೂರು ಮಾಡಿತ್ತು. ಅಲ್ಲದೇ ಗೈರಾಗಿದ್ದ ರಾಹುಲ್ ಗಾಂಧಿಯವರಿಗೆ ಜೂನ್ 7 ರಂದು ಕಡ್ಡಾಯವಾಗಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗಬೇಕೆಂದು ಆದೇಶಿಸಿತ್ತು.

2023ರಲ್ಲಿ ಹಿಂದಿನ ಬಿಜೆಪಿ ಸರ್ಕಾರ ವಿರುದ್ಧ ಶೇಕಡಾ 40 ಕಮಿಷನ್ ಮಾಡಿದ ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ ಮುಂದೆ ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿಚಾರಣೆಗೆ ಹಾಜರಾಗಲಿದ್ದಾರೆ.

ಇದನ್ನೂ ಓದಿ: ವರುಣಾರ್ಭಟ: ಬೆಸ್ಕಾಂ ಹೆಲ್ಪ್​ ಲೈನ್​ನಲ್ಲಿ 8 ಸಾವಿರಕ್ಕೂ ಅಧಿಕ ದೂರು ದಾಖಲು

ಬಿಜೆಪಿ ವಿರುದ್ಧ ಕಮಿಷನ್ ಪಡೆದ ಪ್ರಕರಣದಲ್ಲಿ A1 ಕೆಪಿಸಿಸಿ, A2 ಡಿಕೆ ಶಿವಕುಮಾರ್, A3 ಆರೋಪಿಯಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ A4 ಆರೋಪಿಯಾಗಿ ರಾಹುಲ್ ಗಾಂಧಿ ಅವರನ್ನು ಹೆಸರಿಸಲಾಗಿದೆ. ಐಪಿಸಿ ಸೆಕ್ಷನ್ 499 ಹಾಗೂ 500 ಅಡಿಯಲ್ಲಿ ಖಾಸಗಿ ದೂರು ದಾಖಲಾಗಿದೆ.‌

ಏನಿದು ಪ್ರಕರಣ:

2023 ರ ಲೋಕಸಭೆ ಚುನಾವಣೆಗೂ ಮುನ್ನ ಕಾಂಗ್ರೆಸ್ ಪಕ್ಷವು ಅಂದಿನ ಆಡಳಿತಾರೂಢ ಬಿಜೆಪಿಯನ್ನು ಭ್ರಷ್ಟ ಎಂದು ಲೇಬಲ್ ಮಾಡುವ ಜಾಹೀರಾತುಗಳನ್ನು ಪ್ರಕಟಿಸಿತ್ತು. 40 ಪರ್ಸೆಂಟ್ ಕಮಿಷನ್ ಆರೋಪದ ಜಾಹೀರಾತುಗಳನ್ನು ಪ್ರಕಟಿಸಿತ್ತು. ಇದರ ವಿರುದ್ಧ ಬಿಜೆಪಿಯ ಕರ್ನಾಟಕ ಘಟಕ ಮಾನನಷ್ಟ ಮೊಕದ್ದಮೆ ದಾಖಲಿಸಿತ್ತು. ಈ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರಿಗೆ ಖುದ್ದು ಹಾಜರಾಗುವಂತೆ ನ್ಯಾಯಾಲಯ ಸೂಚಿಸಿತ್ತು.

 

2023 ರ ಮೇ 5 ರಂದು ಕಾಂಗ್ರೆಸ್ ಪತ್ರಿಕೆಗಳಲ್ಲಿ ಜಾಹೀರಾತುಗಳನ್ನು ನೀಡಿತ್ತು. ಅದರಲ್ಲಿ, ಬಿಜೆಪಿ ಸರ್ಕಾರ ಕೋವಿಡ್ ಕಿಟ್ ಟೆಂಡರ್ ಡೀಲ್‌ಗಳಲ್ಲಿ ಶೇಕಡಾ 75, ಪಿಡಬ್ಲ್ಯೂಡಿ ಟೆಂಡರ್‌ಗಳಿಗೆ ಶೇಕಡಾ 40, ಧಾರ್ಮಿಕ ಸಂಸ್ಥೆಗಳಿಗೆ ಅನುದಾನ ಮತ್ತು ಇತರ ವ್ಯವಹಾರಗಳಿಗೆ ಶೇಕಡಾ 30 ರಷ್ಟು ಕಮಿಷನ್ ಪಡೆದಿದೆ ಎಂದು ಆರೋಪಿಸಿತ್ತು. ಈ ಬಗ್ಗೆ ಆರೋಪಿಸಿ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್ ಕೇಶವ ಪ್ರಸಾದ್ ಅವರು 2023 ರ ಮೇ 8 ರಂದು ನ್ಯಾಯಾಲಯಕ್ಕೆ ಸಲ್ಲಿಸಿದ ಖಾಸಗಿ ದೂರಿನ ಆಧಾರದ ಮೇಲೆ ಮಾನನಷ್ಟ ಮೊಕದ್ದಮೆಯನ್ನು ಕೈಗೆತ್ತಿಕೊಳ್ಳಲಾಗಿತ್ತು.

RELATED ARTICLES

Related Articles

TRENDING ARTICLES