ಒಡಿಶಾ : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ತೀವ್ರ ಚಂಡಮಾರುತ ರೂಪಗೊಳ್ಳುವ ಸಾಧ್ಯತೆ ಇರುವುದರಿಂದ ಒಡಿಶಾ ಸರ್ಕಾರ 800ಕ್ಕೂ ಹೆಚ್ಚು ಪರಿಹಾರ ಕೇಂದ್ರಗಳನ್ನು ಸಿದ್ಧಪಡಿಸಿದೆ. ಗಾಳಿ ವೇಗವಾಗಿ ಬೀಸುತ್ತಿದ್ದು ಮಾರುತಗಳು ಪೂರ್ವ ಕರಾವಳಿಯ ಕಡೆಗೆ ಚಲಿಸುತ್ತಿರುವುದರಿಂದ ಒಡಿಶಾದ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸುರಿಯುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಈಗಾಗಲೇ ತಗ್ಗು ಪ್ರದೇಶದಲ್ಲಿರುವ ಜನರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರ ಮಾಡಲಾಗಿದೆ. ಸಚಿವರು ಸೇರಿದಂತೆ ಹಿರಿಯ ಅಧಿಕಾರಿಗಳು 250 ಪರಿಹಾರ ಕೇಂದ್ರಗಳಿಗೆ ಭೇಟಿ ನೀಡಿದ್ದು ನೌಕರರಿಗೆ ಅಗತ್ಯ ಸೂಚನೆಗಳನ್ನು ಕೊಟ್ಟಿದ್ದಾರೆ. ಸ್ಥಳಾಂತರಗೊಳ್ಳುವ ಜನರಿಗೆ ಹಾಗೂ ಪರಿಹಾರ ಕೇಂದ್ರಗಳಲ್ಲಿ ಇರುವವರಿಗೆ ಆಹಾರ, ನೀರು, ಔಷಧಿ, ವಿದ್ಯುತ್ ಮತ್ತು ಇತರ ಅಗತ್ಯ ವಸ್ತುಗಳನ್ನು ಸಿದ್ಧಪಡಿಸಲಾಗಿದೆ ಎಂದು ಅವರು ಹೇಳಿದರು.
ಪರಿಹಾರ ಕೇಂದ್ರಗಳಲ್ಲಿ ಮಹಿಳಾ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸುವ ಮೂಲಕ ಮಹಿಳೆಯರಿಗೆ ಗುಣಮಟ್ಟದ ವ್ಯವಸ್ಥೆಗೆ ಆಧ್ಯತೆ ನೀಡಲಾಗಿದೆ. ಶೇ 100ರಷ್ಟು ಮರಣ ಪ್ರಮಾಣ ತಗ್ಗಿಸಲು ಸರ್ಕಾರ ಅಗತ್ಯ ಕ್ರಮಕೈಗೊಂಡಿದೆ ಎಂದು ಮುಖ್ಯಮಂತ್ರಿ ಮೋಹನ್ ಚರಣ್ ಮಜ್ಜಿ ಹೇಳಿದ್ದಾರೆ.
ಹವಮಾನ ಇಲಾಖೆಯ ವರದಿಯನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ ಎಷ್ಟೆಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬಹುದೊ ಎಲ್ಲಾ ಕ್ರಮಗಳನ್ನು ತೆಗೆದುಕೊಂಡು ಯಾವುದೇ ಜೀವ ಹಾನಿ ಆಗದಂತೆ ಕ್ರಮ ಕೈಗೊಳ್ಳಲಾಗಿದೆ.