ಉತ್ತರಪ್ರದೇಶ : ಝಾನ್ಸಿಯ ಮಹಾರಾಣಿ ಲಕ್ಷ್ಮೀಬಾಯಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ನವಜಾತ ಶಿಶುಗಳ ತೀವ್ರನಿಗಾ ಘಟಕದಲ್ಲಿ ಶುಕ್ರವಾರ ಅಗ್ನಿ ಅವಘಡ ಸಂಭವಿಸಿದ್ದು, ಕನಿಷ್ಠ 10 ಮಕ್ಕಳು ಮೃತ ಪಟ್ಟಿದ್ದಾರೆ ಎಂದು ಪ್ರಾಥಮಿಕ ವರದಿಗಳು ಹೇಳಿವೆ.
ರಾತ್ರಿ 10.45ರ ವೇಳೆಗೆ ಬೆಂಕಿ ಅವಘಡ ಸಂಭವಿಸಿದ್ದು. 37 ಮಕ್ಕಳನ್ನು ರಕ್ಷಿಸಲಾಗಿದೆ. ಸಾವಿನ ಸಂಖ್ಯೆ ಹೆಚ್ಚುವ ಸಾಧ್ಯತೆ ಇದೆ’ ಎಂದು ಜಿಲ್ಲಾಧಿಕಾರಿ ಅವಿನಾಶ್ ಕುಮಾರ್ ಹೇಳಿದ್ದಾರೆ. ‘ಶಾರ್ಟ್ ಸರ್ಕಿಟ್‌ನಿಂದಾಗಿ ಬೆಂಕಿ ಹೊತ್ತಿಕೊಂಡಿರುವ ಸಾಧ್ಯತೆ ಇದೆ. ಈ ಕುರಿತು ತನಿಖೆ ನಡೆಸುವುದಕ್ಕಾಗಿ ಸಮಿತಿ ರಚಿಸಲಾಗಿದೆ’ ಎಂದೂ ಹೇಳಿದ್ದಾರೆ. ದುರಂತದಲ್ಲಿ ಮಕ್ಕಳು ಮೃತ ಪಟ್ಟಿರುವ ಕುರಿತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರೂ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ. ಸುಟ್ಟು ಕರಕಲಾದ ದೇಹಗಳಿರುವ ವಿಡಿಯೊಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿವೆ.
ದುರಂತದಲ್ಲಿ ಸಾವಿಗೀಡಾದ ಮಕ್ಕಳ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರವನ್ನು ಘೋಷಣೆ ಮಾಡಿದ್ದು. ಗಾಯಗೊಂಡ ಮಕ್ಕಳ ಚಿಕಿತ್ಸೆಗಾಗಿ ತಲಾ 50 ಸಾವಿರ ಪರಿಹಾರವನ್ನು ಘೋಷಣೆ ಮಾಡಿದ್ದಾರೆ ಎಂದು ಮಾಹಿತಿ ದೊರೆತಿದೆ.