ಮುಂಬೈ : ಭಾರತದ ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರನ್ನು ಕಾಂಗ್ರೆಸ್ ನಿರಂತರವಾಗಿ ಅವಮಾನಿಸುತ್ತಿದೆ ಎಂದು ಕೇಂದ್ರ ಸಚಿವ ಹಾಗೂ ಲೋಕಜನಶಕ್ತಿ ಪಕ್ಷದ ಮುಖಂಡ ಚಿರಾಗ್ ಪಾಸ್ವಾನ್ ವಾಗ್ದಾಳಿ ನಡೆಸಿದ್ದಾರೆ.
ಮುಂಬೈನ ದಾದರ್‌ನಲ್ಲಿ ನಡೆದ ಚುನಾವಣಾ ರ‍್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ‘ಅಂಬೇಡ್ಕರ್ ಅವರ ಆದರ್ಶಗಳನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಶ್ರಮಿಸುತ್ತಿದ್ದಾರೆ. ಇದರಿಂದಾಗಿ ವಿರೋಧ ಪಕ್ಷಗಳ ನಾಯಕರು ಭಯಭೀತರಾಗಿದ್ದು, ಸಾರ್ವಜನಿಕವಾಗಿ ಸಂವಿಧಾನವನ್ನು ಪ್ರದರ್ಶಿಸುತ್ತಿದ್ದಾರೆ’ ಎಂದು ಕಿಡಿಕಾರಿದ್ದಾರೆ.
ಮುಂದುವರಿದು ಮಾತನಾಡಿದ ಚಿರಾಗ್, 1989ಕ್ಕಿಂತ ಮೊದಲು ಸಂಸತ್ ಭವನದ ಸೆಂಟ್ರಲ್ ಹಾಲ್‌ನಲ್ಲಿ ಅಂಬೇಡ್ಕರ್ ಅವರ ಚಿತ್ರವನ್ನು ಹಾಕಿರಲಿಲ್ಲ. ಒಂದೇ ಕುಟುಂಬದ ಮೂವರು ಸದಸ್ಯರ ಭಾವಚಿತ್ರಗಳು ಅಲ್ಲಿನ ಗೋಡೆಗಳನ್ನು ಅಲಂಕರಿಸಿದ್ದವು. ಇದು ಕಾಂಗ್ರೆಸ್ ಮನಸ್ಥಿತಿಯನ್ನು ಪ್ರತಿಬಿಂಬಿಸುತ್ತದೆ’ ಎಂದು ಪಾಸ್ವಾನ್ ಗುಡುಗಿದ್ದಾರೆ.