ಮುಂಬೈ : ಮಹಾರಾಷ್ಟ್ರದಲ್ಲಿ ‘ಮಹಾಯುತಿ’ ಮೈತ್ರಿಕೂಟದ ಹೊಸ ಸರ್ಕಾರ ಡಿಸೆಂಬರ್ 5ರಂದು ರಚನೆಯಾಗಲಿದೆ. ದೇವೇಂದ್ರ ಫಡ್ನವೀಸ್ ಅವರು ರಾಜ್ಯದ ಮುಂದಿನ ಮುಖ್ಯಮಂತ್ರಿ ಸರದಿಯ ಮುಂಚೂಣಿಯಲ್ಲಿದ್ದಾರೆ ಎಂದು ಬಿಜೆಪಿಯ ಹಿರಿಯ ನಾಯಕರೊಬ್ಬರು ಹೇಳಿದ್ದಾರೆ.
ಗುರುವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಅವರನ್ನು ಭೇಟಿ ಮಾಡಿದ್ದ ಉಸ್ತುವಾರಿ ಮುಖ್ಯಮಂತ್ರಿ ಏಕನಾಥ ಶಿಂದೆ, ದೇವೇಂದ್ರ ಫಡ್ನವೀಸ್ ಮತ್ತು ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರು ಮಹಾರಾಷ್ಟ್ರದ ಮುಂದಿನ ಸರ್ಕಾರ ರಚನೆ ಮತ್ತು ಅಧಿಕಾರ ಹಂಚಿಕೆಯ ಕುರಿತು ಚರ್ಚಿಸಿದ್ದರು.
ಶುಕ್ರವಾರ ನಡೆಯಬೇಕಿದ್ದ ಮಿತ್ರಪಕ್ಷಗಳ ಚುನಾಯಿತ ಶಾಸಕರ ಸಭೆ ರದ್ದಾಗಿದ್ದು, ಭಾನುವಾರ ನಡೆಯುವ ಸಂಭವವಿದೆ. ಇದರ ಬೆನ್ನಲ್ಲೇ ಉಸ್ತುವಾರಿ ಸಿ.ಎಂ ಏಕನಾಥ ಶಿಂದೆ ಅವರು ದಿಢೀರನೇ ಸತಾರಾ ಜಿಲ್ಲೆಯ ತನ್ನ ಹುಟ್ಟೂರಿಗೆ ತೆರಳಿದ್ದಾರೆ.
‘ಡಿಸೆಂಬರ್ 5ರಂದು ಹೊಸ ಸರ್ಕಾರದ ಪ್ರಮಾಣ ವಚನ ಕಾರ್ಯಕ್ರಮ ನಡೆಯಲಿದೆ. ಎರಡು ಬಾರಿ ಮುಖ್ಯಮಂತ್ರಿ ಮತ್ತು ಒಂದು ಬಾರಿ ಉಪಮುಖ್ಯಮಂತ್ರಿಯಾಗಿರುವ ದೇವೇಂದ್ರ ಫಡ್ನವೀಸ್ ಅವರು ನೂತನ ಸರ್ಕಾರದ ಮುಖ್ಯಮಂತ್ರಿ ಹುದ್ದೆಗೆ ಮುಂಚೂಣಿಯಲ್ಲಿದ್ದಾರೆ’ ಎಂದು ಬಿಜೆಪಿ ಹಿರಿಯ ನಾಯಕರೊಬ್ಬರು ತಿಳಿಸಿದ್ದಾರೆ.