ಬೆಂಗಳೂರು : ಚುನಾವಣಾ ಬಾಂಡ್ ಹೆಸರಿನಲ್ಲಿ ಸುಲಿಗೆ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಮಾಜಿ ಸಂಸದ ನಳೀನ್ ಕುಮಾರ್ ಕಟೀಲ್ ವಿರುದ್ಧ ದಾಖಲಾಗಿದ್ದ ಎಫ್ಐಆರ್ ರದ್ದುಗೊಳಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ.
ಎಫ್ಐಆರ್ ನಲ್ಲಿ ತನ್ನ ಹೆಸರಿರುವುದನ್ನು ಪ್ರಶ್ನಿಸಿ ಬಿಜೆಪಿ ನಾಯಕ ನಳಿನ್ ಕುಮಾರ್ ಕಟೀಲ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಎಂ. ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಎಫ್ಐಆರ್ ರದ್ದುಪಡಿಸಿದೆ.
ಚುನಾವಣಾ ಬಾಂಡ್ ಅಕ್ರಮಕ್ಕೆ ಸಂಬಂಧಿಸಿದ ಬೆಂಗಳೂರು ಮೂಲದ ವ್ಯಕ್ತಿಯೊಬ್ಬರು ಪೋಲಿಸ್ ಠಾಣೆಯಲ್ಲಿ ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ನಿರ್ಮಲಾ ಸೀತಾರಾಮನ್, ನಳೀನ್ ಕುಮಾರ್ ಕಟೀಲ್ ಸೇರಿ ಮತ್ತಿತರರ ವಿರುದ್ಧ ಪ್ರಕರಣ ದಾಖಲಾಗಿತ್ತು.
ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 384( ಸುಲಿಗೆಗೆ ಶಿಕ್ಷೆ) 120 ಬಿ (ಕ್ರಿಮಿನಲ್ ಪಿತೂರಿ) 34 (ಸಾಮಾನ್ಯ ಉದ್ದೇಶದೊಂದಿಗೆ ಹಲವಾರು ವ್ಯಕ್ತಿಗಳು ಮಾಡಿದ ಕಾರ್ಯಗಳು) ಅಡಿಯಲ್ಲಿ ಸೀತಾರಾಮನ್, ಇಡಿ ಅಧಿಕಾರಿಗಳು ಮತ್ತು ರಾಜ್ಯ ಮತ್ತು ರಾಷ್ಟ್ರ ಮಟ್ಟದ ಬಿಜೆಪಿ ಪದಾಧಿಕಾರಿಗಳ ವಿರುದ್ಧ ಎಫ್ ಐಆರ್ ದಾಖಲಾಗಿತ್ತು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೆಸರು ಕೂಡಾ ಎಫ್ಐಆರ್ ನಲ್ಲಿತ್ತು. ಆದರೆ ವಿಚಾರಣೆ ನಡೆಸಿದ ನ್ಯಾಯಾಲಯ ಈ ಪ್ರಕರಣವನ್ನು ರದ್ದುಗೊಳಿಸಿದೆ.