ದೆಹಲಿ : ಮಸೀದಿಗೆ ನುಗ್ಗಿ ಜೈ ಶ್ರೀ ರಾಮ್ ಎಂದು ಘೋಷಣೆ ಕೂಗಿದ ಆರೋಪದ ಮೇಲೆ ಇಬ್ಬರು ಆರೋಪಿಗಳ ವಿರುದ್ಧದ ಎಫ್‌ಐಆರ್ ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಯನ್ನು ಪರಿಶೀಲಿಸಲು ಸುಪ್ರೀಂ ಕೋರ್ಟ್ ಸೋಮವಾರ ಸಮ್ಮತಿಸಿದೆ.
ನ್ಯಾಯಮೂರ್ತಿಗಳಾದ ಪಂಕಜ್ ಮಿಥಾಲ್ ಮತ್ತು ಸಂದೀಪ್ ಮೆಹ್ತಾ ಅವರ ಪೀಠವು ಸೋಮವಾರ ಅರ್ಜಿಯ ವಿಚಾರಣೆ ನಡೆಸಿತು. ಈ ವೇಳೆ ನ್ಯಾಯಾಧೀಶರು ‘ಅವರು ನಿರ್ದಿಷ್ಟ ಧಾರ್ಮಿಕ ನುಡಿಗಟ್ಟು ಅಥವಾ ಹೆಸರನ್ನು ಕೂಗುತ್ತಿದ್ದರು. ಅದು ಹೇಗೆ ಅಪರಾಧ?. ಮಸೀದಿ ಆವರಣಕ್ಕೆ ನುಗ್ಗಿ ‘ಜೈ ಶ್ರೀರಾಮ್’ ಘೋಷಣೆ ಕೂಗಿದ ಆರೋಪಿಗಳ ಗುರುತು ಪತ್ತೆ ಹಚ್ಚಿದ್ದು ಹೇಗೆ?. ಆರೋಪಿಗಳ ಗುರುತು ಖಾತ್ರಿಪಡಿಸಿಕೊಳ್ಳುವ ಮುನ್ನ ಸಿಸಿಟಿವಿ ಇಲ್ಲವೇ ಇನ್ನಾವುದೆ ಪುರಾವೆಗಳನ್ನು ಪರಿಶೀಲಿಸಲಾಗಿದೆಯೇ ಎಂದು ನ್ಯಾಯಮೂರ್ತಿಗಳಾದ ಪಂಕಜ್ ಮಿತ್ತಲ್ ಮತ್ತು ಸಂದೀಪ್ ಮೆಹ್ರಾ ಅವರಿದ್ದ ಪೀಠ ದೂರುದಾರರ ಪರ ವಕೀಲರನ್ನು ಪ್ರಶ್ನಿಸಿತು.
ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ದೇವದತ್ತ್ ಕಾಮತ್ ವಾದ ಮಂಡಿಸಿ, ಎಫ್‌ಐಆರ್ ದಾಖಲಾದ 20 ದಿನಗಳ ನಂತರ ತನಿಖೆಯನ್ನು ಅವಧಿಗೂ ಮುನ್ನ ಸ್ಥಗಿತಗೊಳಿಸಲಾಗಿದೆ. ಮಸೀದಿಯಲ್ಲಿ ಧಾರ್ಮಿಕ ಘೋಷಣೆಗಳನ್ನು ಕೂಗುವುದು ಕೋಮು ಸೌಹಾರ್ದತೆಯನ್ನು ಪ್ರಚೋದಿಸುತ್ತದೆ ಎಂದು ಅವರು ವಾದಿಸಿದರು.
ಏನಿದು ಘಟನೆ ?
ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್, ಸೆಪ್ಟೆಂಬರ್ 24, 2023 ರಂದು ಇಬ್ಬರು ಅಪರಿಚಿತ ವ್ಯಕ್ತಿಗಳು ಮಸೀದಿ ಆವರಣಕ್ಕೆ ನುಗ್ಗಿ “ಜೈ ಶ್ರೀ ರಾಮ್” ಎಂದು ಕೂಗಿದರು ಮತ್ತು ಸ್ಥಳೀಯ ಮುಸ್ಲಿಮರಿಗೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ. ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಆರೋಪಿಗಳನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ.
ಆದಾಗ್ಯೂ, ಈ ಘಟನೆಯು ಸಾರ್ವಜನಿಕ ಕಿಡಿಗೇಡಿತನ ಅಥವಾ ಧಾರ್ಮಿಕ ಅಪಶ್ರುತಿಯನ್ನು ಉಂಟುಮಾಡಿದೆ ಎಂದು ಸೂಚಿಸಲು ಯಾವುದೇ ಪುರಾವೆಗಳಿಲ್ಲ ಎಂದು ಹೇಳಿದ ಹೈಕೋರ್ಟ್ ಪ್ರಕರಣವನ್ನು ವಜಾಗೊಳಿಸಿತು. ಕಾನೂನು ಪೂರ್ವನಿದರ್ಶನಗಳನ್ನು ಉಲ್ಲೇಖಿಸಿ, ಭಾರತೀಯ ದಂಡ ಸಂಹಿತೆ (IPC) ನಿಬಂಧನೆಗಳ ಅಡಿಯಲ್ಲಿ ಆಕ್ರಮಣಕಾರಿ ಎಂದು ಗ್ರಹಿಸಲಾದ ಪ್ರತಿಯೊಂದು ಕ್ರಿಯೆಯು ಕ್ರಿಮಿನಲ್ ಅಪರಾಧವಾಗಿ ಅರ್ಹತೆ ಪಡೆಯುವುದಿಲ್ಲ ಎಂದು ನ್ಯಾಯಾಲಯವು ತೀರ್ಪು ನೀಡಿದೆ.