ಬೆಂಗಳೂರು: ಟೀಂ ಇಂಡಿಯಾ ಮಾಜಿ ಕ್ರಿಕೆಟರ್ ರಾಬಿನ್ ಉತ್ತಪ್ಪ ಪಿಎಫ್ ಹಣ ಪಾವತಿಸದ ವಂಚನೆ ಆರೋಪಕ್ಕೆ ಸ್ಪಷ್ಟನೆ ನೀಡಿದ್ದಾರೆ. ಆರೋಪ ಹೊತ್ತಿರುವ ಕಂಪನಿಗೆ ಕೆಲ ವರ್ಷಗಳ ಹಿಂದೆಯೇ ನಾನು ರಾಜೀನಾಮೆ ನೀಡಿದ್ದೇನೆ. ಪ್ರಕರಣದಲ್ಲಿ ತಮ್ಮ ಪಾತ್ರವಿಲ್ಲ ಎಂದು ರಾಬಿನ್ ಉತ್ತಪ್ಪ ಸ್ಪಷ್ಟನೆ ನೀಡಿದ್ದಾರೆ.
ಸಾಮಜಿಕ ಜಾಲತಾಣದಲ್ಲಿ ಪತ್ರ ಬರೆದ ರಾಬಿನ್ ಉತ್ತಪ್ಪ !
2018-19ರಲ್ಲಿ ಸ್ಟ್ರಾಬೆರಿ ಲೆನ್ಸೆರಿಯಾ ಪ್ರೈವೇಟ್ ಲಿಮಿಟೆಡ್, ಸೆಂಟಾರಸ್ ಲೈಫ್ ಸ್ಟೈಲ್ ಬ್ರ್ಯಾಂಡ್ಸ್ ಪ್ರೈವೇಟ್ ಲಿಮಿಟೆಡ್, ಬೆರ್ರೀಸ್ ಫ್ಯಾಶನ್ ಹೌಸ್ ಕಂಪನಿಗಳಿಗೆ ಸಾಲದ ರೂಪದಲ್ಲಿ ಹಣಕಾಸು ತೊಡಗಿಸಿದ್ದೆ. ಇದೇ ಕಾರಣಕ್ಕೆ ಆ ಕಂಪನಿಗಳು ನನ್ನನ್ನ ನಿರ್ದೇಶಕನಾಗಿ ನೇಮಕಗೊಳಿಸಿದ್ದವು. ಆದಾಗ್ಯೂ ಸಹ ನಾನು ಆ ಕಂಪನಿಗಳಲ್ಲಿ ಯಾವುದೇ ಸಕ್ರಿಯ ಕಾರ್ಯನಿರ್ವಾಹಕ ಪಾತ್ರವನ್ನು ಹೊಂದಿರಲಿಲ್ಲ ಹಾಗೂ ಆ ಕಂಪನಿಗಳ ದೈನಂದಿನ ವ್ಯವಹಾರಗಳಲ್ಲಿ ನಾನು ಭಾಗಿಯಾಗಿರಲಿಲ್ಲ ಎಂದು ತಿಳಿಸಿದ್ದಾರೆ.
ಅಲ್ಲದೇ, ಆ ಕಂಪನಿಗಳ ವಿರುದ್ಧ ಪ್ರಸ್ತುತ ಕಾನೂನು ಪ್ರಕ್ರಿಯೆಗಳು ಚಾಲ್ತಿಯಲ್ಲಿವೆ. ಆರೋಪ ಎದುರಿಸುತ್ತಿರುವ ಕಂಪನಿಗಳಲ್ಲಿ ಉದ್ಯೋಗಿಗಳಿಗೆ ಬಾಕಿಯಿರುವ ಪಿಎಫ್ ಹಣ ಪಾವತಿಸುವಂತೆ ಒತ್ತಾಯಿಸಿ ಅಧಿಕಾರಿಗಳು ನೀಡಿರುವ ನೋಟಿಸ್‌ಗಳಿಗೆ ನನ್ನ ಕಾನೂನು ಸಲಹಾ ತಂಡವು ಪ್ರತಿಕ್ರಿಯಿಸಿದೆ. ಆ ಕಂಪನಿಗಳಲ್ಲಿ ನನ್ನ ಪಾತ್ರವಿಲ್ಲ ಎಂದು ದೃಢೀಕರಿಸುವ ದಾಖಲೆಗಳನ್ನ ಒದಗಿಸಿದೆ.
ಅದರ ಹೊರತಾಗಿಯೂ ಪಿಎಫ್ ಅಧಿಕಾರಿಗಳು ತಮ್ಮ ಪ್ರಕ್ರಿಯೆಗಳನ್ನು ಮುಂದುವರೆಸಿದ್ದಾರೆ. ಮುಂದಿನ ದಿನಗಳಲ್ಲಿ ಈ ವಿಷಯವನ್ನು ಬಗೆಹರಿಸಲು ನನ್ನ ಕಾನೂನು ಸಲಹೆಗಾರರು ಕ್ರಮ ಕೈಗೊಳ್ಳಲಿದ್ದಾರೆ ಎಂದು ರಾಬಿನ್ ಉತ್ತಪ್ಪ ವಿಚರಣೆ ನೀಡಿದ್ದಾರೆ.