ಇಸ್ಲಾಮಾಬಾದ್: ಪಹಲ್ಗಾಮ್ನಲ್ಲಿ ನಡೆದಿರುವ ಭಯೋತ್ಪಾದಕ ದಾಳಿಯಲ್ಲಿ 26 ಮಂದಿ ಅಮಾಯಕರ ಸಾವಿನ ನಂತರ ಭಾರತವು ಪಾಕ್ ಜೊತೆಗಿನ ರಾಜತಾಂತ್ರಿಕ ಸಂಬಂಧವನ್ನು ಕಡಿದುಕೊಂಡಿದೆ. ಸಿಂಧೂ ನದಿ ನೀರು ಒಪ್ಪಂದವನ್ನು ರದ್ದುಗೊಳಿಸಿದೆ. ಇದರ ಬೆನ್ನಲ್ಲೇ ಪಾಕ್ ಭದ್ರತಾ ಸಭೆ ನಡೆಸಿದ್ದು. ಈ ಸಭೆಯಲ್ಲಿ ಭಾರತ ನೀರು ನಿಲ್ಲಿಸಿದರೆ ಅದನ್ನು ಯುದ್ದದ ಕೃತ್ಯವೆಂದೆ ಪರಿಗಣಿಸುತ್ತೇವೆ ಎಂದು ಹೇಳಿದ್ದಾರೆ.
ಇದನ್ನೂ ಓದಿ :ರಾಜನಾಥ್ ಸಿಂಗ್ ನೇತೃತ್ವದಲ್ಲಿ ಸರ್ವಪಕ್ಷ ಸಭೆ ಆರಂಭ: ರಾಹುಲ್, ಖರ್ಗೆ ಹಾಜರ್
ಇಸ್ಲಾಮಾಬಾದ್‌ನಲ್ಲಿ ಪಾಕಿಸ್ತಾನದ ಮೂರು ಸೇನಾಪಡೆಗಳ ಮುಖ್ಯಸ್ಥರು, ಪ್ರಮುಖ ಸಚಿವರು, ಉನ್ನತ ನಾಗರಿಕ ಮತ್ತು ಮಿಲಿಟರಿ ಅಧಿಕಾರಿಗಳೊಂದಿಗೆ ಪಾಕ್ ಪ್ರಧಾನಿ ಷಹಬಾಜ್ ಷರೀಫ್ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಪಾಕಿಸ್ತಾನ ಪಾಲಿನ ನೀರನ್ನು ತಡೆಯಲು ಭಾರತ ಪ್ರಯತ್ನಿಸಿದ್ರೆ, ಅದನ್ನು ಯುದ್ಧದ ಕೃತ್ಯವೆಂದು ಪರಿಗಣಿಸುವುದಾಗಿ ಸಭೆಯಲ್ಲಿ ನಿರ್ಣಯಿಸಲಾಗಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಅಷ್ಟೇ ಅಲ್ಲದೇ ಇನ್ನು ಹಲವು ನಿರ್ಣಯಗಳನ್ನು ಅಂಗೀಕರಿಸಲಾಗಿದೆ.
ಪಾಕ್ ಸಭೆಯ ಪ್ರಮುಖ ನಿರ್ಣಯಗಳೇನು?
- ಸಿಂಧೂ ನದಿ ನೀರು ಒಪ್ಪಂದವನ್ನು ನಿಲ್ಲಿಸುವ ಭಾರತದ ನಿರ್ಧಾರವನ್ನು ಪಾಕಿಸ್ತಾನ ತಿರಸ್ಕರಿಸಿದೆ. ಈ ಒಪ್ಪಂದವು ವಿಶ್ವಬ್ಯಾಂಕ್ ಮಧ್ಯಸ್ಥಿಕೆ ವಹಿಸಿದ ಅಂತಾರಾಷ್ಟ್ರೀಯ ಒಪ್ಪಂದವಾಗಿದ್ದು, ಏಕಪಕ್ಷೀಯವಾಗಿ ಅಮಾನತುಗೊಳಿಸಲಾಗುವುದಿಲ್ಲ ಎಂದು NSC ಹೇಳಿದೆ.
- ಭಾರತವು ನೀರನ್ನು ನಿಲ್ಲಿಸಲು ಅಥವಾ ಬೇರೆಡೆಗೆ ತಿರುಗಿಸಲು ಪ್ರಯತ್ನಿಸಿದರೆ, ಅದನ್ನು ಯುದ್ಧದ ಕೃತ್ಯವೆಂದು ಪರಿಗಣಿಸಲಾಗುತ್ತದೆ ಮತ್ತು ಪೂರ್ಣ ಬಲದಿಂದ ಪ್ರತಿಕ್ರಿಯಿಸಲಾಗುತ್ತದೆ ಎಂದು ಪಾಕಿಸ್ತಾನ ಹೇಳಿದೆ
- ಶಿಮ್ಲಾ ಒಪ್ಪಂದ ಸೇರಿದಂತೆ ಭಾರತದೊಂದಿಗಿನ ಎಲ್ಲಾ ದ್ವಿಪಕ್ಷೀಯ ಒಪ್ಪಂದಗಳನ್ನು ನಾವು ಸ್ಥಗಿತಗೊಳಿಸುತ್ತಿದ್ದೇವೆ ಎಂದು ಪಾಕಿಸ್ತಾನ ಹೇಳಿದೆ.
- ಜೊತೆಗೆ ಪಾಕಿಸ್ತಾನ ಸಹ ವಾಘಾ ಗಡಿಯನ್ನು ತಕ್ಷಣದಿಂದಲೇ ಮುಚ್ಚುತ್ತಿದ್ದು, ಅನುಮತಿ ಇರುವವರು ಮಾತ್ರ ಏಪ್ರಿಲ್ 30ರ ಒಳಗೆ ಹಿಂದಿರುಗಬಹುದು.
- ಸಾರ್ಕ್ ವೀಸಾ ಯೋಜನೆಯಡಿಯಲ್ಲಿರುವ ಎಲ್ಲಾ ಭಾರತೀಯ ಪ್ರಜೆಗಳ ವೀಸಾಗಳನ್ನು ರದ್ದುಪಡಿಸಲಾಗಿದೆ. ಸಿಖ್ ಯಾತ್ರಿಕರಿಗೆ ಮಾತ್ರ ವಿನಾಯಿತಿ ನೀಡಲಾಗುವುದು. ಉಳಿದ ಭಾರತೀಯರು 48 ಗಂಟೆಗಳ ಒಳಗೆ ಪಾಕಿಸ್ತಾನ ತೊರೆಯುವಂತೆ ಸೂಚಿಸಲಾಗಿದೆ.
- ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಸೇನೆ, ನೌಕಾಪಡೆ ಮತ್ತು ವಾಯುಪಡೆಯ ಸಲಹೆಗಾರರಿಗೆ ಪಾಕಿಸ್ತಾನ ತೊರೆಯುವಂತೆ ಆದೇಶಿಸಲಾಗಿದೆ. ಅಲ್ಲದೆ, ಪಾಕಿಸ್ತಾನದಲ್ಲಿರುವ ಭಾರತೀಯ ಹೈಕಮಿಷನ್‌ನ ಸಿಬ್ಬಂದಿಯನ್ನ 30ಕ್ಕೆ ಇಳಿಸಲಾಗಿದೆ.
- ಭಾರತದೊಂದಿಗಿನ ಎಲ್ಲಾ ವ್ಯಾಪಾರ ಒಪ್ಪಂದ ಬಂದ್‌ಗೆ ನಿರ್ಧಾರ ಕೈಗೊಳ್ಳಲಾಗಿದೆ.