ಬೆಂಗಳೂರು: ಲೋಕಸಭಾ ಚುನಾವಣೆಗೆ ಕರ್ನಾಟಕದಲ್ಲಿ ಎರಡನೇ ಹಂತದ ನಾಮಿನೀಷನ್ಗೆ ಇಂದು ಕೊನೆಯ ದಿನವಾಗಿದೆ. ಕೊನೆಯ ದಿನವಾದ ಇಂದು ಘಟಾನುಘಟಿಗಳು ನಾಮಪತ್ರ ಸಲ್ಲಿಸಲಿದ್ದಾರೆ. ಉಮೇದುವಾರಿಕೆ ಸಲ್ಲಿಕೆ ವೇಳೆ ಶಕ್ತಿಪ್ರದರ್ಶನ ಮಾಡುವುದಕ್ಕೂ ರಾಜಕೀಯ ಮುಖಂಡರೂ ಸಜ್ಜಾಗಿದ್ದಾರೆ. ಸಂಜೆಯೊಳಗೆ ಎಲ್ಲಾ ಕ್ಷೇತ್ರಗಳ ಅಧಿಕೃತ ಅಭ್ಯರ್ಥಿಗಳ ಸ್ಪಷ್ಟ ಚಿತ್ರಣ ಲಭ್ಯವಾಗಲಿದೆ.
ಕಲಬುರಗಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಂಸದ ಮಲ್ಲಿಕಾರ್ಜುನ ಖರ್ಗೆ ಅವರು ಮಧ್ಯಾಹ್ನ 2 ಗಂಟೆಗೆ ನಾಮಪತ್ರ ಸಲ್ಲಿಸಲಿದ್ದಾರೆ. ದಾವಣಗೆರೆ ಕ್ಷೇತ್ರದ ಕಾಂಗ್ರೆಸ್, ಬಿಜೆಪಿ ಅಭ್ಯರ್ಥಿಗಳೂ ನಾಮಿನೇಷನ್ ಸಲ್ಲಿಸಲಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಹೆಚ್.ಬಿ.ಮಂಜಪ್ಪ ಅವರು ಬೆಳಗ್ಗೆ 11 ಗಂಟೆಗೆ ನಾಮಪತ್ರ ಸಲ್ಲಿಸಲಿದ್ದಾರೆ. ಬಿಜೆಪಿ ಅಭ್ಯರ್ಥಿ ಜಿ.ಎಂ.ಸಿದ್ದೇಶ್ವರ್ ಕೂಡ ನಾಮಪತ್ರ ಸಲ್ಲಿಸಲಿದ್ದಾರೆ. ಸಿದ್ದೇಶ್ವರ್ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ, ಶಾಸಕರಾದ ಈಶ್ವರಪ್ಪ, ಶ್ರೀರಾಮುಲು ಸಾಥ್ ನೀಡಲಿದ್ದಾರೆ.
ಕಾರವಾರದಲ್ಲಿ ಜೆಡಿಎಸ್ ಅಭ್ಯರ್ಥಿ ಆನಂದ್ ಅಸ್ನೋಟಿಕರ್ ನಾಮಪತ್ರ ಸಲ್ಲಿಸಲಿದ್ದಾರೆ. ನಾಮಪತ್ರ ಸಲ್ಲಿಕೆ ವೇಳೆ ಸಿಎಂ ಹೆಚ್.ಡಿ. ಕುಮಾರಸ್ವಾಮಿ, ಆರ್.ವಿ.ದೇಶಪಾಂಡೆ, ಮಧುಬಂಗಾರಪ್ಪ ಸೇರಿ ಹಲವು ನಾಯಕರು ಉಪಸ್ಥಿತರಿರಲಿದ್ದಾರೆ. ಹಾವೇರಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶಿವಕುಮಾರ್ ಉದಾಸಿ ಅವರೂ ನಾಮಿನೇಷನ್ ಸಲ್ಲಿಸಲಿದ್ದು, ಬಿಜೆಪಿ ನಾಯಕರು ಸಾಥ್ ನೀಡಲಿದ್ದಾರೆ. ಬಾಗಲಕೋಟೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗದ್ದಿಗೌಡರ್ ಮೆರವಣಿಗೆ ಮೂಲಕ ನಾಮಪತ್ರ ಸಲ್ಲಿಸಲಿದ್ದಾರೆ.