ಬೆಂಗಳೂರು : ಬಿಜೆಪಿ ಬ್ರಹ್ಮಾಂಡ ಭ್ರಷ್ಟಾಚಾರಕ್ಕೆ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರನ ಲಂಚ ಪ್ರಕರಣ ಸಾಕ್ಷಿ. ಇದನ್ನು ಕಣ್ಣಾರೆ ಕಂಡ ರಾಜ್ಯದ ಜನತೆ ಸಾಕಪ್ಪ.. ಸಾಕು 40% ಸರ್ಕಾರ ಅಂತಿದಾರೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಿಜೆಪಿ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಕಾಂಗ್ರೆಸ್ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಸಿದ್ದರಾಮಯ್ಯ ಅವರು, ಕೇವಲ ಪ್ರಶಾಂತ್ ಮಾಡಾಳ್ ಅವರನ್ನು ಬಂಧಿಸುವುದಲ್ಲ, ಅವರ ತಂದೆ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ತಕ್ಷಣ ಬಂಧಿಸಬೇಕು. ಬೊಮ್ಮಾಯಿ ಅವರು ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.
ರಾಜ್ಯ ಸರ್ಕಾರದ ವಿರುದ್ಧದ ಎಲ್ಲಾ ಭ್ರಷ್ಟಾಚಾರದ ಆರೋಪಗಳಿಗೆ ಮುಖ್ಯಮಂತ್ರಿ ಬೊಮ್ಮಾಯಿ ಅವರು ದಾಖಲೆ ಕೇಳುತ್ತಾರೆ. ಆದರೆ ನಮ್ಮ ಸರ್ಕಾರದ ಅವಧಿಯಲ್ಲಿ ಡಿವೈಎಸ್‌ಪಿ ಗಣಪತಿ ಆತ್ಮಹತ್ಯೆ ಮಾಡಿಕೊಂಡಾಗ ಜಾರ್ಜ್ ಅವರು ತಪ್ಪು ಮಾಡದಿದ್ದರೂ ರಾಜೀನಾಮೆ ನೀಡಿದ್ದರು. ನಾನು ಜಾರ್ಜ್ ಅವರಿಗೆ ನೀವು ರಾಜೀನಾಮೆ ಕೊಡುವುದು ಬೇಡ ಎಂದು ಹೇಳಿದ್ದೆ, ಆದರೂ ಅವರು ನೈತಿಕತೆ ಆಧಾರದಲ್ಲಿ ರಾಜೀನಾಮೆ ನೀಡಿದ್ದರು ಎಂದು ಹೇಳಿದ್ದಾರೆ.
ಇದನ್ನೂ ಓದಿ: ಸ್ವಾಭಿಮಾನಿ ಸುಮಲತಾ ‘ಕೈ’ಯಲ್ಲಿ ಕೇಸರಿ ಶಾಲು
ಬೊಮ್ಮಾಯಿಗೆ ಮಾನ ಮರ್ಯಾದಿ ಇದೆಯಾ?
ದೇವೇಗೌಡರು ನಮ್ಮ ವಿರುದ್ಧ ಒಂದಂಕಿ ಲಾಟರಿ ಆರೋಪ ಮಾಡಿದಾಗ ಕೂಡಲೇ ಪತ್ರಿಕಾಗೋಷ್ಠಿ ಕರೆದು ಅದನ್ನು ಸಿಬಿಐಗೆ ವಹಿಸಿದ್ದೆ. ಪರೇಶ್ ಮೇಸ್ತಾ ಎಂಬ ಯುವಕ ಕಾಲುಜಾರಿ ಬಿದ್ದು ಸತ್ತಾಗ ಅದನ್ನು ಕೊಲೆ ಎಂದು ದೊಂಬಿ, ಗಲಾಟೆ ಎಬ್ಬಿಸಿದರು, ಅದನ್ನು ಕೂಡ ಸಿಬಿಐ ತನಿಖೆಗೆ ವಹಿಸಿದ್ದೆ. ಈ ಯಾವುದೇ ಪ್ರಕರಣದಲ್ಲಿ ನಾವು ಬಿಜೆಪಿಯವರಿಂದ ದಾಖಲೆ ಕೇಳಿಲ್ಲ.
ನಮ್ಮ ಸರ್ಕಾರದ ಅವಧಿಯಲ್ಲಿ ಒಟ್ಟು 8 ಪ್ರಕರಣಗಳನ್ನು ಸಿಬಿಐ ತನಿಖೆಗೆ ವಹಿಸಿದ್ದೆ. ಇಂದು ಆ ಎಲ್ಲಾ ಪ್ರಕರಣಗಳಲ್ಲಿ ಸಿಬಿಐಬಿ ರಿಪೋರ್ಟ್ ನೀಡಿದೆ. ನಮ್ಮ ಮೇಲಿನ ಎಲ್ಲಾ ಆರೋಪಗಳು ಸುಳ್ಳು ಎಂದು ಸಾಬೀತಾಗಿದೆ. ಈ ಬಸವರಾಜ ಬೊಮ್ಮಾಯಿಗೆ ಮಾನ ಮರ್ಯಾದಿ ಇದೆಯಾ? ಅಧಿಕಾರಕ್ಕೆ ಅಂಟಿಕೊಂಡು ಕೂತಿದ್ದಾರೆ. ಒಂದನ್ನಾದರೂ ತನಿಖೆ ಮಾಡಿಸಿದ್ರಾ? ಎಂದು ಪ್ರಶ್ನೆ ಮಾಡಿದ್ದಾರೆ.
100 ಕೋಟಿ ಖರ್ಚು ಮಾಡಿದ್ರೂ ಆಶ್ಚರ್ಯವಿಲ್ಲ
ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು ಸೇರಿಕೊಂಡು ಮಂತ್ರಿಗಳು, ಶಾಸಕರು, ನಿಗಮ ಮಂಡಳಿ ಅಧ್ಯಕ್ಷರು ಇಂತಿಷ್ಟು ಲಂಚ ಕಲೆಕ್ಷನ್ ಮಾಡಿಕೊಡಬೇಕು ಎಂದು ನಿಗದಿ ಮಾಡಿದ್ದಾರೆ. ಅವರಿಗೆ ಈ ಬಾರಿ ಜಾತಿ, ಧರ್ಮಗಳ ಆಧಾರದಲ್ಲಿ ಚುನಾವಣೆ ಗೆಲ್ಲಲು ಸಾಧ್ಯವಿಲ್ಲ ಎಂಬುದು ಅರಿವಾಗಿದೆ. ಮುಂದಿನ ಚುನಾವಣೆಯಲ್ಲಿ ಪ್ರತೀ ವಿಧಾನಸಭಾ ಕ್ಷೇತ್ರದಲ್ಲಿ ಗೆಲ್ಲಲು ಕನಿಷ್ಠ 100 ಕೋಟಿ ಖರ್ಚು ಮಾಡಿದರೂ ಆಶ್ಚರ್ಯ ಇಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.