ಬೆಂಗಳೂರು : ಮಾಜಿ ಸಿಎಂ ಸಿದ್ದರಾಮಯ್ಯ ವರುಣಾದಿಂದ ಸ್ಪರ್ಧಿಸುವುದು ಖಚಿತವಾಗಿದೆ. ಈ ಕ್ಷೆತ್ರದ ಜೊತೆಗೆ ಅವರು ಇನ್ನೊಂದು ಕ್ಷೇತ್ರದಲ್ಲೂ ಸ್ಪರ್ಧೆ ಮಾಡುವ ಸಾಧ್ಯತೆಯಿದೆ.
ಮಾಜಿ ಸಿಎಂ ಸಿದ್ದರಾಮಯ್ಯರನ್ನು ಸೋಲಿಸಲು ಬಿಜೆಪಿ ರಣತಂತ್ರ ರೂಪಿಸಿದ್ದು, ಸಿದ್ದು ವಿರುದ್ಧ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರರನ್ನು ಕಣಕ್ಕಿಳಿಸಲು ತಯಾರಿ ನಡೆಸಲಾಗಿದೆ. ಪುತ್ರನ ರಾಜಕೀಯ ಭವಿಷ್ಯಕ್ಕಾಗಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ವರುಣಾ ಕ್ಷೇತ್ರ ಬೇಡವೆಂದು ಹೇಳಿದ್ದಾರೆ.
ಶಿಕಾರಿಪುರದಿಂದಲೇ ವಿಜಯೇಂದ್ರ ಸ್ಪರ್ಧೆ ಮಾಡ್ತಾರೆಂದು ಯಡಿಯೂರಪ್ಪ ಹೇಳಿದ್ದಾರೆ. ಬಿಜೆಪಿ ಹೈ ಕಮಾಂಡ್ ಯಡಿಯೂರಪ್ಪ ಹೇಳಿಕೆಯನ್ನು ಒಪ್ಪುತ್ತಾ ಅಥವಾ ವರುಣಾದಿಂದಲೇ ಸ್ಪರ್ಧಿಸಲಿ ಎನ್ನುತ್ತಾ ಎಂಬುದು ಸದ್ಯದ ಪ್ರಶ್ನೆಯಾಗಿದೆ.
ವರುಣಾನಾ ಅಥವಾ ಶಿಕಾರಿಪುರನಾ?
ವಿಜಯೇಂದ್ರ ಎರಡು ಕ್ಷೇತ್ರದಿಂದ ಕಣಕ್ಕಿಳಿಯುತ್ತಾರಾ ಎಂದು ಕಾದು ನೋಡಬೇಕಿದೆ. ಹೈ ಕಮಾಂಡ್ ವರುಣಾ ಮತ್ತು ಶಿಕಾರಿಪುರ ಎರಡು ಕ್ಷೇತ್ರಗಳಲ್ಲೂ ಕಣಕ್ಕಿಳಿಯುವಂತೆ ಸೂಚಿಸುತ್ತಾ ಎಂಬ ಚರ್ಚೆ ಬಲು ಜೋರಾಗಿದೆ.
ಯಡಿಯೂರಪ್ಪ ನಡೆಯೇನು?
ಸಿದ್ದರಾಮಯ್ಯ ಸ್ಪರ್ಧಿಸುತ್ತಿರುವ ವರುಣಾದಿಂದಲೇ ವಿಜಯೇಂದ್ರ ಸ್ಪರ್ಧೆಗೆ ಒತ್ತಡವಿದೆ. ಆದರೆ, ವರುಣಾದಲ್ಲಿ ಸ್ಪರ್ಧಿಸುವ ಪ್ರಶ್ನೆಯೇ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸ್ಪಷ್ಟನೆ ನೀಡಿದ್ದಾರೆ. ಈ ಮೂಲಕ ಬಿಜೆಪಿ ಹೈಕಮಾಂಡ್ ವಿಜಯೇಂದ್ರ ಎಲ್ಲಿ ಸ್ಪರ್ಧಿಸಬೇಕು ಎಂಬ ಬಗ್ಗೆ ನಿರ್ಧರಿಸುವ ಮೊದಲೇ ಪುತ್ರನ ಕ್ಷೇತ್ರವನ್ನು ಘೋಷಣೆ ಮಾಡಿದ್ದಾರೆ. ಆ ಮೂಲಕ ವಿಜಯೇಂದ್ರ ಶಿಕಾರಿಪುರದಿಂದ ಕಣಕ್ಕಿಳಿಯುವುದು ಅಂತಿಮವಾಗಿದೆ.