Friday, November 22, 2024

CRPF ಪರೀಕ್ಷೆಯಲ್ಲಿ ಕನ್ನಡ ನಿರ್ಲಕ್ಷ್ಯ : ‘ಮುಲಾಜಿಲ್ಲದೆ ಮರು ಪರೀಕ್ಷೆ ನಡೆಸಬೇಕು’ ಎಂದ ಕುಮಾರಸ್ವಾಮಿ

ಬೆಂಗಳೂರು: ಕೇಂದ್ರ ಮೀಸಲು ಪಡೆ (ಸಿಆರ್‌ಪಿಎಫ್‌) ನೇಮಕಾತಿಗೆ ನಡೆಸಲಾದ ಪರೀಕ್ಷೆಯನ್ನು ಕನ್ನಡದಲ್ಲಿ ನಡೆಸದಿರುವ ಕ್ರಮಕ್ಕೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ಕೇಂದ್ರ ಬಿಜೆಪಿ ಸರ್ಕಾರ ಮತ್ತೆ ಕನ್ನಡಿಗರಿಗೆ ಉಂಡೆನಾಮ ಹಾಕಿದೆ. ಭಾನುವಾರ ನಡೆದ ಕೇಂದ್ರೀಯ ಮೀಸಲು ಪಡೆ (ಸಿಆರ್‌ಪಿಎಫ್‌) ನೇಮಕಾತಿಗೆ ನಡೆಸಿದ ಕಂಪ್ಯೂಟರ್ ಪರೀಕ್ಷೆಯಲ್ಲಿ ಕನ್ನಡಕ್ಕೆ ಅವಕಾಶವನ್ನೇ ಕೊಟ್ಟಿಲ್ಲ. ಹಿಂದಿ ಮತ್ತು ಇಂಗ್ಲೀಷ್ ಭಾಷೆಯಲ್ಲಷ್ಟೇ ಪರೀಕ್ಷೆಗೆ ಅವಕಾಶ ಕೊಡಲಾಗಿದೆ. ಇದು ಖಂಡನೀಯ ಎಂದು ಹೇಳಿದ್ದಾರೆ.

ಒಟ್ಟು 9212 ಹುದ್ದೆಗಳಿಗೆ ನಡೆದ ಈ ಪರೀಕ್ಷೆ ನಡೆಸಲಾಗಿದ್ದು, ಅದರಲ್ಲಿ ಕರ್ನಾಟಕದ 466 ಹುದ್ದೆಗಳೂ ಸೇರಿವೆ. ದುರಂತ ಎಂದರೆ, ಇಷ್ಟು ಹುದ್ದೆಗಳನ್ನು ಬಯಸುವ ಅಭ್ಯರ್ಥಿಗಳು ಹಿಂದಿ, ಇಂಗ್ಲಿಷ್ ನಲ್ಲಿ ಪರೀಕ್ಷೆ ಬರೆದಿದ್ದಾರೆ, ಬರೆಯುವ ಅನಿವಾರ್ಯ ಸೃಷ್ಟಿಸಲಾಗಿದೆ. ಮಾತೃಭಾಷೆಯಲ್ಲಿ ಪರೀಕ್ಷೆ ಬರೆಯುವುದು ನಿರಾಕರಿಸುವುದು ಎಂದರೆ ಸಂವಿಧಾನಕ್ಕೆ ಎಸಗಿದ ಅಪಚಾರ ಎಂದು ಅವರು ಕಿಡಿಕಾರಿದ್ದಾರೆ.

ಹಿಂದಿ ಹೇರಿಕೆ ಮಾಡುವುದಷ್ಟೇ ದುರುದ್ದೇಶ

ಕೇಂದ್ರ ಸರ್ಕಾರ ತನ್ನ ಸುಪರ್ದಿಯಲ್ಲಿ ನಡೆಸುವ ಎಲ್ಲ ನೇಮಕಾತಿ ಪರೀಕ್ಷೆಗಳನ್ನು ಹಿಂದಿ, ಇಂಗ್ಲಿಷ್ ನಲ್ಲೇ ನಡೆಸುತ್ತಿದೆ. ಕೇವಲ ಹಿಂದಿ ಕೇಂದ್ರಿತ ನೇಮಕಾತಿ ಪ್ರಕ್ರಿಯೆ ಇತರೆ ಭಾಷಿಕರನ್ನು ಉದ್ಯೋಗ ವಂಚಿತರನ್ನಾಗಿಸುವುದು ಮಾತ್ರವಲ್ಲ, ಅನ್ಯ ಭಾಷೆಗಳನ್ನು ಹತ್ತಿಕ್ಕಿ ಹಿಂದಿ ಹೇರಿಕೆ ಮಾಡುವುದಷ್ಟೇ ದುರುದ್ದೇಶವಿರುವುದು ಸ್ಪಷ್ಟ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ : ‘ಮಾರಾಟಗಾರ’ ಬಂದಿದ್ದಕ್ಕೆ ಹುಲಿಗಳು ಮುನಿಸಿಕೊಂಡಿವೆ

ಅಷ್ಟೇ ಅಲ್ಲ, ಈ ಪರೀಕ್ಷೆಯಲ್ಲಿ ಅನೇಕ ಪ್ರಶ್ನೆಗಳನ್ನು ಹಿಂದಿ ಭಾಷೆಗೆ ಸಂಬಂಧಿಸಿದವು. ಅಲ್ಲಿಗೆ ಸ್ಪಷ್ಟ; ಹಿಂದಿಯೇತರ ಅಭ್ಯರ್ಥಿಗಳು ಈ ನೇಮಕಾತಿಯಲ್ಲಿ ಆಯ್ಕೆ ಆಗಬಾರದು ಹಾಗೂ ಉದ್ದೇಶಪೂರ್ವಕವಾಗಿಯೇ ಹೀಗೆ ಮಾಡಲಾಗಿದೆ. ಒಕ್ಕೂಟ ವ್ಯವಸ್ಥೆಗೆ ಇದು ಕೇಂದ್ರವೇ ಕೊಟ್ಟ ಮಾರಣಾಂತಿಕ ಪೆಟ್ಟು ಎಂದು ಕುಮಾರಸ್ವಾಮಿ ಅವರು ಅಭಿಪ್ರಾಯಪಟ್ಟಿದ್ದಾರೆ.

ತಮ್ಮ ರಾಜ್ಯಗಳಲ್ಲಿ ಉದ್ಯೋಗ ಪಡೆಯಲು ಅನ್ಯ ಭಾಷೆಯಲ್ಲಿ ಪರೀಕ್ಷೆ ಬರೆಯಬೇಕಾದ ಕರ್ಮ ದಕ್ಷಿಣ ಭಾರತ ರಾಜ್ಯಗಳ ಜನರದ್ದು. ಕನ್ನಡಿಗರೂ ಸೇರಿ ದಕ್ಷಿಣದ ಎಲ್ಲ ಭಾಷಿಕರು ಈ ಬಗ್ಗೆ ವಿರೋಧ ಮಾಡುತ್ತಲೇ ಇದ್ದರೂ ಕೇಂದ್ರ ಸರಕಾರ ಹಿಂದಿ ಹೇರಿಕೆಯನ್ನು ಮುಂದುವರಿಸಿದೆ ಎಂದು ಅವರು ಕಿಡಿ ಕಾರಿದ್ದಾರೆ.

ಮುಲಾಜಿಲ್ಲದೆ ಮರು ಪರೀಕ್ಷೆ ನಡೆಸಬೇಕು

ಮುಲಾಜಿಲ್ಲದೆ ಸಿಆರ್ ಪಿಎಫ್ ಮರು ಪರೀಕ್ಷೆ ನಡೆಸಬೇಕು ಹಾಗೂ ಕನ್ನಡ ಸೇರಿ ದೇಶದ ಎಲ್ಲ ಭಾಷೆಗಳಲ್ಲೂ ಬರೆಯಲು ಅಭ್ಯರ್ಥಿಗಳಿಗೆ ಅವಕಾಶ ನೀಡಬೇಕು. ಇಲ್ಲವಾದರೆ, ಈ ತಾರತಮ್ಯ ಹಾಗೂ ಹಿಂದಿ ಹೇರಿಕೆ ಇನ್ನೊಂದು ದೊಡ್ಡ ಹೋರಾಟಕ್ಕೆ ನಾಂದಿ ಆದೀತು ಎಂದು ಮಾಜಿ ಮುಖ್ಯಮಂತ್ರಿಗಳು ಎಚ್ಚರಿಕೆ ನೀಡಿದ್ದಾರೆ.

 

RELATED ARTICLES

Related Articles

TRENDING ARTICLES