ಬೆಂಗಳೂರು : ರಾಜ್ಯ ವಿಧಾನಸಭಾ ಚುನಾವಣೆ ಹೊಸ್ತಿನಲ್ಲಿಯೇ ಬಿಜೆಪಿಗೆ ಬಿಗ್ ಶಾಕ್ ಎದುರಾಗಿದೆ. ನಾಳೆಯೇ ನನ್ನ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದ್ದಾರೆ.
ಬೆಳಗ್ಗೆಯೇ ಶಿರಸಿಗೆ ತೆರಳಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ. ಬಳಿಕ ಬಿಜೆಪಿ ಸದಸ್ಯತ್ವಕ್ಕೆ ರಾಜೀನಾಮೆ ನೀಡುವುದಾಗಿ ಅವರು ಘೋಷಿಸಿದ್ದಾರೆ.
ಯಾಕೆ ನನಗೆ ಈ ಬಾರಿ ಟಿಕೆಟ್ ನೀಡಿಲ್ಲ ಎಂಬುದಕ್ಕೆ ಸೂಕ್ತ ಕಾರಣ ನೀಡಿ. ಎಲ್ಲಾ ಸರ್ವೇ ವರದಿಗಳಲ್ಲೂ ನನಗೆ ಗೆಲುವು ಸಿಗುತ್ತದೆ ಎಂದು ಬಂದಿದೆ. ಇಷ್ಟಾದರೂ ನನಗೆ ಯಾಕೆ ಟಿಕೆಟ್ ನೀಡುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಬಿಜೆಪಿ ರಾಜ್ಯ ಚುನಾವಣಾ ಉಸ್ತುವಾರಿ ಧರ್ಮೇಂದ್ರ ಪ್ರಧಾನ್, ಕೇಂದ್ರ ಸಚಿವ ಜೋಶಿ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿ ಇಂದು(ಏಪ್ರಿಲ್ 15) ರಾತ್ರಿ ಜಗದೀಶ್ ಶೆಟ್ಟರ್ ಮನವೊಲಿಸುವ ಪ್ರಯತ್ನ ನಡೆಸಿದರು. ಆದ್ರೆ, ಸಂಧಾನ ಸಭೆ ವಿಫಲವಾಗಿದ್ದು, ಇದೀಗ ಜಗದೀಶ್ ಶೆಟ್ಟರ್ ಅಂತಿಮವಾಗಿ ಬಿಜೆಪಿಗೆ ರಾಜೀನಾಮೆ ಘೋಷಣೆ ಮಾಡಿದರು. ಬಿಜೆಪಿ ನಾಯಕರ ಜೊತೆ ಸಂಧಾನ ಸಭೆ ಬಳಿಕ ಹುಬ್ಬಳ್ಳಿಯ ನಿವಾಸದಲ್ಲಿ ಜಗದೀಶ್ ಶೆಟ್ಟರ್ ಮತ್ತೆ ಸುದ್ದಿಗೋಷ್ಠಿ ನಡೆಸಿ ರಾಜೀನಾಮೆ ಘೋಷಿಸಿದರು.